ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಲಿಕೆಯನ್ನು ಕಡ್ಡಾಯಗೊಳಿಸುವ ಕೇರಳ ಸರ್ಕಾರದ ಪ್ರಸ್ತಾಪಿತ 'ಮಲೆಯಾಳಿ ಭಾಷಾ ಮಸೂದೆ-2025'ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಲಯಾಳಂ ಭಾಷಾ ಮಸೂದೆಯನ್ನು ಕೇರಳ ರಾಜ್ಯಪಾಲರ ಒಪ್ಪಿಗೆಗಾಗಿ ಕಳುಹಿಸಲಾಗಿದ್ದು, ಇದು ಗಡಿ ಪಟ್ಟಣಗಳಲ್ಲಿರುವ ಕನ್ನಡಿಗರನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಈ ಸಂಬಂಧ ಕೇರಳ ಮುಖ್ಯಮಂತ್ರಿಗೆ ಪತ್ರ ಬರೆದಿರುವ ಅವರು, ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಲಿಕೆಯನ್ನು ಕಡ್ಡಾಯಗೊಳಿಸಿರುವುದು ಸಂವಿಧಾನ ಖಾತರಿ ಮಾಡಿರುವ ಭಾಷಾ ಸ್ವಾತಂತ್ರ್ಯದ ಮೇಲಿನ ಪ್ರಹಾರವಾಗಿದೆ ಎಂದು ಕಿಡಿಕಾರಿದ್ದಾರೆ. ಇಂತಹದ್ದೊಂದು ಕಾನೂನು ಜಾರಿಗೆ ಬಂದರೆ ಕೇರಳದ ಗಡಿಜಿಲ್ಲೆಗಳಲ್ಲಿ ಮುಖ್ಯವಾಗಿ ಕಾಸರಗೋಡಿನಲ್ಲಿ ವಾಸಿಸುತ್ತಿರುವ ಕನ್ನಡಿಗರು ಮಾತೃಭಾಷೆಯನ್ನು ಕಲಿಯುವ ಅವಕಾಶದಿಂದ ವಂಚಿತರಾಗಲಿದ್ದಾರೆ. ಭಾಷಾ ಅಲ್ಪಸಂಖ್ಯಾತರ ಮೂಲಭೂತ ಹಕ್ಕನ್ನು ದಮನ ಮಾಡುವ ಇಂತಹ ನಡೆಯನ್ನು ಕೇರಳದ ಕಮ್ಯುನಿಸ್ಟ್ ಸರ್ಕಾರದಿಂದ ನಾವು ನಿರೀಕ್ಷಿಸಿರಲಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆ ಸುಜಾತಾ ಹಂಡೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ಸ್ ಪೆಕ್ಟರ್ ಒಬ್ಬರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. ಪ್ರಕರಣದ ತನಿಖೆಗೆ ವಿಶೇಷ ತಂಡ ರಚನೆ ಮಾಡಿ ಕಮಿಷ್ನರ್ ಎನ್ ಶಶಿಕುಮಾರ್ ಆದೇಶ ಹೊರಡಿಸಿದ್ದಾರೆ. ಈ ನಡುವೆ ಕೇಶ್ವಾಪುರ ಠಾಣೆ ಇನ್ಸ್ ಪೆಕ್ಟರ್ ಎಸ್.ಕೆ.ಹಟ್ಟಿಯನ್ನು ವರ್ಗಾವಣೆ ಮಾಡಲಾಗಿದ್ದು ಘಂಟಿಕೇರಿ ಠಾಣೆಯ ಇನ್ಸ್ ಪೆಕ್ಟರ್ ಜಾದವ್ ಅವರನ್ನು ಕೇಶ್ವಾಪುರ ಠಾಣೆ ಹೆಚ್ಚುವರಿ ಪ್ರಭಾರಿಯನ್ನಾಗಿ ನೇಮಕ ಮಾಡಲಾಗಿದೆ. ಪೊಲೀಸರ ವರ್ತನೆ ಖಂಡಿಸಿ ಬಿಜೆಪಿ ಕಾರ್ಯಕರ್ತರು ಹುಬ್ಬಳ್ಳಿಯ ಕೇಶ್ವಾಪುರ ಠಾಣೆಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದರು. ವಿವಸ್ತ್ರಗೊಳಿಸಿ ಬಿಜೆಪಿ ಕಾರ್ಯಕರ್ತೆ ಬಂಧನಕ್ಕೆ ದೇಶವ್ಯಾಪ್ತಿ ಅಸಮಾಧಾನ ವ್ಯಕ್ತವಾಗಿದ್ದು ಈ ಪ್ರಕರಣದ ತನಿಖೆಯನ್ನು ಸಿಐಡಿಗೆ ನೀಡುವ ಬಗ್ಗೆ ಚರ್ಚೆ ನಡೆಯುತ್ತಿದೆ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ.
ಬೊಮ್ಮನಹಳ್ಳಿಯ ಪ್ರತಿಷ್ಠಿತ ಖಾಸಗಿ ಡೇಂಟಲ್ ಕಾಲೇಜಿನಲ್ಲಿ ಮೂರನೇ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಡೆಂಟಲ್ ಕಾಲೇಜು ಆಡಳಿತ ಮಂಡಳಿಯ ಕಿರುಕುಳದಿಂದ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೋಷಕರು ಆರೋಪಿಸಿದ್ದಾರೆ. ಮೃತಳನ್ನು 23 ವರ್ಷದ ಯಶಸ್ವಿನಿ ಎಂದು ಗುರುತಿಸಲಾಗಿದೆ. ವಿದ್ಯಾರ್ಥಿನಿ ಸ್ನೇಹಿತರು ನ್ಯಾಯಕ್ಕಾಗಿ ಆಗ್ರಹಿಸಿ ಶವಾಗಾರದ ಮುಂದೆ ಪ್ರತಿಭಟನೆ ನಡೆಸಿದರು. ಸೆಮಿನಾರ್ ಗೆ ಅವಕಾಶ ನೀಡದೇ ವಿದ್ಯಾರ್ಥಿನಿಗೆ ಕಾಲೇಜಿನಲ್ಲಿ ಕಿರುಕುಳ ನೀಡಿ ಅವಮಾನಿಸಲಾಗಿದೆ. ಇದರಿಂದ ನೊಂದು ವಿದ್ಯಾರ್ಥಿನಿ ದುಡುಕಿನ ನಿರ್ಧಾರ ಕೈಗೊಂಡು ಸಾವಿಗೆ ಶರಣಾಗಿದ್ದಾಳೆ. ಮಗಳನ್ನು ಕಳೆದುಕೊಂಡು ಪೋಷಕರು ಕಣ್ಣೀರು ಹಾಕುತ್ತಿದ್ದು ಕಾಲೇಜಿನ ಪ್ರಾಂಶುಪಾಲ ಹಾಗೂ ಪ್ರಾಧ್ಯಾಪಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ತುಮಕೂರಿ ಕೋರಾ ಸಮೀಪದ ವಸಂತನರಸಾಪುರ ಕೈಗಾರಿಕಾ ಪ್ರದೇಶದ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಅಯ್ಯಪ್ಪ ಮಾಲಾಧಾರಿಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪ್ಪಯ್ಯನ ದರ್ಶನಕ್ಕಾಗಿ ಕೊಪ್ಪಳದಿಂದ ಕೇರಳಕ್ಕೆ ಯಲಬುರ್ಗಾ ಮೂಲದ ಅಪ್ಪಯ್ಯ ಮಾಲಾಧಾರಿಗಳು ಕ್ರೂಸರ್ ವಾಹನದಲ್ಲಿ ತೆರಳುತ್ತಿದ್ದರು. ಆದರೆ ಇಂದು ಬೆಳಗ್ಗೆ 5 ಗಂಟೆ ಸುಮಾರಿಗೆ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತದಲ್ಲಿ ಓರ್ವ ಬಾಲಕಿ ಸೇರಿದಂತೆ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು ಇನ್ನೂ ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಬಳ್ಳಾರಿಯಲ್ಲಿ ನಡೆದ ಬ್ಯಾನರ್ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆಯನ್ನ ತೀವ್ರಗೊಳಿಸಿದ್ದಾರೆ. ಈ ಮಧ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರೈಮ್ ನಂಬರ್ 4ರಲ್ಲಿನ 25 ಆರೋಪಿಗಳಿಗೆ ಜಾಮೀನು ನೀಡಿ ಬೆಂಗಳೂರಿನ 42ನೇ ಎಸಿಜೆಎಂ ಕೋರ್ಟ್ ಆದೇಶ ಹೊರಡಿಸಿದೆ. ಪ್ರಕರಣದ ಪ್ರಮುಖ ಆರೋಪಿ ಖಾಸಗಿ ಗನ್ ಮ್ಯಾನ್ ಗುರುಚರಣ್ ಸಿಂಗ್ಗೆ ಬಳಿಯಿದ್ದ ಗನ್‌ನಿಂದ 12 ಎಂಎಂ ಬುಲೆಟ್ ಫೈರ್ ಮಾಡಿದ್ದನು. ಬಳ್ಳಾರಿ ಬ್ಯಾನರ್ ಗಲಾಟೆ ಸಂಬಂಧ ಬ್ರೂಸ್‌ಪೇಟೆ ಠಾಣೆಯಲ್ಲಿ ಒಟ್ಟು 6 ಪ್ರಕರಣ ದಾಖಲಾಗಿವೆ. ಗನ್‌ಮ್ಯಾನ್‌ಗಳಾದ ಗುರುಚರಣ್ ಸಿಂಗ್, ಬಲ್ಜಿತ್ ಸಿಂಗ್ ಹಾಗೂ ಮಹೇಂದ್ರ ಸಿಂಗ್ ಸೇರಿದಂತೆ ಕಾಂಗ್ರೆಸ್‌ನ 10, ಬಿಜೆಪಿಯ 11 ಕಾರ್ಯಕರ್ತರು ಸೇರಿದಂತೆ ಒಟ್ಟು 26 ಜನರನ್ನು ಪೊಲೀಸರು ಬಂಧಿಸಿದ್ದರು. ಅಂದು ಗುಂಡೇಟು ಬಿದ್ದು ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ ಎಂಬಾತ ಮೃತಪಟ್ಟಿದ್ದನು.