ಹಾಸನ: ಹಾಸನ ಜಿಲ್ಲೆಯಲ್ಲಿ ಮಾನವ–ಕಾಡಾನೆ ಸಂಘರ್ಷ ಮುಂದುವರೆದಿದ್ದು, ಸಕಲೇಶಪುರ ತಾಲ್ಲೂಕಿನ ಮೋಗಲಿ ಗ್ರಾಮದಲ್ಲಿ ಮಂಗಳವಾರ ಬೆಳಗ್ಗೆ ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆಯೊಬ್ಬರು ಬಲಿಯಾಗಿದ್ದಾರೆ.
ಮೃತ ಮಹಿಳೆಯನ್ನು ಶೋಭಾ(40) ಎಂದು ಗುರುತಿಸಲಾಗಿದೆ. ಇಂದು ಬೆಳಗ್ಗೆ ಕಾಫಿ ತೋಟದಲ್ಲಿ ಸುಣ್ಣ ಹಚ್ಚುವ ಕೆಲಸಕ್ಕೆ ಶೋಭ ತೆರಳಿದ್ದರು. ಈ ವೇಳೆ ಏಕಾಏಕಿ ದಾಳಿ ನಡೆಸಿದ ಕಾಡಾನೆ, ಮಹಿಳೆಯನ್ನು ತುಳಿದು ಕೊಂದಿದೆ.
ಘಟನೆಯ ಬಳಿಕ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕಾಡಾನೆ ದಾಳಿಯಿಂದ ಮಹಿಳೆ ಮೃತಪಟ್ಟಿದ್ದಕ್ಕೆ ಆಕ್ರೋಶಗೊಂಡ ಗ್ರಾಮಸ್ಥರು, ಮೃತದೇಹವನ್ನು ಸ್ಥಳದಲ್ಲೇ ಇಟ್ಟು ಧರಣಿ ನಡೆಸಿದರು. ಅರಣ್ಯಾಧಿಕಾರಿಗಳ ನಿರ್ಲಕ್ಷ್ಯವೇ ಈ ದುರ್ಘಟನೆಗೆ ಕಾರಣ ಎಂದು ಆರೋಪಿಸಿದರು.
ಕಾಡಾನೆಗಳ ಸಂಚಾರದ ಬಗ್ಗೆ ಮುಂಚಿತವಾಗಿಯೇ ಜನರಿಗೆ ಮಾಹಿತಿ ನೀಡುತ್ತಿಲ್ಲ. ಪುಂಡಾನೆಗಳನ್ನು ಸೆರೆಹಿಡಿಯುತ್ತಿಲ್ಲ ಹಾಗೂ ರೆಡಿಯೋ ಕಾಲರ್ ಅಳವಡಿಸದೆ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.
ಅರಣ್ಯ ಸಚಿವರಿಂದ ಸಂತಾಪ
ಕಾಡಾನೆ ದಾಳಿಯಿಂದ 40 ವರ್ಷದ ಕಾರ್ಮಿಕ ಮಹಿಳೆ ಮೃತಪಟ್ಟ ಘಟನೆಗೆ ಅರಣ್ಯ ಸಚಿವ ಈಶ್ವರ್ ಬಿ ಖಂಡ್ರೆ ಅವರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.
ವನ್ಯಜೀವಿ ಇಲಾಖೆಯ ಹಿರಿಯ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಧಾವಿಸಿ ಆನೆಯನ್ನು ಕಾಡಿಗೆ ಹಿಂತಿರುಗಿಸಲು ಅಥವಾ ಸೆರೆಹಿಡಿಯಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಅವರು ಸೂಚಿಸಿದ್ದಾರೆ.
ಹಾಸನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ತಕ್ಷಣ ಸ್ಥಳಕ್ಕೆ ಹೋಗಿ ಪರಿಸ್ಥಿತಿಯನ್ನು ಪರಿಹರಿಸುವಂತೆ ಸಚಿವರು ಸೂಚಿಸಿದ್ದಾರೆ.
"ಪ್ರತಿಯೊಂದು ಜೀವವೂ ಅಮೂಲ್ಯ; ಕಳೆದುಹೋದ ಜೀವವನ್ನು ಮರಳಿ ತರಲು ಸಾಧ್ಯವಿಲ್ಲ" ಎಂದು ಈಶ್ವರ್ ಖಂಡ್ರೆ ಅವರು ಹೇಳಿದ್ದಾರೆ.