ಬೆಂಗಳೂರು: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ(MGNREGA)ಗೆ ಸಂಬಂಧಿಸಿದ ವಿಷಯಗಳ ಕುರಿತು ಚರ್ಚಿಸಲು ರಾಜ್ಯ ಸರ್ಕಾರ ಜನವರಿ 22ರಿಂದ ಒಂದು ವಾರ ವಿಧಾನಮಂಡಲ ವಿಶೇಷ ಅಧಿವೇಶನ ಕರೆದಿದೆ.
ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಜನವರಿ 22ರಿಂದ 31ರ ವರೆಗೆ ವಿಶೇಷ ಅಧಿವೇಶನ ನಡೆಸಲು ನಿರ್ಧರಿಸಲಾಗಿದೆ.
ಸಚಿವ ಸಂಪುಟ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್ ಕೆ ಪಾಟೀಲ್ ಅವರು, ಜನವರಿ 22ರಂದು ಉಭಯ ಸದನ ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಲಿದ್ದಾರೆ ಎಂದರು.
ಕೇಂದ್ರ ಸರ್ಕಾರ ಮನರೇಗಾ ಯೋಜನೆ ಹೆಸರು ಬದಲಾವಣೆ ಮಾಡಿದ್ದು, ಈ ಬಗ್ಗೆ ವಿಶೇಷ ಅಧಿವೇಶನದಲ್ಲಿ ಚರ್ಚಿಸಲು ನಿರ್ಧರಿಸಲಾಗಿದೆ. ಅಲ್ಲದೆ ಈ ವಿಶೇಷ ಅಧಿವೇಶನದಲ್ಲಿ ವಿಬಿಜಿ ರಾಮ್‌ಜಿ ಕಾಯ್ದೆಯನ್ನು ಹಿಂಪಡೆದು ಮನರೇಗಾ ಕಾಯ್ದೆಯನ್ನೇ ಮರು ಸ್ಥಾಪಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ನಿರ್ಣಯ ಅಂಗೀಕರಿಸುವ ಸಾಧ್ಯತೆ ಇದೆ.
ಕಳೆದ ವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ವಿಬಿಜಿ ರಾಮ್‌ಜಿ ಕಾಯ್ದೆಯನ್ನು ವಿರೋಧಿಸಿ ನಿರ್ಣಯವನ್ನು ಕೈಗೊಳ್ಳಲಾಗಿತ್ತು. ಅಲ್ಲದೆ, ಈ ಕಾಯ್ದೆ ವಿರುದ್ಧ ಕಾನೂನು ಹೋರಾಟ ನಡೆಸುವತೀರ್ಮಾನವನ್ನು ರಾಜ್ಯಸರ್ಕಾರ ಕೈಗೊಂಡಿತ್ತು.