ಬಾಗಲಕೋಟೆ: ಬಾದಾಮಿ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ಪ್ರಸ್ತುತ ಸರ್ಕಾರದ ಅವಧಿಯಲ್ಲಿಯೂ ಮುಂದುವರಿಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಹೇಳಿದ್ದಾರೆ.
ಬಾದಾಮಿಯ ಐತಿಹಾಸಿಕ ಪರಂಪರೆಯನ್ನು ಸಾರುವ ಚಾಲುಕ್ಯ ಉತ್ಸವ ಕಳೆದು ಹತ್ತು ವರ್ಷಗಳಿಂದ ನಡೆದಿರಲಿಲ್ಲ. ಆದರೆ 2025-26ರ ಬಜೆಟ್‌ನಲ್ಲಿ ಘೋಷಿಸಿದಂತೆ ಈಗ ಚಾಲುಕ್ಯ ಉತ್ಸವಕ್ಕೆ ಚಾಲನೆ ನೀಡಲು ಸಂತೋಷವಾಗುತ್ತಿದೆ ಎಂದು ಸಿಎಂ ತಿಳಿಸಿದ್ದಾರೆ.
ಇಂದು ಬಾದಾಮಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬಾದಾಮಿಯ ಶ್ರೀಮಂತ ಐತಿಹಾಸಿಕ ಪರಂಪರೆಯನ್ನು ಪ್ರದರ್ಶಿಸುವ ಚಾಲುಕ್ಯ ಉತ್ಸವವನ್ನು ಉದ್ಘಾಟಿಸಲು ಸಂತೋಷವಾಗುತ್ತಿದೆ ಎಂದರು.
ಬಾದಾಮಿ ಕ್ಷೇತ್ರದ ಅಭಿವೃದ್ಧಿಯ ಕುರಿತಾದ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ, ಕಳೆದ ಬಾರಿ ನಾನು ಶಾಸಕನಾಗಿದ್ದ ಸಂದರ್ಭದಲ್ಲಿ ಬಾದಾಮಿ ಕ್ಷೇತ್ರದ ಅಭಿವೃದ್ಧಿಗೆ ಅನೇಕ ಯೋಜನೆಗಳನ್ನು ಕೈಗೊಳ್ಳಲಾಗಿತ್ತು. ಇದೇ ಅಭಿವೃದ್ಧಿಯನ್ನು ಈಗಿನ ಶಾಸಕರು ಮುಂದುವರೆಸಿದ್ದಾರೆ ಎಂದರು.
ಬಾದಾಮಿ ಕ್ಷೇತ್ರದಲ್ಲಿ ಮೇಣದಬಸದಿಗೆ ಹೋಗುವ ರಸ್ತೆ ಅಭಿವೃದ್ಧಿಗೆ ಸಂಬಂಧಿಸಿದಂತೆ ಪ್ರವಾಸೋದ್ಯಮ ಸಚಿವರು ಕ್ಲಿಯರೆನ್ಸ್ ನೀಡಿದ್ದು, ಯೋಜನೆಯನ್ನು ಶೀಘ್ರದಲ್ಲಿ ಕೈಗೆತ್ತಿಕೊಳ್ಳಲಾಗುವುದು. ನಮ್ಮ ಸರ್ಕಾರದ ಅವಧಿಯಲ್ಲಿಯೇ ಇಲ್ಲಿನ ಆಭಿವೃದ್ಧಿ ಕಾರ್ಯಗಳು ನಡೆಯುತ್ತವೆ ಎಂದರು.