ಚಿಕ್ಕಬಳ್ಳಾಪುರ: ಜಿಲ್ಲೆಯ ಅಗಲಗುರ್ಕಿ ಬಳಿ ಮಂತ್ರಾಲಯಕ್ಕೆ ಹೋಗುತ್ತಿದ್ದ ಖಾಸಗಿ ಸ್ಲೀಪರ್ ಬಸ್ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಒಬ್ಬ ವ್ಯಕ್ತಿ ಸಾವಿಗೀಡಾಗಿದ್ದು, 10 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಪಘಾತದಲ್ಲಿ ಒಟ್ಟು 11 ಪ್ರಯಾಣಿಕರು ಗಾಯಗೊಂಡಿದ್ದು, ಒಬ್ಬ ಪ್ರಯಾಣಿಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಬಸ್ ಕ್ಲೀನರ್ ಸೇರಿದಂತೆ ಇಬ್ಬರು ಗಂಭೀರ ಗಾಯಗೊಂಡಿದ್ದಾರೆ. ಎಲ್ಲ ಗಾಯಾಳುಗಳನ್ನು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸುಗಮ್ ಟ್ರಾವೆಲ್ಸ್‌ಗೆ ಸೇರಿದ ಖಾಸಗಿ ಸ್ಲೀಪರ್ ಬಸ್ ಮೈಸೂರಿನಿಂದ ಬೆಂಗಳೂರು ಮೂಲಕ ಮಂತ್ರಾಲಯಕ್ಕೆ ತೆರಳುತ್ತಿತ್ತು. ಬೆಂಗಳೂರು-ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಬಸ್ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬಸ್‌ನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಪಘಾತದಲ್ಲಿ ಬಸ್ ಚಾಲಕ ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾನೆ. ಬಸ್ಸಿನೊಳಗೆ ಸಿಲುಕಿಕೊಂಡಿದ್ದ ಒಬ್ಬ ಪ್ರಯಾಣಿಕನನ್ನು ಸ್ಥಳೀಯರು ಮತ್ತು ರಕ್ಷಣಾ ಸಿಬ್ಬಂದಿ ಸುರಕ್ಷಿತವಾಗಿ ರಕ್ಷಿಸಿದ್ದಾರೆ.
ಪೊಲೀಸ್ ವರಿಷ್ಠಾಧಿಕಾರಿ ಅಪಘಾತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.