ಉತ್ತರ ಕನ್ನಡ: ಭಟ್ಕಳದ ಮಹಿಳೆಯರಿಗೆ ಅಶ್ಲೀಲ ಸಂದೇಶಗಳನ್ನು ಕಳುಹಿಸಿ ನಕಲಿ ಸಾಮಾಜಿಕ ಮಾಧ್ಯಮ ಖಾತೆಗಳ ಮೂಲಕ ಬ್ಲ್ಯಾಕ್‌ಮೇಲ್ ಮಾಡಿದ ಆರೋಪದ ಮೇಲೆ ಭಟ್ಕಳ ಪೊಲೀಸರು 19 ವರ್ಷದ ಯುವಕನನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಭಟ್ಕಳ ಬಳಿಯ ಹೊನ್ನಾವರ ತಾಲ್ಲೂಕಿನ ಮಂಕಿ ಮೂಲದ, ಕುಮಟಾದ ತುಳಸಿ ಕಟ್ಟೆ ನಿವಾಸಿ ಮೆಹ್ರಾನ್ ಮೆಹ್ತಾಬ್ ಶಾಬಂದರಿ ಎಂದು ಗುರುತಿಸಲಾಗಿದೆ.
ಆರೋಪಿ ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ಬಿಸಿಎ ವ್ಯಾಸಂಗ ಮಾಡುತ್ತಿದ್ದ ಎನ್ನಲಾಗಿದೆ.
ಅಪರಿಚಿತ ವ್ಯಕ್ತಿಗಳ ವಿವಾಹದಂತಹ ಕಾರ್ಯಕ್ರಮಗಳಲ್ಲಿ ಆರೋಪಿಯು ರಹಸ್ಯವಾಗಿ ಮಹಿಳೆಯರ ಫೋಟೋಗಳನ್ನು ತೆಗೆದುಕೊಂಡು ಅವುಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಅಪ್‌ಲೋಡ್ ಮಾಡುತ್ತಿದ್ದನು ಮತ್ತು ಅವರಿಗೆ ಇಮೇಲ್ ಮೂಲಕ ಅಶ್ಲೀಲ ಸಂದೇಶಗಳನ್ನು ಕಳುಹಿಸುತ್ತಿದ್ದನು. ಆರೋಪಿ ಬಳಿ 18 ಇಮೇಲ್ ಐಡಿಗಳಿದ್ದವು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಆರೋಪಿಯು ಮಹಿಳೆಯರಿಗೆ ನಗ್ನ ಫೋಟೋಗಳನ್ನು ಕಳುಹಿಸುವಂತೆ ಒತ್ತಡ ಹೇರುವ ಮೂಲಕ ಕಿರುಕುಳ ನೀಡುತ್ತಿದ್ದನು. ಫೋಟೋ ಕಳುಹಿಸದಿದ್ದರೆ ಹಿಂದೂ ಧಾರ್ಮಿಕ ನಾಯಕರ ಹೆಸರುಗಳನ್ನು ಉಲ್ಲೇಖಿಸಿ ಆಕೆಯ ಕೊಲೆ ಸೇರಿದಂತೆ ಭೀಕರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕುತ್ತಿದ್ದನು ಎಂದು ಅಧಿಕಾರಿ ಹೇಳಿದ್ದಾರೆ.
ಭಟ್ಕಳದ ಮಹಿಳೆಯೊಬ್ಬರು ಭಟ್ಕಳ ಪಟ್ಟಣ ಪೊಲೀಸ್ ಠಾಣೆಗೆ ದೂರು ನೀಡಿದ ನಂತರ ಈ ಪ್ರಕರಣ ಬೆಳಕಿಗೆ ಬಂದಿದೆ. ನಂತರ ಈ ಪ್ರಕರಣವನ್ನು ಸೈಬರ್ ಅಪರಾಧ ವಿಭಾಗಕ್ಕೆ ವರ್ಗಾಸಲಾಯಿತು. ತನಿಖೆಯ ನಂತರ ಆರೋಪಿಯನ್ನು ಬಂಧಿಸಲಾಗಿದೆ.
ಆರೋಪಿಯ ಬಂಧನದ ನಂತರ, ಅನೇಕರು ಈಗ ಪೊಲೀಸರಿಗೆ ದೂರು ನೀಡಿದ್ದಾರೆ. ಭಟ್ಕಳ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.
ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.