ಹುಬ್ಬಳ್ಳಿಯ ಮಂಟೂರ ರಸ್ತೆಯಲ್ಲಿ ಶನಿವಾರ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ಹಮ್ಮಿಕೊಂಡಿರುವ ಮನೆ ಹಂಚಿಕೆಯ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಅಳವಡಿಸಿದ್ದ ಬೃಹತ್ ಕಟೌಟ್‌ಗಳು ಮುರಿಬಿದ್ದಿದ್ದು, ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ. ಒಟ್ಟು 42,345 ಮನೆಗಳ ಹಂಚಿಕೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಅನೇಕ ಸಚಿವರು ಆಗಮಿಸುವುದಕ್ಕೂ ಮುನ್ನವೇ ಈ ಅವಘಡ ಸಂಭವಿಸಿದೆ. ಕಾರ್ಯಕ್ರಮದ ಹಿನ್ನೆಲೆಯಲ್ಲಿ ವೇದಿಕೆಯ ಮುಂಭಾಗದಲ್ಲಿ ಸಿಎಂ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಸೇರಿದಂತೆ ಹಲವು ನಾಯಕರ ಬೃಹತ್ ಕಟೌಟ್‌ಗಳನ್ನು ಅಳವಡಿಸಲಾಗಿತ್ತು. ಅದೃಷ್ಟವಶಾತ್ ದೊಡ್ಡ ಅವಘಡ ಸಂಭವಿಸಿಲ್ಲ.
ಶಕ್ತಿ ಕೇಂದ್ರ ವಿಧಾನ ಸೌಧದ ಮುಂದೆಯೇ ವ್ಯಕ್ತಿಯೊಬ್ಬ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಶನಿವಾರ ಮಧ್ಯಾಹ್ನ ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ಡಾ. ನಾಗೇಂದ್ರ ಎಂದು ಗುರುತಿಸಲಾಗಿದ್ದು, ಸ್ಥಳದಲ್ಲಿದ್ದ ವಿಧಾನಸೌಧ ಪೊಲೀಸರು ತಕ್ಷಣ ಸ್ಪಂದಿಸಿ, ಅವರನ್ನು ಬೌರಿಂಗ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ವೈದ್ಯರ ಪ್ರಕಾರ ಡಾ. ನಾಗೇಂದ್ರ ಅವರ ಸ್ಥಿತಿ ಗಂಭೀರವಾಗಿದ್ದು ಚಿಕಿತ್ಸೆ ಮುಂದುವರಿದಿದೆ. ಅಕ್ರಮ ಬಾಂಗ್ಲಾದೇಶ ವಲಸಿಗರನ್ನು ಗುರುತಿಸಿದ್ದಕ್ಕೆ ಪೊಲೀಸರಿಂದ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿ ಡಾ. ನಾಗೇಂದ್ರಪ್ಪ ಅವರು ವಿಧಾನಸೌಧದ ಮುಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಡಾ. ನಾಗೇಂದ್ರಪ್ಪ ಮತ್ತು ಪುನೀತ್ ಕೆರೆಹಳ್ಳಿ ಇಬ್ಬರೂ ನಗರದಲ್ಲಿ ಅಕ್ರಮ ಬಾಂಗ್ಲಾ ನಿವಾಸಿಗಳನ್ನು ತೋರಿಸಿದ್ದರು. ಈ ಹಿನ್ನಲೆಯಲ್ಲಿ ದೂರು ನೀಡಿದವರ ವಿರುದ್ಧವೇ ಪ್ರಕರಣ ದಾಖಲಾಗಿದೆ ಎಂದು ಹೇಳಲಾಗಿದೆ. ಅದಾದ ನಂತರ ಸೂಲದೇವನಹಳ್ಳಿ ಪೊಲೀಸರಿಂದ ನಿರಂತರ ಕಿರುಕುಳ ಅನುಭವಿಸುತ್ತಿದ್ದ ಅವರು ಮನನೊಂದು ಇಂದು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ತಿಳಿದುಬಂದಿದೆ.
ಸರ್ಕಾರಿ ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ನೀಡಿದ್ದು, ಜನಪ್ರತಿನಿಧಿಗಳ ದೂರವಾಣಿ ಕರೆ ರಿಸೀವ್ ಮಾಡಲೇಬೇಕು ಎಂದು ಸುತ್ತೋಲೆ ಹೊರಡಿಸಲಾಗಿದೆ. ಶಾಸಕರು, ಪರಿಷತ್ ಸದಸ್ಯರ, ಸಂಸದರ ಫೋನ್ ಕರೆ ಸ್ವೀಕರಿಸುವ ಸಂಬಂಧ ಸರ್ಕಾರಿ ಅಧಿಕಾರಿಗಳಿಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಒಂದು ವೇಳೆ ಕರೆ ಬಂದಾಗ ಇತರ ಕೆಲಸಗಳಲ್ಲಿ ವ್ಯಸ್ತರಾಗಿದ್ದಲ್ಲಿ, ಮರಳಿ ಕರೆ ಮಾಡಿ ಮಾತನಾಡಬೇಕು ಎಂದು ಮುಖ್ಯಕಾರ್ಯದರ್ಶಿಗಳು ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
ರಾಜ್ಯ ರಾಜಕಾರಣದಲ್ಲಿ ಭಾರೀ ಸದ್ದು ಮಾಡಿದ ಬಳ್ಳಾರಿ ಬ್ಯಾನರ್ ಕಾಂಗ್ರೆಸ್ ಕಾರ್ಯಕರ್ತ ಗುಂಡೇಟಿಗೆ ಬಲಿಯಾದ ಪ್ರಕರಣ ಮಾಸುವ ಮುನ್ನವೇ ಬಳ್ಳಾರಿಯಲ್ಲಿ ಮತ್ತೊಂದು ಕೃತ್ಯ ನಡೆದಿದೆ. ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಹಾಗೂ ಶ್ರೀರಾಮುಲುಗೆ ಸೇರಿದ ಸೇರಿದ ಜಿ ಸ್ಕೈರ್ ಲೇಔಟ್ನಲ್ಲಿರುವ ಮಾಡೆಲ್ ಹೌಸ್ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಕಾಂಗ್ರೆಸ್ನವರೇ ಬೆಂಕಿ ಹಚ್ಚಿದ್ದಾರೆ ಎನ್ನುವ ಗಂಭೀರ ಆರೋಪ ಕೇಳಿಬಂದಿದೆ. ಕಂಟೋನೆಂಟ್ ಪ್ರದೇಶದ ಜಿ-ಸ್ಟ್ರಾರ್‌ಲೇಔಟ್‌ನಲ್ಲಿ ಜನಾರ್ದನ ರೆಡ್ಡಿ ಸುಮಾರು 73 ಕೋಟಿ ವೆಚ್ಚದಲ್ಲಿ ಮಾದರಿ ಮನೆ ನಿರ್ಮಿಸಿದ್ದರು. ಲೇಔಟ್‌ನಲ್ಲಿ ಮಾದರಿ ಮನೆಗಳನ್ನು ನಿರ್ಮಿಸುವ ಸಂಬಂಧ ಗ್ರಾಹಕರಿಗೆ ತೋರಿಸಲು ಈ ಮನೆ ನಿರ್ಮಿಸಲಾಗಿತ್ತು. ಶುಕ್ರವಾರ ಸಂಜೆ ದುಷ್ಕರ್ಮಿಗಳು ಸ್ಥಳಕ್ಕೆ ತೆರಳಿ, ರೆಡ್ಡಿಯ ಮಾಡೆಲ್ ಹೌಸ್‌ನ ಬಾಗಿಲು, ಕಿಟಕಿಗಳನ್ನು ಮುರಿದು ಹಾಕಿದ್ದು, ಕಿಟಕಿಯ ಗಾಜುಗಳನ್ನು ಒಡೆದು ಹಾಕಿದ್ದಾರೆ. ಬಳಿಕ, ಪೆಟ್ರೋಲ್ ಹಾಕಿ ಬೆಂಕಿ ಹಚ್ಚಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಅಗ್ನಿ ಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮನೆಯ ಕಿಟಕಿಗಳು, ಕಂಬಗಳು ಸೇರಿದಂತೆ ಕಟ್ಟಿಗೆಯಿಂದ ತಯಾರಿಸಿದ ವಸ್ತುಗಳು ಅಗ್ನಿಗಾಹುತಿಯಾಗಿವೆ.