ಬೆಂಗಳೂರು: ಇತ್ತೀಚಿನ ವರ್ಗಾವಣೆಗಳ ನಂತರ ವಾಣಿ ವಿಲಾಸ ಆಸ್ಪತ್ರೆ ತಜ್ಞ ವೈದ್ಯರ ಕೊರತೆ ಎದುರಿಸುತ್ತಿತ್ತು. ಇದೀಗ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ರಾಷ್ಟ್ರೀಯ ಆರೋಗ್ಯ ಮಿಷನ್(NHM) ಅಡಿಯಲ್ಲಿ ಆರು ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರನ್ನು (OBG) ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಆದೇಶಿಸಿದೆ.
ಆಯುಕ್ತರ ಪ್ರಸ್ತಾವನೆಯ ಪ್ರಕಾರ, ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರದ ಅಡಿಯಲ್ಲಿ ಬರುವ ಘೋಷಾ ಆಸ್ಪತ್ರೆಯಲ್ಲಿ ಮತ್ತು ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಅಡಿಯಲ್ಲಿ ಬರುವ ವಾಣಿ ವಿಲಾಸ ಆಸ್ಪತ್ರೆಯಲ್ಲಿ ಸಮಗ್ರ ಪ್ರಸೂತಿ ಸೇವೆಗಳನ್ನು ಬಲಪಡಿಸಲು ಈ ಕ್ರಮ ತೆಗೆದುಕೊಳ್ಳಲಾಗುತ್ತಿದೆ. ಈ ಪ್ರಕ್ರಿಯೆಯ ಭಾಗವಾಗಿ, ವಾಣಿ ವಿಲಾಸ ಆಸ್ಪತ್ರೆಯ ನಾಲ್ಕು ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರನ್ನು ಘೋಷಾ ಆಸ್ಪತ್ರೆಗೆ ವರ್ಗಾಯಿಸಲಾಗಿದೆ.
ಈ ವರ್ಗಾವಣೆಯಿಂದಾಗಿ ಪ್ರತಿದಿನ ಸುಮಾರು 400 ಹೊರರೋಗಿಗಳು ಮತ್ತು 120 ಒಳರೋಗಿಗಳ ಭಾರೀ ಹೊರೆಯನ್ನು ನಿರ್ವಹಿಸುವ ವಾಣಿ ವಿಲಾಸ ಆಸ್ಪತ್ರೆಯಲ್ಲಿ ತಜ್ಞ ವೈದ್ಯರ ಕೊರತೆ ನೀಗಿದಂತಾಗಿದೆ.
ಅಸ್ತಿತ್ವದಲ್ಲಿರುವ ಸಿಬ್ಬಂದಿಯ ಮೇಲಿನ ಒತ್ತಡ ಮತ್ತು ನಿರಂತರ ಪ್ರಸೂತಿ ಮತ್ತು ಸ್ತ್ರೀರೋಗ ಸೇವೆಗಳನ್ನು ಖಚಿತಪಡಿಸಿಕೊಳ್ಳುವ ಅಗತ್ಯವನ್ನು ಗಮನದಲ್ಲಿಟ್ಟುಕೊಂಡು, ವಾಣಿ ವಿಲಾಸ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರು ಹೆಚ್ಚುವರಿ ತಜ್ಞ ವೈದ್ಯರ ನೇಮಕಾತಿಗೆ ಅನುಮೋದನೆ ಕೋರಿದ್ದರು.
ಪ್ರಸ್ತಾವನೆಯನ್ನು ಪರಿಶೀಲಿಸಿದ ನಂತರ, ಆರೋಗ್ಯ ಇಲಾಖೆಯು NHM ಯೋಜನೆಯಡಿಯಲ್ಲಿ ನಿಗದಿತ ನಿಯಮಗಳು ಮತ್ತು ಮಾರ್ಗಸೂಚಿಗಳಿಗೆ ಅನುಸಾರವಾಗಿ ಗುತ್ತಿಗೆ ಆಧಾರದ ಮೇಲೆ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರ ಆರು ಹುದ್ದೆಗಳನ್ನು ಭರ್ತಿ ಮಾಡಲು ಆದೇಶಿಸಿದೆ. ನೇಮಕಗೊಂಡ ತಜ್ಞರ ವೇತನ ಮತ್ತು ಸಂಬಂಧಿತ ವೆಚ್ಚಗಳನ್ನು ಸಂಪೂರ್ಣವಾಗಿ NHM ನಿಧಿಯಿಂದ ಭರಿಸಲಾಗುತ್ತದೆ.