ಉಡುಪಿ: ಸಾಮಾಜಿಕ ಜಾಲತಾಣಗಳಲ್ಲಿ ದ್ವೇಷ ಪ್ರಚೋದನೆಯ ಪೋಸ್ಟ್ ಮಾಡಿದ ಆರೋಪದ ಮೇಲೆ ಇಬ್ಬರನ್ನು ಬಂಧಿಸಿರುವುದಾಗಿ ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
ಆರೋಪಿಗಳನ್ನು ಬ್ರಹ್ಮಾವರದ ವಾರಂಬಳ್ಳಿ ನಿವಾಸಿ ಹಾಗೂ ಕುಂದಾಪುರದ ಶಿಕ್ಷಕರ ಸಹಕಾರಿ ಬ್ಯಾಂಕ್‌ನ ಮ್ಯಾನೇಜರ್ ಸಂತೋಷ್ ಕುಮಾರ್ ಶೆಟ್ಟಿ (56) ಮತ್ತು ಕಲ್ಪತರು ಇಂಡಸ್ಟ್ರೀಸ್ ನಡೆಸುತ್ತಿರುವ ಕೋಟೇಶ್ವರ ನಿವಾಸಿ ಕೆ ನಾಗರಾಜ್ (62) ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇವರಿಬ್ಬರೂ ಕೋಮು ದ್ವೇಷ ಪ್ರಚೋದಿಸುವ ಹಾಗೂ ಸಾರ್ವಜನಿಕ ಸುವ್ಯವಸ್ಥೆಗೆ ಭಂಗ ತರುವಂತಹ ಪೋಸ್ಟ್ ನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಆದರೆ, ಹೆಚ್ಚಿನ ವಿವರಣೆ ನೀಡಿಲ್ಲ.
ಈ ಸಂಬಂಧ ಜನವರಿ 29 ರಂದು ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 196 (1) (ಧರ್ಮ, ಜನಾಂಗ, ಜನ್ಮ ಸ್ಥಳ, ವಾಸಸ್ಥಳ ಅಥವಾ ಭಾಷೆಯ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷ ಪ್ರಚೋದನೆ ಮತ್ತು 353 (2) ಮತ್ತು ಭಾರತೀಯ ನ್ಯಾಯ ಸಂಹಿತೆಯ ಇತರ ನಿಬಂಧನೆಗಳ ಅಡಿಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ.