ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯ ಮಾಡಲಾಗಿದೆ. ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ರಾಜ್ಯದ ಸರ್ಕಾರಿ ನೌಕರರು ಖಾದಿ ಬಟ್ಟೆ ಧರಿಸಿಕೊಂಡು ಕಚೇರಿಗೆ ಹೋಗಬೇಕು. ಬರುವ ಏಪ್ರಿಲ್ 24ರಂದು ಈ ಯೋಜನೆಗೆ ಚಾಲನೆ ದೊರೆಯಲಿದೆ.
ಖಾದಿ ಉತ್ಪನ್ನಗಳನ್ನು ಉತ್ತೇಜಿಸುವ ಉದ್ದೇಶದಿಂದ ಸರ್ಕಾರಿ ಹಾಗೂ ಸರ್ಕಾರಿ ಸ್ವಾಮ್ಯದ ನಿಗಮ-ಮಂಡಳಿ, ಪ್ರಾಧಿಕಾರ, ವಿಶ್ವವಿದ್ಯಾಲಯ, ಅನುದಾನಿತ ಸಂಸ್ಥೆಗಳ ಅಧಿಕಾರಿ, ನೌಕರರು ಸ್ವಯಂ ಪ್ರೇರಣೆಯಿಂದ ಖಾದಿ ಬಟ್ಟೆಗಳನ್ನು ಧರಿಸುವ ಸಂಬಂಧ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ.
ವಿಧಾನಸೌಧದಲ್ಲಿ ಸಂರಕ್ಷಿಸಲಾಗಿರುವ ಛಾಯಾಚಿತ್ರಗಳು 1940, 1950 ಮತ್ತು 1960 ರ ದಶಕಗಳಲ್ಲಿ ಮುಖ್ಯಮಂತ್ರಿಗಳು, ಮಂತ್ರಿಗಳು ಮತ್ತು ಶಾಸಕರು ನಿಯಮಿತವಾಗಿ ಖಾದಿಯಲ್ಲಿ ಕಾಣಿಸಿಕೊಂಡಿದ್ದ ಯುಗಕ್ಕೆ ಸಾಕ್ಷಿಯಾಗಿದೆ. ಇದು ಗಾಂಧಿವಾದಿ ಆದರ್ಶಗಳು ಮತ್ತು ರಾಷ್ಟ್ರೀಯ ಸೇವೆಗೆ ಅಘೋಷಿತ ಪ್ರತಿಜ್ಞೆಯಾಗಿದೆ.
ಉಡುಪಿನಲ್ಲಿನ ಬದಲಾವಣೆಯು ವರ್ತನೆಯಲ್ಲಿ ಬದಲಾವಣೆಗೆ ಪ್ರೇರಣೆ ನೀಡಬಹುದು. ಸರ್ಕಾರಿ ಕೆಲಸ ದೇವರ ಕೆಲಸ ಎಂದು ಘೋಷಿಸುವ ವಿಧಾನಸೌಧದ ಮೇಲಿನ ಶಾಸನವು ಇದನ್ನೇ ಪ್ರತಿಧ್ವನಿಸುತ್ತದೆ ಎಂದು ಮುಖ್ಯ ಕಾರ್ಯದರ್ಶಿಗಳು ಸಭೆಯಲ್ಲಿ ಹೇಳಿದರು.
ಸಭೆಯಲ್ಲಿ ತೆಗೆದುಕೊಂಡ ನಿರ್ಧಾರಗಳು
ಪ್ರತಿ ತಿಂಗಳ ಮೊದಲ ಶನಿವಾರದಂದು ಎಲ್ಲಾ ಅಧಿಕಾರಿ, ನೌಕರರು ಖಾದಿ ಬಟ್ಟೆಗಳನ್ನು ಧರಿಸಿ ಕರ್ತವ್ಯ ನಿರ್ವಹಿಸುವುದು.
ಸರ್ಕಾರಿ ಸ್ವಾಮ್ಯದ ಖಾದಿ ಗ್ರಾಮೋದ್ಯೋಗ ಮಂಡಳಿಯ ಮಳಿಗೆಗಳಲ್ಲಿ ಖಾದಿ ಬಟ್ಟೆಗಳನ್ನು ಖರೀದಿಸುವುದು.
ಖಾದಿ ಗ್ರಾಮೋದ್ಯೋಗ ಮಂಡಳಿಯು ಹಾಲಿ ನೀಡುತ್ತಿರುವ ರಿಯಾಯಿತಿಯ ಹೊರತಾಗಿ ಅಧಿಕಾರಿ, ನೌಕರರಿಗೆ ಶೇ. 5ರಷ್ಟು ಹೆಚ್ಚುವರಿ ರಿಯಾಯಿತಿ ನೀಡುವುದು.
ಪುರುಷ ನೌಕರರು ಖಾದಿ ಬಟ್ಟೆಯ ಶರ್ಟ್,ಪ್ಯಾಂಟ್, ಒವರ್ ಕೋಟ್ ಹಾಗೂ ಇತರೆ ಶಿಸ್ತಿನ ಉಡುಗೆಗಳು.
ಮಹಿಳಾ ನೌಕರರು ಖಾದಿ ಹಾಗೂ ಖಾದಿ ಸಿಲ್ಕ್ ಬಟ್ಟೆಯ ಸೀರೆ, ಚೂಡಿದಾರ್ ಇತರೆ ಶಿಸ್ತಿನ ಉಡುಗೆಗಳು.
ಎಂಎಸ್ಐಎಲ್ ಸಂಸ್ಥೆಯ ಮೂಲಕ ಸೇನಾ ಕ್ಯಾಂಟೀನ್ ಮಾದರಿಯಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ದಿನಬಳಕೆ ವಸ್ತುಗಳನ್ನು ರಿಯಾಯಿತಿ ದರದಲ್ಲಿ ಪೂರೈಸಲು ‘ಸರ್ಕಾರಿ ನೌಕರರ ಕ್ಯಾಂಟೀನ್’ ಪ್ರಾರಂಭಿಸಲು 2026-27ನೇ ಸಾಲಿನ ಆಯ-ವ್ಯಯದಲ್ಲಿ ಈ ಯೋಜನೆಯನ್ನು ಘೋಷಣೆ ಮಾಡುವುದು.
ಕೆಎಸ್ಐಸಿ ಸಂಸ್ಥೆಯು ಭಾರತೀಯ ಆಡಳಿತ ಸೇವೆಯ ಅಧಿಕಾರಿಗಳು ಖರೀದಿಸುವ ರೇಷ್ಮೆ ಸೀರೆ ಮತ್ತು ರೇಷ್ಮೆ ವಸ್ತ್ರಗಳಿಗೆ ಹೆಚ್ಚುವರಿ ಶೇ.5% ವಿಶೇಷ ರಿಯಾಯಿತಿ ನೀಡುತ್ತಿರುವ ಮಾದರಿಯಲ್ಲೇ ರಾಜ್ಯ ಸರ್ಕಾರದ ಎಲ್ಲಾ ಅಧಿಕಾರಿ, ನೌಕರರಿಗೂ ಹೆಚ್ಚುವರಿ ಶೇ. 5 ವಿಶೇಷ ರಿಯಾಯಿತಿ ನೀಡುವುದು.