ಶಿವಮೊಗ್ಗ: ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಸದಾ “ಮಲತಾಯಿ” ಧೋರಣೆ ತೋರಿಸುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆರೋಪಿಸಿದ್ದು, ಕೇಂದ್ರದಿಂದ ರಾಜ್ಯಕ್ಕೆ ಸಿಗಬೇಕಾದ ಅನುದಾನಗಳ ಬಗ್ಗೆ ರಾಜ್ಯದ ಬಿಜೆಪಿ ಸಂಸದರು ಹಾಗೂ ಕೇಂದ್ರ ಸಚಿವರು ಧ್ವನಿ ಎತ್ತದೇ ಇರುವುದನ್ನು ತೀವ್ರವಾಗಿ ಟೀಕಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ನಾಯಕರು ಸಂಸದರೇ ಆಗಿದ್ದರೂ ಕೇಂದ್ರ ನಾಯಕತ್ವದಲ್ಲಿ ಅವರಿಗೆ ಯಾವುದೇ ಮಹತ್ವವಿಲ್ಲದಂತೆ ಕಾಣುತ್ತಿದೆ ಎಂದು ವ್ಯಂಗ್ಯವಾಡಿದರು.
ಫೆಬ್ರವರಿ 1ರಂದು ಮಂಡನೆಯಾಗಲಿರುವ ಕೇಂದ್ರ ಬಜೆಟ್ ಬಗ್ಗೆ ರಾಜ್ಯದ ನಿರೀಕ್ಷೆಗಳ ಕುರಿತ ಪ್ರಶ್ನೆಗೆ ಉತ್ತರಿಸಿ, “ಹಿಂದಿನ ಬಜೆಟ್‌ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ. ಅನುದಾನ ಘೋಷಿಸಲಾಗಿತ್ತು. ಆದರೆ ಇದುವರೆಗೆ ಆ ಹಣ ಬಿಡುಗಡೆ ಆಗಿಲ್ಲ ಎಂದು ಹೇಳಿದರು.
ಬಿಜೆಪಿ ಪೋಸ್ಟರ್ ಅಭಿಯಾನಕ್ಕೆ ಪ್ರತಿಕ್ರಿಯಿಸಿ, ಬಿಜೆಪಿಯ ಅನೇಕ ಹಗರಣಗಳನ್ನು ನಾವು ಈಗಾಗಲೇ ಬಯಲುಗೊಳಿಸಿದ್ದೇವೆ. ಕೋವಿಡ್ ಅವಧಿಯಲ್ಲಿನ ಹಗರಣ ಸೇರಿ ಹಿಂದಿನ ಸರ್ಕಾರದ ವಿರುದ್ಧ ಸಾಕಷ್ಟು ಆರೋಪಗಳಿವೆ. ಅವನ್ನೂ ನಾವು ಬಹಿರಂಗಪಡಿಸುತ್ತೇವೆ ಎಂದು ಎಚ್ಚರಿಸಿದರು.
ವಿಬಿ–ಜಿ ರಾಮ್ ಜಿ ಕಾಯ್ದೆ (VB-G RAM G Act) ವಿಚಾರದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸದನದಲ್ಲಿ ಧ್ವನಿ ಎತ್ತಿದ್ದಾರೆ.ಅದನ್ನು ರದ್ದುಪಡಿಸುವ ಅಗತ್ಯವೇನಿತ್ತು ಎಂದು ಪ್ರಶ್ನಿಸಿದರು. “ಪ್ರಸ್ತುತ ಪರಿಸ್ಥಿತಿಯಲ್ಲಿ ಹೊಸ ಕಾಯ್ದೆಯನ್ನು ಯಾವುದೇ ರಾಜ್ಯದಲ್ಲೂ ಜಾರಿಗೊಳಿಸಲು ಸಾಧ್ಯವಿಲ್ಲ ಎಂದರು.
ಮಲೆನಾಡು ಪ್ರದೇಶದಲ್ಲಿ ಕೆಎಫ್‌ಡಿ (ಮಂಗನ ಜ್ವರ) ದಿಂದ ಸಾವನ್ನಪ್ಪಿದವರಿಗೆ ಸರ್ಕಾರ ಪರಿಹಾರ ನೀಡುತ್ತದೆಯೇ ಎಂಬ ಪ್ರಶ್ನೆಗೆ ಉತ್ತರಿಸಿ, ಅದನ್ನು ಪರಿಶೀಲಿಸುತ್ತೇನೆ. ನಂತರ ಈ ಬಗ್ಗೆ ಮಾಹಿತಿ ನೀಡುತ್ತೇನೆಂದು ತಿಳಿಸಿದರು.