ಚಿಕ್ಕೋಡಿ: ಅಖಂಡ ಬೆಳಗಾವಿ ಜಿಲ್ಲೆ ವಿಭಜಿಸಿ ಚಿಕ್ಕೋಡಿಯನ್ನು ಪ್ರತ್ಯೇಕ ಜಿಲ್ಲೆಯನ್ನಾಗಿ ಮಾಡುವ ವಿಷಯವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಮುಂಬರುವ ದಿನಗಳಲ್ಲಿ ಜಿಲ್ಲೆಯಲ್ಲಿ ಹಲವು ಮಹತ್ವದ ಬದಲಾವಣೆ ನಡೆಯಲಿವೆ ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ಚಿಕ್ಕೋಡಿಯಲ್ಲಿ ಮಾತನಾಡಿದ ಅವರು, ಮಳೆ ಕೊರತೆಯಿಂದ ಹಲವೆಡೆ ಬೆಳೆ ಹಾನಿಯಾಗಿದೆ. ಜಂಟಿ ಸಮೀಕ್ಷೆ ನಡೆಸಿ ಪರಿಹಾರ ನೀಡುವ ಬಗ್ಗೆ ಸರ್ಕಾರ ಸೂಕ್ತ ನಿರ್ಧಾರ ಕೈಗೊಳ್ಳಲಿದೆ. ಮಳೆ ಪ್ರಮಾಣ ಕಡಿಮೆಯಾಗಿದ್ದರೂ ಚಿಕ್ಕೋಡಿ ಭಾಗದಲ್ಲಿ ಈಗ ಕುಡಿಯುವ ನೀರಿನ ಕೊರತೆ ಇಲ್ಲ. ಮುಂದಿನ ದಿನಗಳಲ್ಲಿ ಉತ್ತಮ ಮಳೆ ನಿರೀಕ್ಷೆ ಹೊಂದಲಾಗಿದೆ ಎಂದರು.
ಚಿಕ್ಕೋಡಿ ಭಾಗದ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ ಅವುಗಳಿಗೆ ಸೂಕ್ತ ಪರಿಹಾರ ಕಲ್ಪಿಸಲು ಸರ್ಕರ ಬದ್ಧವಾಗಿದೆ. ಮಳೆ ಕೊರತೆಯಿಂದ ಹಲವೆಡೆ ಬೆಳೆ ಹಾನಿಯಾಗಿರುವ ಕುರಿತು ದೂರುಗಳು ಬಂದಿದ್ದು, ಜಂಟಿ ಸಮೀಕ್ಷೆ ನಡೆಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಸಮೀಕ್ಷಾ ವರದಿ ಬಂದ ತಕ್ಷಣ ಸಂತ್ರಸ್ತ ರೈತರಿಗೆ ಪರಿಹಾರ ನೀಡುವ ಕುರಿತು ಸರಕಾರ ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದು ಲೋಕೋಪಯೋಗಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.
ಅಕ್ರಮ ವಲಸಿಗರಿಗೆ ನಿಯಮಾನುಸಾರವೇ ಶಾಶ್ವತ ನಿವಾಸಿ ಪತ್ರ ನೀಡಲಾಗುತ್ತಿದೆ. ಈ ವಿಷಯದಲ್ಲಿ ವಿರೋಧ ಪಕ್ಷದ ಟೀಕೆಯಲ್ಲಿ ಯಾವುದೇ ಹುರುಳಿಲ್ಲ. ಯಾರು ಇಲ್ಲಿನ ನಿವಾಸಿಗಳು ಅಲ್ಲವೋ ಮತ್ತು ಯಾರ ಬಳಿ ನಕಲಿ ದಾಖಲೆ ಇವೆಯೋ ಎಂಬುದಕ್ಕೆ ಬಿಜೆಪಿ ನಾಯಕರು ಪುರಾವೆ ನೀಡಲಿ. ಕಾನೂನು ಚೌಕಟ್ಟು ಮೀರಿ ಯಾರೊಬ್ಬರಿಗೂ ಯಾವುದೇ ಸೌಲಭ್ಯ ನೀಡುವುದಿಲ್ಲ ಎಂದರು.
ಜಿಲ್ಲೆಗಳ ಪುನರ್ ರಚನೆ ಕುರಿತು ಸರಕಾರದ ಮಟ್ಟದಲ್ಲಿ ಗಂಭೀರ ಚರ್ಚೆಗಳು ನಡೆಯುತ್ತಿವೆ ಎಂದು ತಿಳಿಸಿದರು. ಚಿಕ್ಕೋಡಿ ಜಿಲ್ಲೆ ರಚನೆ ಕುರಿತ ಬೇಡಿಕೆಯೂ ಪರಿಶೀಲನೆಯಲ್ಲಿದ್ದು, ಸೂಕ್ತ ಸಮಯದಲ್ಲಿ ಸರಕಾರ ನಿರ್ಧಾರ ಪ್ರಕಟಿಸಲಿದೆ ಎಂದು ಹೇಳಿದ್ದಾರೆ.