ಬೆಂಗಳೂರು: Fifa World Cup ಸೆಮಿ ಮತ್ತು ಫೈನಲ್ ಪಂದ್ಯಗಳನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಸರ್ಕಾರ ಬೆಂಗಳೂರಿನ ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳು ಜುಲೈ 14, 15 ಮತ್ತು 19 ರಂದು ಬೆಳಗಿನ ಜಾವ 3.30 ರವರೆಗೆ ತೆರೆದಿರಲು ಅನುಮತಿ ನೀಡಿರುವುದರಿಂದ ಫುಟ್ಬಾಲ್ ಅಭಿಮಾನಿಗಳಿಗೆ ಖುಷಿ ನೀಡಲಿದೆ.
ಭಾರತದ ರಾಷ್ಟ್ರೀಯ ರೆಸ್ಟೋರೆಂಟ್ ಅಸೋಸಿಯೇಷನ್ (ಎನ್‌ಆರ್‌ಎಐ) ವಿನಂತಿಯ ಮೇರೆಗೆ ವಿಶ್ವಕಪ್ ಪಂದ್ಯಗಳನ್ನು ನಿಗದಿಪಡಿಸಲಾಗಿರುವ ಜುಲೈ 14, 15 ಮತ್ತು 19 ರಂದು ಸಮಯ ಸಡಿಲಗೊಳಿಸಲಾಗಿದೆ ಎಂದು ಸರ್ಕಾರ ತಿಳಿಸಿದೆ. ಕರ್ನಾಟಕ ಪೊಲೀಸ್ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಬೆಂಗಳೂರು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರು ತಡರಾತ್ರಿ ಪಂದ್ಯಗಳನ್ನು ಪ್ರದರ್ಶಿಸಲು ಅನುಮತಿ ನೀಡಿ ಆದೇಶ ಹೊರಡಿಸಿದ್ದಾರೆ ಎಂದು ತಿಳಿದುಬಂದಿದೆ.
ಸಾಮಾಜಿಕ ಮಾಧ್ಯಮ ವೇದಿಕೆ 'X' ನಲ್ಲಿ ಕರ್ನಾಟಕ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಫುಟ್ಬಾಲ್ ಪ್ರಪಂಚದಾದ್ಯಂತ ಲಕ್ಷಾಂತರ ಜನರಿಗೆ ಸ್ಫೂರ್ತಿ ನೀಡುತ್ತದೆ. ಫಿಫಾ ವಿಶ್ವಕಪ್ ಅಭಿಮಾನಿಗಳು ಕುತೂಹಲದಿಂದ ಎದುರು ನೋಡುವ ಆಚರಣೆಯಾಗಿದೆ ಎಂದು ಹೇಳಿದರು. ಭಾರತೀಯ ರಾಷ್ಟ್ರೀಯ ರೆಸ್ಟೋರೆಂಟ್ ಸಂಘದ ಮನವಿಯ ಮೇರೆಗೆ, ನಮ್ಮ ಸರ್ಕಾರವು ಬೆಂಗಳೂರಿನಲ್ಲಿರುವ ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳನ್ನು ಬೆಳಗಿನ ಜಾವ 1.00 ರಿಂದ ಬೆಳಗಿನ ಜಾವ 3.30 ರವರೆಗೆ ವಿಸ್ತರಿಸಲು ಅನುಮತಿ ನೀಡಿದೆ ಎಂದು ಟ್ವೀಟ್ ಮಾಡಿದ್ದಾರೆ.
ಸಾರ್ವಜನಿಕ ಸುರಕ್ಷತೆ, ಕಾನೂನು ಮತ್ತು ಸುವ್ಯವಸ್ಥೆ ಮತ್ತು ನಾಗರಿಕರ ಅನುಕೂಲತೆ ನಮ್ಮ ಅತ್ಯುನ್ನತ ಆದ್ಯತೆಗಳಾಗಿ ಉಳಿಯುವಂತೆ ನೋಡಿಕೊಳ್ಳುವ ಸಂದರ್ಭದಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಪ್ರತಿಯೊಬ್ಬರೂ ಜವಾಬ್ದಾರಿಯುತವಾಗಿ ಪಂದ್ಯಗಳನ್ನು ಆನಂದಿಸಬೇಕು ಮತ್ತು ಅಧಿಕಾರಿಗಳಿಗೆ ಸಂಪೂರ್ಣ ಸಹಕಾರವನ್ನು ನೀಡಬೇಕೆಂದು ನಾನು ಒತ್ತಾಯಿಸುತ್ತೇನೆ ಎಂದು ಶಿವಕುಮಾರ್ ಹೇಳಿದರು.