ಮೈಸೂರು: ಮೈಸೂರು ಜಿಲ್ಲೆಯ ಟಿ. ನರಸೀಪುರ ಪಟ್ಟಣದಲ್ಲಿ ಪಶ್ಚಿಮ ಬಂಗಾಳ ಮೂಲದ ಯುವತಿಯೊಬ್ಬರನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿದ ಆಘಾತಕಾರಿ ಘಟನೆ ನಡೆದಿದೆ.
ಎರಡು ದಿನಗಳ ಹಿಂದೆ ಟಿ. ನರಸೀಪುರದ ಖಾಸಗಿ ಬಸ್ ನಿಲ್ದಾಣದ ಬಳಿ ನಿಂತಿದ್ದ ಯುವತಿಯನ್ನು ಮೂವರು ಖದೀಮರು ಅಪಹರಿಸಿದ್ದು, ಬಳಿಕ ಚಾಮರಾಜನಗರ ತಾಲೂಕಿನ ಸಂತೆಮರಳ್ಳಿಯ ಲಾಡ್ಜ್‌ವೊಂದಕ್ಕೆ ಕರೆದೊಯ್ದು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ.
ಬಸ್ ನಿಲ್ದಾಣದಲ್ಲಿ ನಿಂತಿದ್ದಾಗ ಆರೋಪಿಗಳು ತನ್ನನ್ನು ಬಲವಂತವಾಗಿ ಕಾರಿನಲ್ಲಿ ಕರೆದುಕೊಂಡು ಹೋಗಿ, ಸಂತೆಮರಹಳ್ಳಿ ಪಟ್ಟಣದ ಲಾಡ್ಜ್‌ಗೆ ಕರೆದೊಯ್ದು, ಅಲ್ಲಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಯುವತಿ ಆರೋಪಿಸಿದ್ದಾರೆ.
ಘಟನೆ ನಡೆದ 24 ಗಂಟೆಗಳಲ್ಲಿ ಕಾರ್ಯಾಚರಣೆ ನಡೆಸಿದ ಟಿ. ನರಸೀಪುರ ಪೊಲೀಸರು, ಸ್ಥಳೀಯ ನಿವಾಸಿಗಳಾದ ಕಿರಣ್, ಕಿಶೋರ್ ಮತ್ತು ರಿಯಾನ್ ಎಂಬ ಮೂವರು ಆರೋಪಿಗಳನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಪ್ರಕರಣದ ಸೂಕ್ಷ್ಮತೆ ಮತ್ತು ಮಹಿಳೆಯ ಸುರಕ್ಷತೆಗೆ ಸಂಬಂಧಿಸಿದ ಕಳವಳಗಳನ್ನು ಪರಿಗಣಿಸಿ, ಆರೋಪಿಗಳನ್ನು ಬಂಧಿಸಲು ತಕ್ಷಣ ಕ್ರಮ ಕೈಗೊಳ್ಳಲಾಗಿದೆ. ಅದೇ ಸಮಯದಲ್ಲಿ, ಸಂತ್ರಸ್ತೆ, ಆರೋಪಿಗಳೊಂದಿಗೆ ಸ್ವಯಂಪ್ರೇರಣೆಯಿಂದ ಬಂದಿದ್ದಾರೆಯೇ ಎಂಬುದು ಸೇರಿದಂತೆ ಪ್ರಕರಣದ ಎಲ್ಲಾ ಅಂಶಗಳನ್ನು ತನಿಖಾಧಿಕಾರಿಗಳು ಪರಿಶೀಲಿಸುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸರ ಪ್ರಕಾರ, ಆರೋಪಿಗಳು, ಮಹಿಳೆ ತಮ್ಮೊಂದಿಗೆ ಸ್ವಯಂಪ್ರೇರಣೆಯಿಂದ ಬಂದಿದ್ದಾರೆ. ನಾವು ಅಪಹರಿಸಿಲ್ಲ ಎಂದು ಹೇಳಿಕೊಂಡಿದ್ದಾರೆ. ವಿಡಿಯೋ ಚಿತ್ರೀಕರಣ ವಿಚಾರಕ್ಕೆ ಸಂಬಂಧಿಸಿದಂತೆ ಲಾಡ್ಜ್‌ನಲ್ಲಿ ವಾಗ್ವಾದ ನಡೆದಿದೆ ಎಂದು ಅವರು ಆರೋಪಿಸಿದ್ದಾರೆ. ವಾಗ್ವಾದದ ನಂತರ, ಮಹಿಳೆಯನ್ನು ಅವರ ಸ್ಥಳಕ್ಕೆ ಬಿಟ್ಟು ಬಂದಿರುವುದಾಗಿ ಅವರು ಆರೋಪಿಗಳು ಹೇಳಿಕೊಂಡಿದ್ದಾರೆ. ನಂತರ ಯುವತಿ ತಮ್ಮ ವಿರುದ್ಧ ಸಾಮೂಹಿಕ ಅತ್ಯಾಚಾರದ ಆರೋಪದ ಮೇಲೆ ದೂರು ದಾಖಲಿಸಿದ್ದಾರೆ.
ಪ್ರಕರಣದ ಸತ್ಯಾಸತ್ಯತೆಗಳನ್ನು ತಿಳಿಯಲು ಸಂತ್ರಸ್ತೆಯ ಹಿನ್ನೆಲೆಯನ್ನು ಪರಿಶೀಲಿಸಲಾಗುತ್ತಿದೆ ಮತ್ತು ಆರೋಪಿಗಳ ಹೇಳಿಕೆಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ.