ಸಚಿವ ಸಂಪುಟ ಸಭೆ (ಪ್ರಾತಿನಿಧಿಕ ಚಿತ್ರ) 
ರಾಜ್ಯ

ಸಚಿವ ಸಂಪುಟ ವಿಸ್ತರಣೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್: ಸೋಮವಾರ ಸಂಜೆ ಪ್ರಮಾಣವಚನ ಸಾಧ್ಯತೆ, 18 ಸಚಿವರ ಸೇರ್ಪಡೆ ನಿರೀಕ್ಷೆ..!

ಸೋಮವಾರ ಸಂಜೆ 5 ಗಂಟೆಗೆ ವಿಧಾನಸೌಧದ ಗ್ಲಾಸ್ ಹೌಸ್‌ನಲ್ಲಿ ನೂತನ ಸಚಿವರ ಪ್ರಮಾಣವಚನ ಸಮಾರಂಭ ನಡೆಸುವ ಸಾಧ್ಯತೆ ಇದೆ.

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕಾಂಗ್ರೆಸ್ ಹೈಕಮಾಂಡ್ ಅಂತಿಮ ಹಂತದ ಒಪ್ಪಿಗೆ ನೀಡಿರುವ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಸೋಮವಾರ ನಡೆಯುವ ಸಾಧ್ಯತೆ ಹೆಚ್ಚಾಗಿದೆ.

ಗುರುವಾರ ಸಂಜೆ ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ಮಹತ್ವದ ಸಭೆ ನಡೆಸಿದ್ದು, ಈ ಸಭೆಯಲ್ಲಿ ಸಚಿವ ಸಂಪುಟ ವಿಸ್ತರಣೆಗೆ ಅಂತಿಮ ರೂಪುರೇಷೆ ಸಿದ್ಧಗೊಂಡಿದೆ ಎಂದು ಮೂಲಗಳು ತಿಳಿಸಿವೆ.

ಸೋಮವಾರ ಸಂಜೆ 5 ಗಂಟೆಗೆ ವಿಧಾನಸೌಧದ ಗ್ಲಾಸ್ ಹೌಸ್‌ನಲ್ಲಿ ನೂತನ ಸಚಿವರ ಪ್ರಮಾಣವಚನ ಸಮಾರಂಭ ನಡೆಸುವ ಸಾಧ್ಯತೆ ಇದೆ. ಪ್ರಸ್ತುತ ಖಾಲಿ ಇರುವ 20 ಸಚಿವ ಸ್ಥಾನಗಳ ಪೈಕಿ 18 ಸ್ಥಾನಗಳನ್ನು ಭರ್ತಿ ಮಾಡುವ ನಿರೀಕ್ಷೆಯಿದ್ದು, ಉಳಿದ ಎರಡು ಸ್ಥಾನಗಳನ್ನು ಮುಂದಿನ ರಾಜಕೀಯ ಬೆಳವಣಿಗೆಗಳು ಹಾಗೂ ಅಸಮಾಧಾನವನ್ನು ಸಮತೋಲನಗೊಳಿಸುವ ಉದ್ದೇಶದಿಂದ ಖಾಲಿ ಉಳಿಸಬಹುದು ಎಂದು ಹೇಳಲಾಗುತ್ತಿದೆ. ಈ ವಿಸ್ತರಣೆಯಲ್ಲಿ ಇಬ್ಬರು ಮಹಿಳಾ ಶಾಸಕರಿಗೂ ಸಚಿವ ಸ್ಥಾನ ದೊರೆಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಎಐಸಿಸಿ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು, ಸಚಿವ ಸಂಪುಟ ವಿಸ್ತರಣೆಯ ದಿನಾಂಕವನ್ನು ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರು ತಿಳಿಸುತ್ತಾರೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷರು ರಾಜ್ಯದ ಪರಿಸ್ಥಿತಿಯನ್ನು ಗಮನಿಸಲು ಈಗಾಗಲೇ ಬೆಂಗಳೂರಿಗೆ ಮರಳಿದ್ದಾರೆ" ಎಂದರು. ಆದರೆ, ಸಚಿವ ಸ್ಥಾನ ಪಡೆಯುವವರ ಕುರಿತು ಯಾವುದೇ ಮಾಹಿತಿ ನೀಡಲು ಅವರು ನಿರಾಕರಿಸಿದರು.

ಎಐಸಿಸಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಭಾನುವಾರ ಅಂತಿಮ ಪಟ್ಟಿಯೊಂದಿಗೆ ಬೆಂಗಳೂರಿಗೆ ಆಗಮಿಸುವ ನಿರೀಕ್ಷೆಯಿದೆ.

ಸಚಿವರ ಹೆಸರುಗಳು ಪ್ರಮಾಣವಚನ ನಡೆಯುವವರೆಗೂ ಬಹಿರಂಗವಾಗುವುದಿಲ್ಲ. ಸಚಿವ ಸಂಪುಟ ವಿಸ್ತರಣೆಯ ದಿನಾಂಕವನ್ನು ಮುಖ್ಯಮಂತ್ರಿ ಅಧಿಕೃತವಾಗಿ ಘೋಷಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ಈ ನಡುವೆ ತಮಿಳುನಾಡು ಮುಖ್ಯಮಂತ್ರಿ ಸಿ. ವಿಜಯ್ ಜೋಸೆಫ್ ಅವರು ಸೋಮವಾರ ಬೆಂಗಳೂರಿಗೆ ಬಂದು ಡಿ.ಕೆ. ಶಿವಕುಮಾರ್ ಅವರೊಂದಿಗೆ ಕಾವೇರಿ ನೀರಿನ ವಿಚಾರವಾಗಿ ಮಾತುಕತೆ ನಡೆಸುವ ಕಾರ್ಯಕ್ರಮ ರೈತರ ಪ್ರತಿಭಟನೆಯ ಹಿನ್ನೆಲೆಯಲ್ಲಿ ಅನಿಶ್ಚಿತತೆಯಲ್ಲಿ ಸಿಲುಕಿದೆ. ಅಗತ್ಯವಿದ್ದರೆ ಉಭಯ ಮುಖ್ಯಮಂತ್ರಿಗಳು ವರ್ಚುವಲ್ ಮೂಲಕ ಸಭೆ ನಡೆಸುವ ಸಾಧ್ಯತೆಯೂ ಇದೆ ಎಂದು ಮೂಲಗಳು ತಿಳಿಸಿವೆ.

ಇನ್ನು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಮಧ್ಯಪ್ರದೇಶ ಪ್ರವಾಸ ಮುಗಿಸಿ ಶುಕ್ರವಾರ ಬೆಂಗಳೂರಿಗೆ ಮರಳಲಿದ್ದು, ಶನಿವಾರ ಮೈಸೂರಿನಲ್ಲಿ ಪ್ರಧಾನಿ ಮೋದಿ ಅವರ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಭಾನುವಾರ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕಾವೇರಿ ನೀರಿನ ಹಂಚಿಕೆ ವಿಚಾರವಾಗಿ ಕರೆಯಲಾಗಿರುವ ಸರ್ವಪಕ್ಷ ಸಭೆಯಲ್ಲಿ ನಿರತರಾಗಲಿದ್ದಾರೆ. ಈ ಎಲ್ಲ ಕಾರ್ಯಕ್ರಮಗಳನ್ನು ಗಮನದಲ್ಲಿಟ್ಟುಕೊಂಡು ಸೋಮವಾರವೇ ಸಚಿವ ಸಂಪುಟ ವಿಸ್ತರಣೆ ನಡೆಸುವ ಸಾಧ್ಯತೆ ಹೆಚ್ಚಾಗಿದೆ.

ಏತನ್ಮಧ್ಯೆ ಸಚಿವ ಸಂಪುಟ ವಿಸ್ತರಣೆ ವಿಳಂಬವಾಗಿರುವುದನ್ನು ಬಿಜೆಪಿ ತೀವ್ರವಾಗಿ ಟೀಕಿಸಿದ್ದು, ಕಾವೇರಿ ವಿವಾದದಂತಹ ಮಹತ್ವದ ವಿಷಯಗಳನ್ನು ಕಡೆಗಣಿಸಿ ಸರ್ಕಾರದ ಸಂಪೂರ್ಣ ನಾಯಕತ್ವವೇ ದೆಹಲಿಯಲ್ಲಿ ನೆಲೆಸಿದೆ ಎಂದು ಆರೋಪಿಸಿದೆ.

ಈ ಬೆಳವಣಿಗೆಯ ಬಳಿಕ ರಾಹುಲ್ ಗಾಂಧಿ ಸ್ವತಃ ಮಧ್ಯಪ್ರವೇಶಿಸಿ ಸಚಿವ ಸಂಪುಟ ವಿಸ್ತರಣೆಯ ಗೊಂದಲಕ್ಕೆ ತೆರೆ ಎಳೆಯುವಂತೆ ಸೂಚನೆ ನೀಡಿದ್ದು, ರಾಜ್ಯ ನಾಯಕರು ಕೂಡಲೇ ಬೆಂಗಳೂರಿಗೆ ಮರಳುವಂತೆ ಸೂಚಿಸಿದ್ದಾರೆ ಎಂದು ಪಕ್ಷದ ಮೂಲಗಳು ಹೇಳಿವೆ.

ರಾಹುಲ್ ಗಾಂಧಿ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಹಿರಿಯ ನಾಯಕ ಸಿದ್ದರಾಮಯ್ಯ ಸೇರಿದಂತೆ ರಾಜ್ಯ ನಾಯಕರೊಂದಿಗೆ ಪ್ರತ್ಯೇಕವಾಗಿ ಮಾತುಕತೆ ನಡೆಸಿದ್ದು, ಬಳಿಕ ಮಲ್ಲಿಕಾರ್ಜುನ ಖರ್ಗೆ, ಕೆ.ಸಿ. ವೇಣುಗೋಪಾಲ್ ಹಾಗೂ ರಣದೀಪ್ ಸಿಂಗ್ ಸುರ್ಜೇವಾಲಾ ಅವರೊಂದಿಗೆ ಸುಮಾರು ಒಂದೂವರೆ ಗಂಟೆಗಳ ಕಾಲ ಸಮಾಲೋಚನೆ ನಡೆಸಿದ್ದಾರೆಂದು ತಿಳಿದುಬಂದಿದೆ.

ಮಂಗಳವಾರವೇ ನಡೆದ ಸಭೆಯಲ್ಲಿ 15 ಶಾಸಕರ ಹೆಸರಿನ ಬಗ್ಗೆ ಒಮ್ಮತ ಮೂಡಿದ್ದರೂ, ಉಳಿದ ಐದು ಸ್ಥಾನಗಳ ಕುರಿತು ಭಿನ್ನಾಭಿಪ್ರಾಯ ವ್ಯಕ್ತವಾಗಿತ್ತು.

ಆ ಐದು ಸ್ಥಾನಗಳ ಕುರಿತ ಅಂತಿಮ ನಿರ್ಧಾರವನ್ನು ಕಾಂಗ್ರೆಸ್ ಹೈಕಮಾಂಡ್ ಕೈಗೊಂಡು ಭಾನುವಾರ ಅಂತಿಮ ಪಟ್ಟಿಯನ್ನು ರಾಜ್ಯಕ್ಕೆ ಕಳುಹಿಸುವ ಸಾಧ್ಯತೆ ಇದೆ.

ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಅವರನ್ನು ಮತ್ತೆ ಸಚಿವ ಸಂಪುಟಕ್ಕೆ ಸೇರಿಸುವ ವಿಷಯವೂ ಸಭೆಯಲ್ಲಿ ಚರ್ಚೆಗೆ ಬಂದಿರುವುದಾಗಿ ಮೂಲಗಳು ತಿಳಿಸಿವೆ.

ಹಿರಿಯ ಶಾಸಕ ಬಸವರಾಜ ರಾಯರೆಡ್ಡಿ ಕೂಡ ಹೈಕಮಾಂಡ್ ಮೂಲಗಳನ್ನು ಉಲ್ಲೇಖಿಸಿ, ಸಚಿವ ಸಂಪುಟ ವಿಸ್ತರಣೆ ಸೋಮವಾರ ನಡೆಯುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ. ಆದರೆ, ಅಂತಿಮ ಪಟ್ಟಿಯಲ್ಲಿ ಯಾರಿಗೆ ಅವಕಾಶ ಸಿಗಲಿದೆ ಎಂಬ ಕುತೂಹಲ ಮಾತ್ರ ಇನ್ನೂ ಮುಂದುವರಿದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾವೇರಿ ವಿವಾದ: 'ಕರ್ನಾಟಕ ಬಂದ್' ಬಗ್ಗೆ ಚರ್ಚಿಸಲು ನಾಳೆ ಬೆಂಗಳೂರಿನಲ್ಲಿ ಕನ್ನಡ ಪರ ಸಂಘಟನೆಗಳ ಸಭೆ!

ಜಂತರ್ ಮಂತರ್ ಪ್ರತಿಭಟನೆ ವೇಳೆ ಪ್ರಧಾನಿ ಮೋದಿ ಕುರಿತು ಅವಹೇಳನಕಾರಿ ಹೇಳಿಕೆ: ನೋಯ್ಡಾದ ಮಹಿಳೆ ವಿರುದ್ಧ FIR ದಾಖಲು!

ಉಭಯ ಸದನಗಳಲ್ಲಿ ಸಾರ್ವಜನಿಕ ಪರೀಕ್ಷೆ ಅಕ್ರಮ ತಡೆ ಕಾಯ್ದೆಗೆ ಅಂಗೀಕಾರ, ರಾಷ್ಟ್ರಪತಿ ಅನುಮೋದನೆಗಾಗಿ ರವಾನೆ

ರಾಮಾಯಣ ಟ್ರೈಲರ್: ಸೀತಾ ಮಾತೆ ಪಾತ್ರಕ್ಕೆ ಸಾಯಿ ಪಲ್ಲವಿ ಬೇಕಿತ್ತಾ? ಸಾಮಾಜಿಕ ಜಾಲತಾಣದಲ್ಲಿ ಪರ-ವಿರೋಧ ಚರ್ಚೆ!

ಪಾಕ್ ಸೇನೆ ಇಸ್ರೇಲ್ ಗಿಂತಲೂ ಕೆಟ್ಟದು: ಮುನೀರ್ ಒಬ್ಬ 'Zalim'; ಕ್ಯಾಮರಾ ಮುಂದೆ ಒಂದೇ ಸಮನೆ ಕಣ್ಣೀರಿಟ್ಟ PoK ವ್ಯಕ್ತಿ! ಮನಕಲಕುವ Video