ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳದ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಸ್ಕ್ ಮ್ಯಾನ್ ಚಿನ್ನಯ್ಯ ಪ್ರಕಾಶ್ ರಾಜ್ ಹೆಸರನ್ನು ರಿಟ್ ಅರ್ಜಿಯಲ್ಲಿ ಉಲ್ಲೇಖ ಮಾಡಿದ್ದಾನೆ. ಇದು ಬಹುಭಾಷಾ ನಟ ಪ್ರಕಾಶ್ ರಾಜ್ ಎಂಬ ಸುದ್ದಿ ಹಬ್ಬಿದೆ. ಈ ಬಗ್ಗೆ ಇಂದು ಸೋಷಿಯಲ್ ಮೀಡಿಯಾ ಮೂಲಕ ನಟ ಪ್ರಕಾಶ್ ರಾಜ್ ಪ್ರತಿಕ್ರಿಯಿಸಿದ್ದಾರೆ.
ಸ್ಪಷ್ಟನೆ ನೀಡಿದ ಪ್ರಕಾಶ್ ರಾಜ್
‘ಎಲ್ಲರಿಗೂ ನಮಸ್ಕಾರ.. ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ನನ್ನ ಬಗ್ಗೆ ಕೆಲವು ಸುದ್ದಿಗಳು ಚರ್ಚೆಯಾಗುತ್ತಿರುವುದು ಗಮನಕ್ಕೆ ಬಂದಿದೆ. ಇದು ಅತ್ಯಂತ ಸೂಕ್ಷ್ಮವಾದ ವಿಷಯವಾಗಿರುವುದರಿಂದ ಮತ್ತು ಕೋಟ್ಯಂತರ ಭಕ್ತರ ನಂಬಿಕೆಗೆ ಸಾಕ್ಷಿಯಾಗಿರುವುದರಿಂದ, ಇಂತಹ ಅನುಮಾನಗಳಿಗೆ ಉತ್ತರಿಸುವುದು ನನ್ನ ಕರ್ತವ್ಯವೂ ಆಗಿದೆ’ ಎಂದು ಪ್ರಕಾಶ್ ರಾಜ್ ಪೋಸ್ಟ್ ಆರಂಭಿಸಿದ್ದಾರೆ. ನಾನು ಸದ್ಯ ಊರಿನಲ್ಲಿ ಇಲ್ಲ. ಇನ್ನೆರಡು ದಿನಗಳಲ್ಲಿ ನಾನೇ ಖುದ್ದಾಗಿ ಬಂದು ಮಾಧ್ಯಮ ಮಿತ್ರರ ಮೂಲಕ ಇದಕ್ಕೆ ಸೂಕ್ತ ಪ್ರತಿಕ್ರಿಯೆ ನೀಡಲಿದ್ದೇನೆ. ಅಲ್ಲಿಯವರೆಗೆ ಗಾಳಿ ಸುದ್ದಿಗಳನ್ನು ದಯವಿಟ್ಟು ಯಾರೂ ನಂಬಬೇಡಿ’ ಎಂದು ಕೋರಿದ್ದಾರೆ.
ಏನಿದು ಪ್ರಕರಣ?
ಧರ್ಮಸ್ಥಳ ಬುರುಡೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಚಿನ್ನಯ್ಯ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಇಡೀ ಪ್ರಕರಣದ ಹಿಂದೆ ನಟ ಪ್ರಕಾಶ್ ರಾಜ್, ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್, ವಿಠಲ್ ಗೌಡ, ಜಯಂತ್, ಯೂಟ್ಯೂಬರ್‌ಗಳಾದ ಸಮೀರ್ ಎಂ.ಡಿ, ಅಜಯ್, ದಿನೇಶ್ ಸೇರಿದಂತೆ ಹಲವು ಪ್ರಭಾವಿ ವ್ಯಕ್ತಿಗಳಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾನೆ. ತಾವು ಹೇಳಿದಂತೆ ನಡೆದುಕೊಳ್ಳದೆ ಇದ್ದರೆ ಕೊಲೆ ಮಾಡುತ್ತೇವೆ ಎಂದು ಬೆದರಿಕೆ ಹಾಕಿದ್ದರು ಎಂದು ಆರೋಪಿಸಿದ್ದರು.