ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದಲ್ಲಿ ಕೆಂಪೇಗೌಡ ಜಯಂತಿ ಮೆರವಣಿಗೆ ವೇಳೆ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾತ್ರೋರಾತ್ರಿ ಕಾರ್ಯಾಚರಣೆ ನಡೆಸಿದ ಪೊಲೀಸರು 4 ಆರೋಪಿಗಳನ್ನು ಬಂಧಿಸಿದ್ದಾರೆ.
ನಗರದಲ್ಲಿ ಶನಿವಾರ ನಡೆದ ನಾಡಪ್ರಭು ಕೆಂಪೇಗೌಡ ಜಯಂತಿ ಮಹೋತ್ಸವದ ವೇಳೆ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಮತ್ತು ಜೆಡಿಎಸ್ ಕಾರ್ಯಕರ್ತರ ನಡುವೆ ನಡೆದ ಗಲಾಟೆ ತೀವ್ರ ಸ್ವರೂಪ ಪಡೆದುಕೊಂಡಿದೆ.
ಇಂದು ರಾಜಕೀಯ ವಲಯದಲ್ಲಿ ಭಾರಿ ಸಂಚಲನ ಸೃಷ್ಟಿಸಿದೆ. ನಿನ್ನೆ ನಡೆದ ಈ ಆಘಾತಕಾರಿ ಘಟನೆಯನ್ನು ಬೆನ್ನಟ್ಟಿ ಇಡೀ ರಾತ್ರಿ ಕಾರ್ಯಾಚರಣೆ ನಡೆಸಿರುವ ಪೊಲೀಸರು ಸದ್ಯ ನಾಲ್ವರನ್ನು ಬಂಧಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಬಳ್ಳಾಪುರ ನಗರ ಠಾಣೆಯ ಪಿಎಸ್‌ಐ ಅಮರ್ ಅವರು ಸ್ವಯಂಪ್ರೇರಿತ ಎಫ್‌ಐಆರ್ ದಾಖಲಿಸಿಕೊಂಡಿದ್ದು, ಶಾಸಕರ ಮೇಲೆ ಚಪ್ಪಲಿ ಎಸೆದು, ಅವಾಚ್ಯ ಪದಗಳಿಂದ ನಿಂದಿಸಿ, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಪ್ರಕರಣ ದಾಖಲಾಗಿದೆ.
ಸಿಸಿಟಿವಿ ಪರಿಶೀಲನೆ
ಅಂತೆಯೇ ಪೊಲೀಸರು ಘಟನಾ ಸ್ಥಳದಲ್ಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರಾದ ಅಖಿಲ್ ರೆಡ್ಡಿ, ಪ್ರಕಾಶ್, ಮೋಹನ್ ರಾಜ್ ಮತ್ತು ಮಹೇಂದ್ರ ಎಂಬುವವರನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.
ಮುನ್ನೆಚ್ಚರಿಕಾ ಕ್ರಮವಾಗಿ ನಗರ ಪೊಲೀಸ್ ಠಾಣೆ ಸುತ್ತ ಬಿಗಿ ಬಂದೋಬಸ್ತ್ ಮಾಡಲಾಗಿದ್ದು, ಹಿರಿಯ ಅಧಿಕಾರಿಗಳು ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದರು ಎಂದು ತಿಳಿದುಬಂದಿದೆ.
ಶಾಸಕರ ಮೇಲೆ ಚಪ್ಪಲಿ ಎಸೆತ
ಚಿಕ್ಕಬಳ್ಳಾಪುರದ ಕನ್ನಡ ಭವನದಲ್ಲಿ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಶಾಂತಿಯುತವಾಗಿ ನಡೆಯುತ್ತಿತ್ತು. ಈ ವೇಳೆ ಅಲ್ಲಿಗೆ ನುಗ್ಗಿದ ಜೆಡಿಎಸ್ ಕಾರ್ಯಕರ್ತರು, ಶಾಸಕ ಪ್ರದೀಪ್ ಈಶ್ವರ್ ಅವರನ್ನು ವೇದಿಕೆಯಿಂದ ಕೆಳಗಿಳಿಸಬೇಕು ಎಂದು ಘೋಷಣೆ ಕೂಗಿ ಗಲಾಟೆ ಆರಂಭಿಸಿದರು. ಕಾರ್ಯಕ್ರಮಕ್ಕೆ ತೀವ್ರ ಅಡ್ಡಿಯಾದಾಗ ಸ್ಥಳದಲ್ಲಿದ್ದ ಸ್ವಾಮೀಜಿಯವರು ಮಧ್ಯಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿ, ಕಾರ್ಯಕ್ರಮ ಮುಂದುವರಿಯಲು ಅನುವು ಮಾಡಿಕೊಟ್ಟರು.
ಬಳಿಕ ಪ್ರದೀಪ್ ಈಶ್ವರ್ ಅವರು ತಮ್ಮ ಕಾರಿನ ಸನ್‌ರೂಫ್ (Sunroof) ಮೂಲಕ ಹೊರಬಂದು ಮೆರವಣಿಗೆಯಲ್ಲಿ ತೆರಳುತ್ತಿದ್ದಾಗ, ಕೆಲ ಕಾರ್ಯಕರ್ತರು ಪ್ರದೀಪ್ ಈಶ್ವರ್ ರತ್ತ ಚಪ್ಪಲಿ ಎಸೆದಿದ್ದಾರೆ. ಇದರಿಂದ ಆಕ್ರೋಶಗೊಂಡ ಶಾಸಕ ಪ್ರದೀಪ್ ಈಶ್ವರ್ ತಮ್ಮ ವಿರುದ್ಧ ಘೋಷಣೆ ಕೂಗುತ್ತಿದ್ದ ಕಾರ್ಯಕರ್ತರಿಗೆ ತಿರುಗೇಟು ನೀಡಲು ಮೀಸೆ ತಿರುವಿ, ತೋಳು ತಟ್ಟಿ ಸವಾಲು ಹಾಕಿದ್ದಾರೆ. ಈ ಬೆಳವಣಿಗೆಗಳ ಬೆನ್ನಲ್ಲೇ ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸರು ಸ್ಥಳದಲ್ಲೇ ಕೆಲವರನ್ನು ವಶಕ್ಕೆ ಪಡೆದಿದ್ದಾರೆ.