ಬೆಂಗಳೂರು: ಬಿಸಿಲಿನ ತಾಪದಿಂದ ಕಂಗೆಟ್ಟಿದ್ದ ರಾಜ್ಯದ ಜನತೆಗೆ ಕೊಂಚ ತಂಪಿನ ಅನುಭವವಾಗುತ್ತಿದೆ. ಏಪ್ರಿಲ್ ತಿಂಗಳಲ್ಲಿ ಸಾರ್ವಕಾಲಿಕ ದಾಖಲೆಯ ತಾಪಮಾನ ಕಂಡಿದ್ದ ಕರ್ನಾಟಕದ ಹಲವೆಡೆ ಪೂರ್ವ ಮುಂಗಾರು ಚುರುಕುಗೊಂಡಿದ್ದು, ವರುಣನ ಅಬ್ಬರ ಕಂಡುಬರುತ್ತಿದೆ.
ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಹೀಗಾಗಿ ಹವಾಮಾನ ಇಲಾಖೆಯು ವಿವಿಧ ಜಿಲ್ಲೆಗಳಿಗೆ 'ಯೆಲ್ಲೋ ಅಲರ್ಟ್' (Yellow Alert) ಘೋಷಣೆ ಮಾಡಿದೆ.ಭಾರತೀಯ ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆಯಂತೆ ಮುಂದಿನ ಮೂರು ದಿನಗಳ ಕಾಲ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ವಿಶೇಷವಾಗಿ ಕರಾವಳಿ ಮತ್ತು ಒಳನಾಡಿನ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಹೆಚ್ಚಿರಲಿದ್ದು, ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸೂಚಿಸಿದೆ.
ಎಲ್ಲೆಲ್ಲಿ ಮಳೆಯಾಗಲಿದೆ?
ಹವಾಮಾನ ಇಲಾಖೆಯ ವರದಿಯ ಪ್ರಕಾರ, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಧಾರ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಮೇ 8 ಮತ್ತು 9 ರಂದು ಗುಡುಗು ಸಹಿತ ಮಳೆಯಾಗಲಿದೆ ಎಂದು ಅಂದಾಜಿಸಲಾಗಿದೆ. ಉತ್ತರ ಒಳನಾಡಿನ ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಮೇ 8 ರಂದು ಭಾರಿ ಮಳೆಯ ಮುನ್ನೆಚ್ಚರಿಕೆ ನೀಡಲಾಗಿದೆ.
ಮಳೆಗೆ ಕಾರಣ
ಉತ್ತರ ತೆಲಂಗಾಣ ಮತ್ತು ಮನ್ನಾರ್ ಕೊಲ್ಲಿಯ ಮೇಲ್ಭಾಗದಲ್ಲಿ ಪ್ರಬಲವಾದ ಸುಳಿಗಾಳಿ ಉಂಟಾಗಿದೆ. ಇದರ ಪರಿಣಾಮವಾಗಿ ಉತ್ತರ ಒಳನಾಡಿನಿಂದ ಮನ್ನಾರ್ ಕೊಲ್ಲಿಯವರೆಗೆ ವಾಯುಭಾರ ಕುಸಿತ ನಿರ್ಮಾಣವಾಗಿದೆ. ಈ ಹವಾಮಾನ ವೈಪರೀತ್ಯದ ಪ್ರಭಾವದಿಂದ ಅರಬ್ಬಿ ಸಮುದ್ರದಿಂದ ತೇವಾಂಶ ಭರಿತ ತಂಪಾದ ಗಾಳಿ ರಾಜ್ಯದತ್ತ ಬೀಸುತ್ತಿದ್ದು, ಕರ್ನಾಟಕದಾದ್ಯಂತ ಮಳೆಗೆ ವಾತಾವರಣ ಸೃಷ್ಟಿಯಾಗಿದೆ. ಇದರಿಂದಾಗಿ ಕೇವಲ ದಕ್ಷಿಣ ಒಳನಾಡು ಮಾತ್ರವಲ್ಲದೆ, ಕರಾವಳಿ ಹಾಗೂ ಉತ್ತರ ಕರ್ನಾಟಕದ ಕೆಲವು ಭಾಗಗಳಲ್ಲೂ ವ್ಯಾಪಕ ಮಳೆಯಾಗುತ್ತಿದೆ.
ಬೆಂಗಳೂರು ಹವಾಮಾನ ಮುನ್ಸೂಚನೆ
ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಭಾಗಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಮುಂದಿನ 24 ರಿಂದ 48 ಗಂಟೆಗಳಲ್ಲಿ ಸಂಜೆ ಅಥವಾ ರಾತ್ರಿ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ನಗರದ ಗರಿಷ್ಠ ತಾಪಮಾನ 33 ಡಿಗ್ರಿ ಮತ್ತು ಕನಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.