ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಮೈಸೂರು ನಗರದ ವಿವಿಧ ವಿಧಾನಸಭಾ ಕ್ಷೇತ್ರಗಳಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿ, ನಿಗದಿತ ಅವಧಿಯೊಳಗೆ ಗುಣಮಟ್ಟ ಕಾಪಾಡಿಕೊಂಡೇ ಎಲ್ಲ ಯೋಜನೆಗಳನ್ನು ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಕಾಮಗಾರಿಗಳ ವೀಕ್ಷಣೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, ನಗರಾಭಿವೃದ್ಧಿ ಯೋಜನೆಗಳು ಯಾವುದೇ ವಿಳಂಬವಾಗದೆ ಪರಿಣಾಮಕಾರಿಯಾಗಿ ಪೂರ್ಣಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಲಾಗಿದೆ ಎಂದು ಹೇಳಿದರು.
ನಗರ ಸೌಂದರ್ಯೀಕರಣದ ಭಾಗವಾಗಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (KPTCL) ವತಿಯಿಂದ ಮೈಸೂರಿನಲ್ಲಿ ಸುಮಾರು 871 ಕಿಲೋಮೀಟರ್ ಸುರಂಗ ಕೇಬಲ್ ಅಳವಡಿಕೆ ಕಾಮಗಾರಿ ನಡೆಯುತ್ತಿದೆ. ಇದರಲ್ಲಿ ಈಗಾಗಲೇ 277 ಕಿಲೋಮೀಟರ್ ಕಾಮಗಾರಿ ಪೂರ್ಣಗೊಂಡಿದ್ದು, ಯೋಜನೆ ವೇಗವಾಗಿ ಸಾಗುತ್ತಿದೆ ಎಂದು ತಿಳಿಸಿದರು.
ಈ ಯೋಜನೆಯಿಂದ ನಗರದ ಸೌಂದರ್ಯ ಹೆಚ್ಚುವುದರ ಜೊತೆಗೆ ವಿದ್ಯುತ್ ಸಂಪರ್ಕ ವ್ಯವಸ್ಥೆಯೂ ಹೆಚ್ಚು ಸುರಕ್ಷಿತವಾಗಲಿದೆ ಎಂದು ಹೇಳಿದರು.
ಮಹಾರಾಣಿ ಕಾಲೇಜಿನ ವಿದ್ಯಾರ್ಥಿನಿಯರಿಗೆ ಇರುವ ವಸತಿ ಸೌಲಭ್ಯ ಕೊರತೆಯನ್ನು ನಿವಾರಿಸಲು ಹೊಸ ವಿದ್ಯಾರ್ಥಿನಿಲಯ ನಿರ್ಮಾಣ ಕಾರ್ಯವೂ ಪ್ರಗತಿಯಲ್ಲಿದೆ ಎಂದು ತಿಳಿಸಿದರು.
ಸುಮಾರು 1,400 ವಿದ್ಯಾರ್ಥಿನಿಯರಿಗೆ ವಸತಿ ವ್ಯವಸ್ಥೆ ಕಲ್ಪಿಸುವ ಸಾಮರ್ಥ್ಯ ಹೊಂದಿರುವ ಈ ಹೊಸ ಹಾಸ್ಟೆಲ್ ವಿದ್ಯಾರ್ಥಿನಿಯರ ಶಿಕ್ಷಣಕ್ಕೆ ಹೆಚ್ಚಿನ ನೆರವಾಗಲಿದೆ ಎಂದು ಹೇಳಿದರು.
ಮೈಸೂರಿನ ಪ್ರಮುಖ ರಸ್ತೆಗಳಲ್ಲಿ ಸುಮಾರು 50 ಕಿಲೋಮೀಟರ್ ವ್ಯಾಪ್ತಿಯಲ್ಲಿ ವೈಟ್‌ಟಾಪಿಂಗ್ ಕಾಮಗಾರಿ ನಡೆಯುತ್ತಿದ್ದು, ಇಂತಹ ರಸ್ತೆಗಳು ಸುಮಾರು 30 ವರ್ಷಗಳವರೆಗೆ ಬಾಳಿಕೆ ಬರುವುದರ ಜೊತೆಗೆ ವಾಹನ ಸಂಚಾರಕ್ಕೂ ಅನುಕೂಲಕರವಾಗಿರುತ್ತವೆ ಎಂದರು.
ಯೋಜನೆಯ ಮೊದಲ ಹಂತದಲ್ಲಿ ನಾಲ್ಕು ಲೇನ್ ರಸ್ತೆಗಳ ಅಭಿವೃದ್ಧಿ ನಡೆಯುತ್ತಿದ್ದು, ಉಳಿದ ರಸ್ತೆಗಳ ಕಾಮಗಾರಿ ಎರಡನೇ ಹಂತದಲ್ಲಿ ಕೈಗೆತ್ತಿಕೊಳ್ಳಲಾಗುತ್ತದೆ. ಈ ರಸ್ತೆ ಅಭಿವೃದ್ಧಿಯಿಂದ ನಗರದಲ್ಲಿನ ಟ್ರಾಫಿಕ್ ಸಮಸ್ಯೆ ಕಡಿಮೆಯಾಗಲಿದ್ದು, ವಾಹನ ಸಂಚಾರ ಸುಗಮವಾಗಲಿದೆ ಎಂದು ಹೇಳಿದರು.
ಇದೇ ವೇಳೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಸಿಎಂ, “ಬಿಜೆಪಿ ಅಧಿಕಾರದಲ್ಲಿದ್ದಾಗ ಮೈಸೂರಿನಲ್ಲಿ ಯಾವುದೇ ಜನಪರ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಂಡಿಲ್ಲ. ರಸ್ತೆ, ಒಳಚರಂಡಿ ಸೇರಿದಂತೆ ಪ್ರಮುಖ ಅಭಿವೃದ್ಧಿ ಯೋಜನೆಗಳನ್ನು ನಮ್ಮ ಸರ್ಕಾರವೇ ಅನುಷ್ಠಾನಗೊಳಿಸಿದೆ. ಬಿಜೆಪಿ ಕೇವಲ ಸರ್ಕಾರವನ್ನು ಟೀಕಿಸುವುದು ಮತ್ತು ಸುಳ್ಳು ಪ್ರಚಾರ ಮಾಡುವುದರಲ್ಲಿ ತೊಡಗಿದೆ ಎಂದು ಆರೋಪಿಸಿದರು.
ಐತಿಹಾಸಿಕ ದೇವರಾಜ ಮಾರುಕಟ್ಟೆ ಹಾಗೂ ಲ್ಯಾನ್ಸ್‌ಡೌನ್ ಕಟ್ಟಡಗಳ ಪುನರ್ ಅಭಿವೃದ್ಧಿ ಕುರಿತು ಪ್ರತಿಕ್ರಿಯೆ ನೀಡಿ, ಈ ಕಟ್ಟಡಗಳ ಪಾರಂಪರಿಕ ವಾಸ್ತುಶಿಲ್ಪವನ್ನು ಉಳಿಸಿಕೊಂಡೇ ಅಭಿವೃದ್ಧಿಪಡಿಸುವ ಉದ್ದೇಶ ಸರ್ಕಾರಕ್ಕಿದೆ ಎಂದು ಹೇಳಿದರು.
ಈ ಸಂಬಂಧ ಪ್ರಕರಣ ನ್ಯಾಯಾಲಯದಲ್ಲಿದ್ದರೂ, ಸ್ಥಳೀಯ ಶಾಸಕರೊಂದಿಗೆ ಸಮಾಲೋಚನೆ ನಡೆಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.