ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ರೋಡ್ ರೇಜ್ ಪ್ರಕರಣ ದಾಖಲಾಗಿದ್ದು, ಮಹಿಳೆ ಕಾರು ಹಿಂಬಾಲಿಸಿ ಗಾಜು ಒಡೆದು, ಅವಾಚ್ಯ ನಿಂದನೆ ಮಾಡಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಅಕ್ಟೋಬರ್ 28ರಂದು ಬೆಳಗ್ಗೆ ಸುಮಾರು 11.10ಕ್ಕೆ ಕೋರಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯ ಬಿಡಿಎ ಕಾಂಪ್ಲೆಕ್ಸ್ ಸಿಗ್ನಲ್‌ನಿಂದ ವಾಟರ್ ಟ್ಯಾಂಕ್ ಸಿಗ್ನಲ್‌ಗೆ ಹೋಗುವ ರಸ್ತೆಯಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ದ್ವಿಚಕ್ರ ವಾಹನ ಕಾರಿಗೆ ಡಿಕ್ಕಿ ಹೊಡೆದ ವಿಚಾರವಾಗಿ ಆರಂಭವಾದ ಜಗಳ ವಿಕೋಪಕ್ಕೆ ತಿರುಗಿದ್ದು, ಮಹಿಳೆಯೊಬ್ಬರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಅವರ ಕಾರನ್ನು ಜಖಂಗೊಳಿಸಿ ಹಲ್ಲೆಗೆ ಯತ್ನಿಸಿದ ಆರೋಪದ ಮೇಲೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಿನಲ್ಲಿ ನಡೆದಿರುವ ಈ ಘಟನೆ ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿತ್ತು.
ಆಗಿದ್ದೇನು?
ಮಹಿಳೆ ಬಿಡಿಎ ಕಾಂಪ್ಲೆಕ್ಸ್ ಸಮೀಪ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ, ಮೂವರು ಯುವಕರು ಇದ್ದ ದ್ವಿಚಕ್ರ ವಾಹನ ಆಕೆಯ ಕಾರಿಗೆ ಡಿಕ್ಕಿ ಹೊಡೆದಿದೆ. ಎಚ್ಚರಿಕೆಯಿಂದ ವಾಹನ ಚಲಾಯಿಸುವಂತೆ ಮಹಿಳೆ ಬುದ್ಧಿವಾದ ಹೇಳಿದ್ದಕ್ಕೆ ಮೂವರು ಆಕೆಯೊಂದಿಗೆ ಜಗಳ ಆರಂಭಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಈ ವೇಳೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪಿಗಳು, ಕಾರಿನ ಹಿಂಭಾಗದ ಎಡಬದಿಯ ಗಾಜು ಒಡೆಯಲು ಯತ್ನಿಸಿದ್ದಾರೆ. ಹೆಲ್ಮೆಟ್ ಧರಿಸಿದ್ದ ವ್ಯಕ್ತಿಯೊಬ್ಬ ಕಾರಿನ ಗಾಜನ್ನು ಒಡೆಯಲು ಪ್ರಯತ್ನಿಸುತ್ತಿರುವ ದೃಶ್ಯವೂ ವಿಡಿಯೋದಲ್ಲಿ ಸೆರೆಯಾಗಿದೆ.
ಗಾಜು ಒಡೆಯಲು ಸಾಧ್ಯವಾಗದಿದ್ದಾಗ ರಸ್ತೆಯಲ್ಲಿದ್ದ ದೊಡ್ಡ ಕಲ್ಲನ್ನು ಎತ್ತಿಕೊಂಡು ಕಾರಿಗೆ ಹೊಡೆದಿದ್ದಾರೆ. ಬಳಿಕ ಹೆಲ್ಮೆಟ್‌ಗಳನ್ನು ತೆಗೆದು ಕಾರಿನ ಬಾನೆಟ್ ಹಾಗೂ ಎಡಭಾಗಕ್ಕೆ ಹೊಡೆದು ಹಾನಿಗೊಳಿಸಿದ್ದಾರೆ. ಕಾರಿನ ಹಿಂಬದಿ ನೋಟದ ಕನ್ನಡಿಯನ್ನೂ (ರಿಯರ್ ವ್ಯೂ ಮಿರರ್) ಒಡೆದಿದ್ದಾರೆ ಎಂದು ಮಹಿಳೆ ದೂರಿನಲ್ಲಿ ಆರೋಪಿಸಿದ್ದಾರೆ.
ನಂತರ ಮೂವರು ಅಲ್ಲಿಂದ ಪರಾರಿಯಾಗಲು ಯತ್ನಿಸಿದಾಗ ಮಹಿಳೆ ಅವರನ್ನು ಹಿಂಬಾಲಿಸಿದ್ದಾರೆ. ಈ ವೇಳೆ ಆರೋಪಿಗಳಲ್ಲಿ ಒಬ್ಬ ಮಹಿಳೆಯ ಮೇಲೆ ಹಲ್ಲೆ ನಡೆಸಲು ಯತ್ನಿಸಿದ್ದಾನೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ. ಆರೋಪಿಗಳ ಕೃತ್ಯದಿಂದ ಕಾರಿಗೆ ಸುಮಾರು 15 ಸಾವಿರದಿಂದ 20 ಸಾವಿರ ರೂಪಾಯಿವರೆಗೆ ಹಾನಿಯಾಗಿದೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.
ಮೂವರ ಬಂಧನ
ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಸೆಕ್ಷನ್ 324(4) (ಆಸ್ತಿ ಹಾನಿ), 79 (ಮಹಿಳೆಯ ಘನತೆಗೆ ಧಕ್ಕೆ ತರುವ ಉದ್ದೇಶದ ಮಾತು, ಸನ್ನೆ ಅಥವಾ ವರ್ತನೆ) ಹಾಗೂ 3(5) (ಸಾಮಾನ್ಯ ಉದ್ದೇಶ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬಳಿಕ ಆರೋಪಿಗಳನ್ನು ಗುರುತಿಸಿ ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸಾರ್ವಜನಿಕ ಶಾಂತಿ ಕಾಪಾಡಲು ಮತ್ತು ನಾಗರಿಕರ ಸುರಕ್ಷತೆ ಖಚಿತಪಡಿಸಲು ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.