ಬೆಂಗಳೂರು: ರಾಜ್ಯದ ವಾಹನ ಸವಾರರಿಗೆ ರಾಜ್ಯ ಸರ್ಕಾರ ಮತ್ತೊಮ್ಮೆ ಸಿಹಿಸುದ್ದಿ ನೀಡಿದೆ. ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳ ದಂಡದ ಮೊತ್ತವನ್ನು ಶೇ.50ರಷ್ಟು ರಿಯಾಯಿತಿಯೊಂದಿಗೆ ಪಾವತಿಸಲು ಅವಕಾಶ ನೀಡಿದ್ದು, ನವೆಂಬರ್ 21ರಿಂದ ಡಿಸೆಂಬರ್ 11ರವರೆಗೆ ಈ ರಿಯಾಯಿತಿ ಅನ್ವಯವಾಗಲಿದೆ.
ರಾಜ್ಯದಲ್ಲಿ ಬಾಕಿ ಉಳಿದಿರುವ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳ ದಂಡ ಪಾವತಿಗೆ ಶೇ.50ರಷ್ಟು ರಿಯಾಯಿತಿ ನೀಡುವಂತೆ ಸರ್ಕಾರ ಆದೇಶ ಹೊರಡಿಸಿದೆ.
ಈ ಹಿಂದೆ ನೀಡಲಾಗಿದ್ದ ರಿಯಾಯಿತಿ ಸೌಲಭ್ಯವನ್ನು ಮತ್ತೊಮ್ಮೆ ವಿಸ್ತರಿಸುವಂತೆ ಕೋರಿ ಸಲ್ಲಿಕೆಯಾಗಿದ್ದ ಮನವಿಯನ್ನು ಪರಿಗಣಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಸಂಚಾರ ನಿಯಮ ಉಲ್ಲಂಘನೆಗಾಗಿ ವಿಧಿಸಲಾಗಿರುವ ಬಾಕಿ ದಂಡವನ್ನು ವಾಹನ ಸವಾರರು ನಿಗದಿತ ಅವಧಿಯಲ್ಲಿ ಶೇ.50ರಷ್ಟು ಮೊತ್ತ ಪಾವತಿಸುವ ಮೂಲಕ ಇತ್ಯರ್ಥಪಡಿಸಿಕೊಳ್ಳಬಹುದು. ಈ ಮೂಲಕ ದೀರ್ಘಕಾಲದಿಂದ ಬಾಕಿ ಉಳಿದಿರುವ ದಂಡದ ಪ್ರಕರಣಗಳನ್ನು ಕಡಿಮೆ ಮಾಡಲು ಸರ್ಕಾರ ಮುಂದಾಗಿದೆ.
ಹೀಗಾಗಿ, ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ದಂಡ ಬಾಕಿ ಉಳಿಸಿಕೊಂಡಿರುವ ವಾಹನ ಸವಾರರು ನವೆಂಬರ್ 21ರಿಂದ ಡಿಸೆಂಬರ್ 11ರೊಳಗೆ ರಿಯಾಯಿತಿ ಸೌಲಭ್ಯ ಬಳಸಿಕೊಂಡು ದಂಡ ಪಾವತಿಸಬಹುದಾಗಿದೆ.