ರಾಮನಗರ: ತಾಲ್ಲೂಕಿನ ದೊಡ್ಡ ಕುರುಬರಹಳ್ಳಿ ಗ್ರಾಮದಲ್ಲಿ ಶುಕ್ರವಾರ ಉದ್ಘಾಟನೆಯಾದ ಬಿಸಿಲು ಮಾರಮ್ಮ ದೇವಿಯ ನೂತನ ದೇಗುಲಕ್ಕೆ ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಭೇಟಿ ನೀಡಿದಾಗ, ದೇವಾಲಯದ ಬಾಗಿಲು ಹಾಕಿ ದೇವರ ದರ್ಶನಕ್ಕೆ ಅವಕಾಶ ನಿರಾಕರಿಸಲಾಗಿದೆ ಎಂದು ಆರೋಪಿಸಿ ಜೆಡಿಎಸ್ ಬೆಂಬಲಿಗರು ಪ್ರತಿಭಟನೆ ನಡೆಸಿದರು.
ಇದೇ ವಿಷಯಕ್ಕೆ ಗ್ರಾಮದಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಬೆಂಬಲಿಗರ ನಡುವೆ ಮಾತಿನ ಚಕಮಕಿ ನಡೆದು ಪರಸ್ಪರ ಕೈ ಕೈ ಮಿಲಾಯಿ ಸುವ ಹಂತ ತಲುಪಿತ್ತು. ವಿಷಯ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಪರಿಸ್ಥಿತಿ ನಿಯಂತ್ರಿಸಿದ್ದಾರೆ. ಘಟನೆಯು ರಾಜಕೀಯ ತಿರುವು ತೆಗೆದುಕೊಂಡಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಗ್ರಾಮದಲ್ಲಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ದೇವಸ್ಥಾನ ಉದ್ಘಾಟನೆ ಹಿನ್ನೆಲೆಯಲ್ಲಿ ನಿಖಿಲ್ ಮಧ್ಯಾಹ್ನ 3 ಗಂಟೆ ಸುಮಾರಿಗೆ ಗ್ರಾಮಕ್ಕೆ ಭೇಟಿ ನೀಡಿದರು. ಈ ವಿಷಯವನ್ನು ಆಯೋಜಕರು ಮೈಕ್‌ನಲ್ಲಿ ಘೋಷಣೆ ಮಾಡಿದರು. ಇದೇ ಸಂದರ್ಭದಲ್ಲಿ ವ್ಯಕ್ತಿಯೊಬ್ಬರು ದೇವಾಲಯಕ್ಕೆ ಬೀಗ ಹಾಕಿಕೊಂಡು ಹೋಗಿದ್ದಾರೆ.
ದೇವರ ದರ್ಶನಕ್ಕಾಗಿ ನಿಖಿಲ್ ಕಾದರೂ, ಅವರು ವಾಪಸ್ ಬಂದಿಲ್ಲ. ಮುಕ್ಕಾಲು ತಾಸು ಕಾದ ನಂತರ ಅಲ್ಲಿಂದ ತೆರಳಿದ್ದಾರೆ ಎಂದು ಮುಖಂಡರೊಬ್ಬರು ತಿಳಿಸಿದರು.
ದೊಡ್ಡಕುರುಬರಹಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣ ಆಗಿರೋ ಮಾರಮ್ಮ ದೇವಾಲಯದ ಉದ್ಘಾಟನೆ ಹಾಗೂ ಕುಂಭಾಭಿಷೇಕ ಕಾರ್ಯಕ್ರಮ ನಿಗದಿಯಾಗಿತ್ತು. ಈ ಹಿನ್ನೆಲೆ ದೇವಾಲಯಕ್ಕೆ ನಿಖಿಲ್ ಭೇಟಿ ಕೊಟ್ಟಿದ್ದರು.
ಆದರೆ ನಿಖಿಲ್ ಕುಮಾರಸ್ವಾಮಿ ಅವರು ದೇಗುಲಕ್ಕೆ ಬರುತ್ತಿದ್ದಾರೆ ಎನ್ನುವ ವಿಷಯ ತಿಳಿದು, ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರು ದೇವಾಲಯಕ್ಕೆ ಬೀಗ ಹಾಕಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಕಾಂಗ್ರೆಸ್ ಕಾರ್ಯಕರ್ತ ರವಿ ಎಂಬಾತನಿಂದ ದೇವಾಲಯಕ್ಕೆ ಬೀಗ ಹಾಕಿದ್ದಾರೆ ಎಂದು ಜೆಡಿಎಸ್ ತಾಲೂಕು ಘಟಕದ ಅಧ್ಯಕ್ಷ ರಾಮು ಆರೋಪಿಸಿದ್ದಾರೆ.