ಬೆಂಗಳೂರು: ಆಶಾ ಕಾರ್ಯಕರ್ತೆಯರು ಎದುರಿಸುತ್ತಿರುವ ಸಂಕಷ್ಟಗಳ ಬಗ್ಗೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ನಿರ್ಲಕ್ಷ್ಯ ವಹಿಸುತ್ತಿದೆ ಎಂದು ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ರಾಜ್ಯ ಸರ್ಕಾರ ಎಷ್ಟು ಸಂವೇದನಾರಹಿತವಾಗಿದೆ ಎಂದರೆ, ಆಶಾ ಕಾರ್ಯಕರ್ತೆಯರು ನಡೆಸುತ್ತಿರುವ ಧರಣಿಯತ್ತ ಗಮನಹರಿಸುವ ಸೌಜನ್ಯವನ್ನೂ ತೋರಿಲ್ಲ ಎಂದು ಟೀಕಿಸಿದರು.
ಗ್ರಾಮೀಣ ಮತ್ತು ನಗರ ಪ್ರದೇಶಗಳ ಆರೋಗ್ಯ ಸೇವೆಯಲ್ಲಿ ಆಶಾ ಕಾರ್ಯಕರ್ತೆಯರು ಪ್ರಮುಖ ಪಾತ್ರ ವಹಿಸುತ್ತಾರೆ. ಇಂತಹ ಕಾರ್ಯಕರ್ತೆಯರನ್ನು ನಿರ್ಲಕ್ಷಿಸುವುದು ಸರಿಯಲ್ಲ. ತಮ್ಮ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ, ಮಾಸಿಕ 15 ಸಾವಿರ ರೂ. ಗೌರವಧನ ನಿಗದಿಪಡಿಸಬೇಕೆಂದು ಆಗ್ರಹಿಸಿ, ಆಶಾ ಕಾರ್ಯಕರ್ತೆಯರು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಹಗಲು-ರಾತ್ರಿ ಎನ್ನದೆ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿದ್ದಾರೆ. ಚಳಿಯನ್ನೂ ಲೆಕ್ಕಿಸದೆ ತಮ್ಮ ಪುಟ್ಟ ಮಕ್ಕಳೊಂದಿಗೆ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.
ಸಂಬಂಧಪಟ್ಟ ಸಚಿವರು ಕೂಡಲೇ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ, ಸಮಸ್ಯೆ ಪರಿಹರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಕಾರ್ಯಕರ್ತೆಯರ ಬೇಡಿಕೆಗಳನ್ನು ಈಡೇರಿಸಿ ಧರಣಿ ಅಂತ್ಯಗೊಳಿಸಬೇಕು. ತಾಯಂದಿರು ಹೀಗೆ ಪ್ರತಿಭಟನೆ ನಡೆಸುತ್ತಿದ್ದರೂ ಮೌನವಾಗಿರುವುದು ನಾಗರಿಕ ಸರ್ಕಾರಕ್ಕೆ ಶೋಭೆ ತರುವುದಿಲ್ಲ ಎಂದು ಹೇಳಿದ್ದಾರೆ.
ಅಸ್ವಸ್ಥರಾದ ಆಶಾ ಕಾರ್ಯಕರ್ತೆಯರು
ಈ ನಡುವೆ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ನಡೆಸುತ್ತಿರುವ ಪ್ರತಿಭಟನೆಯ ವೇಳೆ ಇಬ್ಬರು ಆಶಾ ಕಾರ್ಯಕರ್ತೆಯರು ಅಸ್ವಸ್ಥರಾಗಿದ್ದಾರೆಂದು ತಿಳಿದುಬಂದಿದೆ.
ನಿರಂತರ ಪ್ರತಿಭಟನೆ, ನಿದ್ರೆಯ ಕೊರತೆ ಮತ್ತು ಬಳಲಿಕೆಯಿಂದ ಓರ್ವ ಕಾರ್ಯಕರ್ತೆ ಕುಸಿದು ಬಿದ್ದಿದ್ದಾರೆ. ಮತ್ತೊಬ್ಬರಿಗೆ ತೀವ್ರ ಶೀತ ಹಾಗೂ ಜ್ವರ ಕಾಣಿಸಿಕೊಂಡಿದೆ ಎಂದು ತಿಳಿದುಬಂದಿದೆ.
ಚಿತ್ರದುರ್ಗ ಜಿಲ್ಲೆಯ ದೀಪಾ ಎಂಬ ಕಾರ್ಯಕರ್ತೆಯನ್ನು ಪೊಲೀಸ್ ವಾಹನದಲ್ಲಿ ಮಲ್ಲೇಶ್ವರಂನ ಕೆ.ಸಿ. ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗುತ್ತಿದೆ.
ಇನ್ನೊಂದೆಡೆ, ಪ್ರತಿಭಟನೆಯಲ್ಲಿ ಪಾಲ್ಗೊಂಡಿರುವವರೊಂದಿಗೆ ಬಂದಿದ್ದ ಮೂವರು ಮಕ್ಕಳಿಗೂ ಜ್ವರ ಕಾಣಿಸಿಕೊಂಡಿದೆ. ಧೂಳು ಮತ್ತು ಚಳಿಯ ವಾತಾವರಣದಿಂದ ಮಕ್ಕಳ ಆರೋಗ್ಯದಲ್ಲಿ ಏರುಪೇರಾಗಿದೆ ಎನ್ನಲಾಗಿದೆ. ಪ್ರತಿಭಟನೆಯಲ್ಲಿ ಭಾಗವಹಿಸಿರುವ ಹಲವರಿಗೂ ಆರೋಗ್ಯ ಸಮಸ್ಯೆಗಳು ಎದುರಾಗಿವೆ ಎಂದು ಕಾರ್ಯಕರ್ತೆಯರು ತಿಳಿಸಿದ್ದಾರೆ.
ಆಶಾ ಕಾರ್ಯಕರ್ತೆಯರಿಗೆ ಮಾಸಿಕ 15 ಸಾವಿರ ರೂ. ನಿಗದಿತ ಗೌರವಧನ ನೀಡಬೇಕು ಎಂಬ ಪ್ರಮುಖ ಬೇಡಿಕೆಯೊಂದಿಗೆ ನವೆಂಬರ್ 17ರಂದು ಈ ಪ್ರತಿಭಟನೆ ಆರಂಭವಾಗಿದೆ. ತಮ್ಮ ಬೇಡಿಕೆ ಈಡೇರುವವರೆಗೂ ಹೋರಾಟ ಮುಂದುವರಿಸುವುದಾಗಿ ಕಾರ್ಯಕರ್ತೆಯರು ಪಟ್ಟು ಹಿಡಿದಿದ್ದಾರೆ.