ಬೆಂಗಳೂರು: ರಾಜ್ಯದ ನೆಲ, ಜಲ, ಭಾಷೆ ಹಾಗೂ ರೈತರ ಹಿತಾಸಕ್ತಿ ಸಂಬಂಧಿಸಿದ ಹೋರಾಟಗಳಲ್ಲಿ ಭಾಗವಹಿಸಿದ್ದ ರೈತರು ಮತ್ತು ಕನ್ನಡಪರ ಹೋರಾಟಗಾರರ ವಿರುದ್ಧ ದಾಖಲಿಸಿರುವ ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯುವ ಪ್ರಸ್ತಾಪವನ್ನು ಸಚಿವ ಸಂಪುಟದ ಮುಂದೆ ಮಂಡಿಸುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಗೃಹ ಇಲಾಖೆಗೆ ಸೂಚನೆ ನೀಡಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2021ರಿಂದ 2026ರ ಆಗಸ್ಟ್‌ವರೆಗೆ ವಿವಿಧ ಹೋರಾಟಗಳಿಗೆ ಸಂಬಂಧಿಸಿದಂತೆ ರೈತರು ಮತ್ತು ಕನ್ನಡಪರ ಹೋರಾಟಗಾರರ ವಿರುದ್ಧ ಒಟ್ಟು 193 ಪ್ರಕರಣಗಳನ್ನು ದಾಖಲಿಸಲಾಗಿದೆ. ಮಹದಾಯಿ, ಕಾವೇರಿ ಮತ್ತು ಮೇಕೆದಾಟು ಯೋಜನೆಗಳ ಪರವಾದ ಹೋರಾಟಗಳು, ಕೃಷಿ ಕಾಯ್ದೆಗಳ ವಿರುದ್ಧದ ಪ್ರತಿಭಟನೆಗಳು, ರೈತರ ವಿವಿಧ ಬೇಡಿಕೆಗಳು, ಕನ್ನಡ ಭಾಷೆಯ ರಕ್ಷಣೆ, ಗಡಿ ವಿವಾದ ಹಾಗೂ ಕನ್ನಡಿಗರಿಗೆ ಉದ್ಯೋಗಾವಕಾಶ ಕಲ್ಪಿಸುವಂತೆ ನಡೆದ ಹೋರಾಟಗಳಿಗೆ ಸಂಬಂಧಿಸಿದಂತೆ ಈ ಪ್ರಕರಣಗಳು ದಾಖಲಾಗಿವೆ.
ಗಂಭೀರ ಸ್ವರೂಪದ ಅಪರಾಧಗಳಿಗೆ ಸಂಬಂಧಿಸಿದ ಪ್ರಕರಣಗಳನ್ನು ಹೊರತುಪಡಿಸಿ, ಕಾನೂನು ಪ್ರಕ್ರಿಯೆಗಳನ್ನು ಅನುಸರಿಸಿ ಅರ್ಹ ಪ್ರಕರಣಗಳನ್ನು ಹಿಂಪಡೆಯುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದೇನೆ.
ಪ್ರಕರಣಗಳು ಬಾಕಿ ಉಳಿದಿರುವುದರಿಂದ ರೈತರು ಮತ್ತು ಹೋರಾಟಗಾರರು ಆರ್ಥಿಕ ಹಾಗೂ ಕಾನೂನು ಸಂಕಷ್ಟಗಳನ್ನು ಎದುರಿಸುತ್ತಿದ್ದಾರೆ. ಹೀಗಾಗಿ ಪ್ರಕರಣಗಳನ್ನು ಹಿಂಪಡೆಯುವ ಅಗತ್ಯವಿದೆ ಎಂದು ಅವರು ಮನವರಿಕೆ ಮಾಡಿದ್ದಾರೆ.
ಈ ಸಂಬಂಧ ಮುಂದಿನ ಸಚಿವ ಸಂಪುಟ ಸಭೆಯ ಮುಂದೆ ಪ್ರಸ್ತಾಪವನ್ನು ಮಂಡಿಸುವಂತೆ ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಮುಖ್ಯಮಂತ್ರಿ ಲಿಖಿತ ಸೂಚನೆ ನೀಡಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.