ಬೆಂಗಳೂರು: ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಲು ಸಾಮೂಹಿಕವಾಗಿ ಫಾರ್ಮ್-7 ಅರ್ಜಿಗಳನ್ನು ಸಲ್ಲಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಪಕ್ಷದ 10 ಬೂತ್ ಮಟ್ಟದ ಏಜೆಂಟ್‌ಗಳ (ಬಿಎಲ್‌ಎ) ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ಗಳ ತನಿಖೆಗೆ ಕರ್ನಾಟಕ ಹೈಕೋರ್ಟ್ ತಡೆ ನೀಡಿದೆ.
ಇತ್ತೀಚೆಗೆ ನಡೆದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭದಲ್ಲಿ ಮುಸ್ಲಿಂ ಸಮುದಾಯದ ಮತದಾರರನ್ನು ಗುರಿಯಾಗಿಸಿಕೊಂಡು ಫಾರ್ಮ್-7 ಅರ್ಜಿಗಳನ್ನು ಸಲ್ಲಿಸಲಾಗಿದೆ ಎಂಬ ಆರೋಪ ಕೇಳಿಬಂದಿತ್ತು.
ನ್ಯಾಯಮೂರ್ತಿ ಅನಂತ್ ರಾಮನಾಥ್ ಹೆಗ್ಡೆ ಅವರಿದ್ದ ಪೀಠ ಈ ಆದೇಶ ನೀಡಿದೆ. ಇದೇ ಪ್ರಕರಣದಲ್ಲಿ ಬಿಜೆಪಿ ಬೂತ್ ಮಟ್ಟದ ಏಜೆಂಟರಾದ ದೀಪಕ್ ಸಿಂಗ್ ಆರ್. ಮತ್ತು ಜಿ.ಎಸ್. ವಸಂತಲಕ್ಷ್ಮಿ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ಗಳಿಗೆ ಅಕ್ಟೋಬರ್ 9ರಂದು ನೀಡಿದ್ದ ತಡೆಯಾಜ್ಞೆಯನ್ನೂ ನ್ಯಾಯಾಲಯ ಮುಂದುವರಿಸಿದೆ.
ಮಲ್ಲೇಶ್ವರಂನಲ್ಲಿ 778 ಅರ್ಜಿ ಸಲ್ಲಿಕೆ ಆರೋಪ
ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ಎಂಟು ಮತಗಟ್ಟೆಗಳಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಮತದಾರರ ಹೆಸರುಗಳನ್ನು ಅಳಿಸುವ ಉದ್ದೇಶದಿಂದ ಒಟ್ಟು 778 ಫಾರ್ಮ್-7 ಅರ್ಜಿಗಳನ್ನು ಸಲ್ಲಿಸಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಇನ್ನು ಜಯನಗರ ಕ್ಷೇತ್ರದಲ್ಲಿ ಒಟ್ಟು 5,698 ಅರ್ಜಿಗಳನ್ನು ಸಲ್ಲಿಸಲಾಗಿದ್ದು, ಈ ಪೈಕಿ 4,327 ಅರ್ಜಿಗಳು ಗುರಪ್ಪನಪಾಳ್ಯ ವಾರ್ಡ್‌ಗೆ ಸಂಬಂಧಿಸಿವೆ ಎಂದು ಮತ್ತೊಂದು ದೂರಿನಲ್ಲಿ ತಿಳಿಸಲಾಗಿದೆ.
ಇದೇ ರೀತಿಯ ಅರ್ಜಿಗಳನ್ನು ಯಶವಂತಪುರ ಕ್ಷೇತ್ರದ ಮತದಾರರ ವಿರುದ್ಧ ಹಾಗೂ ಕೊಡಗು ಮತ್ತು ಮೈಸೂರು ಜಿಲ್ಲೆಗಳ ಮತದಾರರ ಹೆಸರು ಅಳಿಸುವುದಕ್ಕೂ ಸಲ್ಲಿಸಲಾಗಿದೆ ಎಂಬ ದೂರುಗಳೂ ದಾಖಲಾಗಿದ್ದವು.
ಅರ್ಜಿದಾರರ ವಾದವೇನು?
ತಮ್ಮ ವಿರುದ್ಧದ ಪ್ರಕರಣಗಳನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದ ಬಿಜೆಪಿ ಏಜೆಂಟರು, ತಾವು ಯಾವುದೇ ತಪ್ಪು ಮಾಡಿಲ್ಲ ಎಂದು ವಾದಿಸಿದ್ದರು. ಮತದಾರರ ಹೆಸರು ಅಳಿಸುವಂತೆ ತಾವು ಅರ್ಜಿ ಸಲ್ಲಿಸಿದ್ದರೂ, ಆ ಮತದಾರರ ವಿವರಗಳು ಮತ್ತು ಅರ್ಜಿಗಳ ಸತ್ಯಾಸತ್ಯತೆಯನ್ನು ಪರಿಶೀಲಿಸುವ ಅಧಿಕಾರ ಚುನಾವಣಾ ಅಧಿಕಾರಿಗಳಿಗೆ ಇದೆ ಎಂದು ತಿಳಿಸಿದ್ದರು.
ಆದರೆ, ಪೊಲೀಸರು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದರು. ನಿಗದಿತ ಮಿತಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಅರ್ಜಿಗಳನ್ನು ಸಲ್ಲಿಸಲಾಗಿದ್ದು, ನಿರ್ದಿಷ್ಟ ಸಮುದಾಯದ ಮತದಾರರ ಹೆಸರುಗಳನ್ನು ಸಾಮೂಹಿಕವಾಗಿ ಅಳಿಸುವ ಉದ್ದೇಶ ಹೊಂದಲಾಗಿತ್ತು ಎಂದು ವಾದಿಸಿದ್ದರು.
ಹೈಕೋರ್ಟ್ ಹೇಳಿದ್ದೇನು?
1960ರ ಮತದಾರರ ನೋಂದಣಿ ನಿಯಮಗಳನ್ನು ಪರಿಶೀಲಿಸಿದ ನ್ಯಾಯಮೂರ್ತಿ ಅನಂತ್ ರಾಮನಾಥ್ ಹೆಗ್ಡೆ, ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮತ್ತು ಹೆಸರು ತೆಗೆದುಹಾಕಲು ಕಾನೂನಿನಲ್ಲಿ ಸ್ಪಷ್ಟವಾದ ಪ್ರಕ್ರಿಯೆ ಇದೆ ಎಂದು ಅಭಿಪ್ರಾಯಪಟ್ಟರು.
ಯಾರಾದರೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಆಕ್ಷೇಪ ಅಥವಾ ಅರ್ಜಿ ಸಲ್ಲಿಸಿದರೆ, ಸಂಬಂಧಪಟ್ಟ ವ್ಯಕ್ತಿಗಳಿಗೆ ವಿಚಾರಣೆಗೆ ಹಾಜರಾಗಲು ಅವಕಾಶ ನೀಡಬೇಕು. ನೋಂದಣಿ ಅಧಿಕಾರಿಗಳು ಅರ್ಜಿಗಳನ್ನು ಪರಿಶೀಲಿಸಿ ತೀರ್ಮಾನ ಕೈಗೊಳ್ಳಬೇಕು. ಆ ತೀರ್ಮಾನದಿಂದ ಯಾರಿಗಾದರೂ ಅನ್ಯಾಯವಾದರೆ ಮೇಲ್ಮನವಿ ಸಲ್ಲಿಸಲೂ ಕಾನೂನಿನಲ್ಲಿ ಅವಕಾಶವಿದೆ ಎಂದು ನ್ಯಾಯಾಲಯ ಗಮನಿಸಿತು.
ಇಂತಹ ವ್ಯವಸ್ಥೆ ಇರುವಾಗ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಅಡಿಯಲ್ಲಿ ಅಪರಾಧದ ಅಂಶಗಳು ಸ್ಪಷ್ಟವಾಗಿ ಕಂಡುಬರದಿರುವ ಹಿನ್ನೆಲೆಯಲ್ಲಿ ತನಿಖೆಗೆ ಅವಕಾಶ ನೀಡುವುದಕ್ಕೆ ಸಮರ್ಥನೆ ಇಲ್ಲ ಎಂದು ಅಭಿಪ್ರಾಯಪಟ್ಟ ನ್ಯಾಯಾಲಯ, ಎಫ್‌ಐಆರ್‌ಗಳ ತನಿಖೆಗೆ ತಡೆ ನೀಡಿತು.