ಬೆಂಗಳೂರು: ವಿವಾದಾತ್ಮಕ ‘ಬಸವ ಮಂಟಪ’ ಕೃತಿಯ ಲೇಖಕ ರವಿ ಹಂಜ್ ಅವರನ್ನು ವಶಕ್ಕೆ ಪಡೆದಿರುವುದನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಹಾಗೂ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷ ಈಶ್ವರ್ ಖಂಡ್ರೆ ಶನಿವಾರ ಸ್ವಾಗತಿಸಿದ್ದಾರೆ. ಅಲ್ಲದೆ, ಲೇಖಕನ ವಿರುದ್ಧ ಆರೋಪಪಟ್ಟಿ ಸಲ್ಲಿಸಿ, ಕಾನೂನಿನ ಪ್ರಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಬಸವಣ್ಣನವರ ವಿರುದ್ಧ ನಿಂದನೀಯ ಅಥವಾ ಮಾನಹಾನಿಕರ ಹೇಳಿಕೆಗಳನ್ನು ಯಾರೂ ಸಹಿಸಲು ಸಾಧ್ಯವಿಲ್ಲ ಎಂದು ಖಂಡ್ರೆ ಸ್ಪಷ್ಟಪಡಿಸಿದ್ದಾರೆ.
ರವಿ ಹಂಜ್ ವಿರುದ್ಧ ಕ್ರಮ ಕೈಗೊಂಡ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಅಭಿನಂದಿಸುತ್ತೇನೆ ಎಂದು ಹೇಳಿದ್ದಾರೆ.
12ನೇ ಶತಮಾನದ ಸಮಾಜ ಸುಧಾರಕ ಬಸವಣ್ಣನವರ ಬಗ್ಗೆ ಕೃತಿಯಲ್ಲಿ ಅವಹೇಳನಕಾರಿ ಹೇಳಿಕೆಗಳನ್ನು ದಾಖಲಿಸಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ವಿವಾದ ತೀವ್ರಗೊಂಡಿದ್ದು, ಕೃತಿಯ ಪ್ರಕಟಣೆಯನ್ನು ಖಂಡ್ರೆ ಅವರು ತೀವ್ರವಾಗಿ ಖಂಡಿಸಿದ್ದಾರೆ. ಪುಸ್ತಕದ ಎಲ್ಲ ಪ್ರತಿಗಳನ್ನು ವಶಪಡಿಸಿಕೊಳ್ಳಬೇಕು ಹಾಗೂ ಲೇಖಕನ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಇದೇ ವೇಳೆ ಬಸವಣ್ಣನವರು ಸಮಾನತೆಗಾಗಿ ಹೋರಾಡಿದ ಮಹಾನ್ ಮಾನವತಾವಾದಿ ಎಂದು ಬಣ್ಣಿಸಿದ ಸಚಿವರು, ಶರಣರು ಪ್ರಜಾಪ್ರಭುತ್ವದ ಪರಿಕಲ್ಪನೆಯನ್ನು ಪರಿಚಯಿಸಿದ್ದರು. ಬಸವಣ್ಣನವರ ತತ್ವಾದರ್ಶಗಳು ಇಂದಿಗೂ ಅನುಕರಣೀಯವಾಗಿವೆ ಎಂದು ಹೇಳಿದ್ದಾರೆ.
‘ಬಸವ ಮಂಟಪ’ ಕೃತಿಯನ್ನು ವಶಪಡಿಸಿಕೊಳ್ಳಲು ರಾಜ್ಯ ಸಚಿವ ಸಂಪುಟ ಸರ್ವಾನುಮತದಿಂದ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಿಸಿದ ಬೆನ್ನಲ್ಲೇ ಖಂಡ್ರೆ ಈ ಹೇಳಿಕೆ ನೀಡಿದ್ದಾರೆ.
ಈ ವಿಚಾರವಾಗಿ ಬಸವ ಸಮಿತಿಯು ತಮಗೆ ಪತ್ರ ಬರೆದಿತ್ತು. ಈ ಬಗ್ಗೆ ಸಂಪುಟ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದರು.