ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

₹15 ಸಾವಿರ ಗೌರವಧನಕ್ಕೆ ಪಟ್ಟು; ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ಸರ್ಕಾರ ಸ್ಪಂದನೆ, ನಾಳೆ ಸಿಎಂ ಭೇಟಿ; ಈಡೇರುವುದೇ ಬೇಡಿಕೆ..?

ಬುಧವಾರ ಸಂಜೆ ಕಾರ್ಯಕರ್ತೆಯರ ಪ್ರತಿನಿಧಿಗಳೊಂದಿಗೆ ಮುಖ್ಯಮಂತ್ರಿ ಚರ್ಚೆ ನಡೆಸಿ, ಅವರ ಬೇಡಿಕೆಗಳ ಕುರಿತು ನಿರ್ಧಾರ ಕೈಗೊಳ್ಳಲಿದ್ದಾರೆ. ಪ್ರತಿಭಟನಾಕಾರರು ತಾಳ್ಮೆಯಿಂದ ಇರುವಂತೆ ಮನವಿ ಮಾಡುತ್ತೇನೆ.

ಸಂಗ್ರಹ ಚಿತ್ರ
Manjula VN
Updated On : 24 Nov 2026, 8:29 am

ಬೆಂಗಳೂರು: ಜಪಾನ್ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬುಧವಾರ ಬೆಂಗಳೂರಿಗೆ ಮರಳುವ ನಿರೀಕ್ಷೆಯಿದ್ದು, ಪ್ರತಿಭಟನಾನಿರತ ಆಶಾ ಕಾರ್ಯಕರ್ತೆಯರನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆಂದು ತಿಳಿದುಬಂದಿದೆ.

ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ ಅವರು, ಪ್ರತಿಭಟನಾನಿರತ ಆಶಾ ಕಾರ್ಯಕರ್ತೆಯರು ರಾಜ್ಯ ಸರ್ಕಾರದ ಮೇಲೆ ವಿಶ್ವಾಸವಿಡುವಂತೆ ಮನವಿ ಮಾಡಿದರು. ಅವರ ಎಲ್ಲ ಸಮಸ್ಯೆಗಳನ್ನು ಪರಿಹರಿಸುವ ಭರವಸೆಯನ್ನೂ ನೀಡಿದರು.

ಕೆಲವು ದಿನಗಳ ಹಿಂದೆ ಮುಖ್ಯಮಂತ್ರಿ ಶಿವಕುಮಾರ್ ಆಶಾ ಕಾರ್ಯಕರ್ತೆಯರ ಪ್ರತಿನಿಧಿಗಳನ್ನು ಭೇಟಿಯಾಗಿ, ಅವರ ಸಮಸ್ಯೆಗಳನ್ನು ಬಗೆಹರಿಸುವ ಭರವಸೆ ನೀಡಿದ್ದರು. ಬುಧವಾರ ಸಂಜೆ ಕಾರ್ಯಕರ್ತೆಯರ ಪ್ರತಿನಿಧಿಗಳೊಂದಿಗೆ ಮುಖ್ಯಮಂತ್ರಿ ಚರ್ಚೆ ನಡೆಸಿ, ಅವರ ಬೇಡಿಕೆಗಳ ಕುರಿತು ನಿರ್ಧಾರ ಕೈಗೊಳ್ಳಲಿದ್ದಾರೆ. ಪ್ರತಿಭಟನಾಕಾರರು ತಾಳ್ಮೆಯಿಂದ ಇರುವಂತೆ ಮನವಿ ಮಾಡುತ್ತೇನೆ ಎಂದು ಹೇಳಿದರು.

Advertisement

Advertisement

ಇದೇ ವೇಳೆ ಬೇಡಿಕೆಗಳನ್ನು ಈಡೇರಿಸುವ ಕುರಿತು ಲಿಖಿತ ಭರವಸೆ ನೀಡಬೇಕೆಂಬ ಆಶಾ ಕಾರ್ಯಕರ್ತೆಯರ ಒತ್ತಾಯಕ್ಕೆ ಪ್ರತಿಕ್ರಿಯಿಸಿದ ಅವರು, ಅವರ ಸಮಸ್ಯೆಗಳನ್ನು ಪರಿಹರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ತಿಳಿಸಿದರು.

ಇದೇ ವೇಳೆ, ಮಾಸಿಕ ಗೌರವಧನವನ್ನು ₹15,000ಕ್ಕೆ ಹೆಚ್ಚಿಸುವಂತೆ ಒತ್ತಾಯಿಸಿ ಸಾವಿರಾರು ಆಶಾ ಕಾರ್ಯಕರ್ತೆಯರು ಸೋಮವಾರ ತಮ್ಮ ಹಗಲು-ರಾತ್ರಿ ಪ್ರತಿಭಟನೆಯ ಏಳನೇ ದಿನದಂದು ಬೆಂಗಳೂರಿನ ಫ್ರೀಡಂ ಪಾರ್ಕ್ ಸುತ್ತಲೂ ಮಾನವ ಸರಪಳಿ ನಿರ್ಮಿಸಿದರು.

ಕೈ ಕೈ ಹಿಡಿದು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ ಕಾರ್ಯಕರ್ತೆಯರು, ಸರ್ಕಾರ ತಮ್ಮ ಬೇಡಿಕೆಗಳಿಗೆ ಸ್ಪಂದಿಸದಿದ್ದರೂ ಹೋರಾಟದ ಉತ್ಸಾಹ ಕುಂದಿಲ್ಲ ಎಂದು ಹೇಳಿದರು. ಕರ್ನಾಟಕದ ಎಲ್ಲ 31 ಜಿಲ್ಲೆಗಳಿಂದಲೂ ಕಾರ್ಯಕರ್ತೆಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Also Read

ಆಶಾ ಕಾರ್ಯಕರ್ತೆಯರ ಪ್ರತಿಭಟನೆ 5ನೇ ದಿನಕ್ಕೆ ; ಅಹೋರಾತ್ರಿ ಧರಣಿ: ಮುಖ್ಯಮಂತ್ರಿಗಳ ಮನವೊಲಿಕೆ ಪ್ರಯತ್ನ ವಿಫಲ

ಸರ್ಕಾರ ಈ ಹಿಂದೆ ನೀಡಿದ್ದ ಭರವಸೆಗಳಿಂದ ಹಿಂದೆ ಸರಿದಿದೆ ಎಂದು ಆರೋಪಿಸಿದ ಅವರು, ಗೌರವಧನ ಹೆಚ್ಚಳದ ಕುರಿತು ತಕ್ಷಣ ನಿರ್ಧಾರ ಕೈಗೊಳ್ಳುವಂತೆ ಒತ್ತಾಯಿಸಿದರು.

ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಎಐಯುಟಿಯುಸಿ ಅಖಿಲ ಭಾರತ ಅಧ್ಯಕ್ಷ ಕೆ. ರಾಧಾಕೃಷ್ಣ, ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ದೇಶಾದ್ಯಂತ ಸಾರ್ವಜನಿಕ ಬೆಂಬಲ ವ್ಯಕ್ತವಾಗುತ್ತಿದೆ ಎಂದು ಹೇಳಿದರು.

ಆಶಾ ಕಾರ್ಯಕರ್ತೆಯರ ಸೇವೆಗೆ ವ್ಯಾಪಕ ಗೌರವವಿದ್ದರೂ ರಾಜ್ಯ ಸರ್ಕಾರ ಅವರನ್ನು ಗೌರವಯುತವಾಗಿ ನಡೆಸಿಕೊಳ್ಳುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿದರು.

ಮಹಿಳೆಯರು ಪುರುಷರಿಗಿಂತ ಕೀಳು ಅಥವಾ ಯಾವುದೇ ಕೆಲಸ ಮಾಡಲು ಅಸಮರ್ಥರು ಎಂಬ ಮನೋಭಾವವನ್ನು ಪ್ರಶ್ನಿಸುತ್ತಿರುವ ಈ ಹೋರಾಟವನ್ನು ಸಾಂಸ್ಕೃತಿಕ ಹೋರಾಟ ಎಂದು ಬಣ್ಣಿಸಿದರು.

ಕರ್ನಾಟಕ ರೈತ ಸೇನೆಯ ಅಧ್ಯಕ್ಷೆ ಸುಷ್ಮಾ ಶ್ರೀನಿವಾಸ್ ಮಾತನಾಡಿ, ಆಶಾ ಕಾರ್ಯಕರ್ತೆಯರು ಕೇವಲ ಎರಡು ಗಂಟೆ ಕೆಲಸ ಮಾಡುತ್ತಾರೆ ಎಂಬ ವಾದವನ್ನು ತಳ್ಳಿಹಾಕಿದರು. ಅವರು ದಿನದ 24 ಗಂಟೆಯೂ ಸೇವೆ ಸಲ್ಲಿಸುತ್ತಾರೆ ಎಂದು ತಿಳಿಸಿ, ಕಾರ್ಯಕರ್ತೆಯರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸುತ್ತಿರುವ ರೀತಿಯನ್ನು ಪ್ರಶ್ನಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments