ಬೇರೆ ಜಾತಿ ವಿವಾಹಿತ ಮಹಿಳೆಯ ಮದುವೆಯಾಗಲು ನಿರ್ಧಾರ; ಮಲಗಿದ್ದ ಮಗನನ್ನೇ ಕಟ್ಟಿಗೆಯಿಂದ ಹೊಡೆದು ಕೊಂದ ತಾಯಿ!
ಬೆಂಗಳೂರಿನ ಮತ್ತಿಕೆರೆಯ ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಮುತ್ತುರಾಜ್, ವಾರಾಂತ್ಯದಲ್ಲಿ ತುಮಕೂರು ಜಿಲ್ಲೆಯ ತನ್ನ ಸ್ವಗ್ರಾಮ ಜಕ್ಕೆನಹಳ್ಳಿಗೆ ಬರುತ್ತಿದ್ದ. ಬಿಡುವಿನ ವೇಳೆಯಲ್ಲಿ ಅಡುಗೆ ಕೆಲಸವನ್ನೂ ಮಾಡುತ್ತಿದ್ದ..
ತುಮಕೂರು: ಬೇರೆ ಜಾತಿಯ ವಿವಾಹಿತ ಮಹಿಳೆಯನ್ನು ಮದುವೆಯಾಗಲು ಮಗ ನಿರ್ಧರಿಸಿದ್ದಕ್ಕೆ ಆಕ್ರೋಶಗೊಂಡ ತಾಯಿಯೊಬ್ಬರು, ಮಲಗಿದ್ದ ಮಗನ ತಲೆಗೆ ಕಟ್ಟಿಗೆಯಿಂದ ಹೊಡೆದು ಕೊಲೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ.
ಮಗನ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದ 55 ವರ್ಷದ ತಾಯಿ ಶಿವಮ್ಮ, ಭಾನುವಾರ ತಡರಾತ್ರಿ ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ. ಘಟನೆ ಸಂಬಂಧ ಪೊಲೀಸರು ಆಕೆಯನ್ನು ಬಂಧಿಸಿದ್ದಾರೆ. ಕೊಲೆಯಾದ ಯುವಕನನ್ನು 33 ವರ್ಷದ ಮುತ್ತುರಾಜ್ ಎಂದು ಗುರುತಿಸಲಾಗಿದೆ.
ಮೂಲಗಳ ಪ್ರಕಾರ ಬೆಂಗಳೂರಿನ ಮತ್ತಿಕೆರೆಯ ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಮುತ್ತುರಾಜ್, ವಾರಾಂತ್ಯದಲ್ಲಿ ತುಮಕೂರು ಜಿಲ್ಲೆಯ ತನ್ನ ಸ್ವಗ್ರಾಮ ಜಕ್ಕೆನಹಳ್ಳಿಗೆ ಬರುತ್ತಿದ್ದ. ಬಿಡುವಿನ ವೇಳೆಯಲ್ಲಿ ಅಡುಗೆ ಕೆಲಸವನ್ನೂ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಲಕ್ಷ್ಮೀ ಪೂಜೆ ಹೆಸರಿನಲ್ಲಿ ವೇಶ್ಯಾವಾಟಿಕೆ ದಂಧೆ; ತಲೆಮರೆಸಿಕೊಂಡಿದ್ದ ಅರ್ಚಕ ಕೊನೆಗೂ ಬಂಧನ; ಯಾರು ಈ ಕೃಷ್ಣಮಾಚಾರಿ?
ಭಾನುವಾರ ರಾತ್ರಿ ಮುತ್ತುರಾಜ್ ಮನೆಯ ಹೊರಗೆ ಮಲಗಿದ್ದಾಗ ತಾಯಿ ಶಿವಮ್ಮ ಕಟ್ಟಿಗೆಯಿಂದ ಆತನ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ತಲೆಗೆ ಹಾಗೂ ದೇಹದ ಇತರ ಭಾಗಗಳಿಗೆ ತೀವ್ರ ಪೆಟ್ಟು ಬಿದ್ದ ಪರಿಣಾಮ ಅಪಾರ ರಕ್ತಸ್ರಾವವಾಗಿ ಮುತ್ತುರಾಜ್ ಮೃತಪಟ್ಟಿದ್ದಾನೆ.
ಸೋಮವಾರ ಬೆಳಗ್ಗೆ ಆತನ ಸಹೋದರಿ ಎಬ್ಬಿಸಲು ಹೋದಾಗ ಮುತ್ತುರಾಜ್ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ಬಳಿಕ ಘಟನೆ ಕುರಿತು ಪೊಲೀಸರಿಗೆ ಮಾಹಿತಿ ನೀಡಲಾಗಿದೆ.
ವಿವಾಹಿತ ಮಹಿಳೆಯನ್ನು ಮದುವೆಯಾಗಲು ಬಯಸಿದ್ದ ಮಗ
ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಮುತ್ತುರಾಜ್ ಬೇರೆ ಜಾತಿಗೆ ಸೇರಿದ ವಿವಾಹಿತ ಮಹಿಳೆಯೊಬ್ಬರನ್ನು ಮದುವೆಯಾಗಲು ನಿರ್ಧರಿಸಿದ್ದ.
ಆ ಮಹಿಳೆಗೆ ಈಗಾಗಲೇ ಮದುವೆಯಾಗಿದ್ದು, ಇಬ್ಬರು ಮಕ್ಕಳೂ ಇದ್ದಾರೆ. ಆದರೆ, ಮಗನ ಈ ನಿರ್ಧಾರಕ್ಕೆ ತಾಯಿ ಶಿವಮ್ಮ ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ವಿವಾಹಿತ ಮಹಿಳೆಯನ್ನು ಮದುವೆಯಾಗುವ ಬದಲು ಅವಿವಾಹಿತ ಯುವತಿಯನ್ನು ಮದುವೆಯಾಗುವಂತೆ ಸಲಹೆ ನೀಡಿದ್ದರು.
ಆದರೂ ತಾಯಿಯ ವಿರೋಧದ ನಡುವೆಯೂ ಮುತ್ತುರಾಜ್ ತನ್ನ ನಿರ್ಧಾರದಿಂದ ಹಿಂದೆ ಸರಿದಿರಲಿಲ್ಲ. ಇದರಿಂದ ಆಕ್ರೋಶಗೊಂಡ ಶಿವಮ್ಮ, ಮಗ ಮಲಗಿದ್ದಾಗ ಕಟ್ಟಿಗೆಯಿಂದ ಹೊಡೆದು ಕೊಲೆ ಮಾಡಿದ್ದಾರೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಮುತ್ತುರಾಜ್ ತಾಯಿ ಶಿವಮ್ಮ ವಿರುದ್ಧ ಕೊಲೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆಕೆಯನ್ನು ಬಂಧಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.