Form 7 ವಿವಾದ: BJP ಶಾಸಕ ಸಿ.ಕೆ. ರಾಮಮೂರ್ತಿ ವಿರುದ್ಧದ ತನಿಖೆಗೆ ಹೈಕೋರ್ಟ್ ಅಸ್ತು; ಬಂಧಿಸದಂತೆ ಪೊಲೀಸರಿಗೆ ಸೂಚನೆ..!
ಬೆಂಗಳೂರು ಜಯನಗರ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುವ ಶಾಸಕ ಕೆ.ಸಿ. ರಾಮಮೂರ್ತಿ, ರಾಮಕೃಷ್ಣ, ರವಿಕುಮಾರ್ ವಿ. ಮತ್ತು ಯೋಗೇಶ್ ಡಿ.ಆರ್. ಅವರು ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ನ ಕಾನೂನುಬದ್ಧತೆಯನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.
ಬೆಂಗಳೂರು: ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಕ್ರಮವಾಗಿ ತೆಗೆದುಹಾಕಲು 'ಫಾರ್ಮ್-7' ಅನ್ನು ದುರ್ಬಳಕೆ ಮಾಡಿಕೊಂಡ ಆರೋಪಕ್ಕೆ ಸಂಬಂಧಿಸಿದಂತೆ, ಜಯನಗರದ ಬಿಜೆಪಿ ಶಾಸಕ ಸಿ.ಕೆ. ರಾಮಮೂರ್ತಿ ಮತ್ತು ಇತರ ಮೂವರ ವಿರುದ್ಧದ ಪೊಲೀಸ್ ತನಿಖೆಯನ್ನು ಮುಂದುವರಿಸಲು ಕರ್ನಾಟಕ ಹೈಕೋರ್ಟ್ ಅನುಮತಿ ನೀಡಿದೆ. ಆದರೆ, ನ್ಯಾಯಾಲಯದ ಪೂರ್ವಾನುಮತಿಯಿಲ್ಲದೆ ಆರೋಪಿಗಳನ್ನು ಬಂಧಿಸದಂತೆ ಮತ್ತು ಆರೋಪಪಟ್ಟಿ (ಚಾರ್ಜ್‌ಶೀಟ್) ಸಲ್ಲಿಸದಂತೆ ತನಿಖಾಧಿಕಾರಿಗಳಿಗೆ ಮಹತ್ವದ ನಿರ್ದೇಶನ ನೀಡಿದೆ.
ಪೊಲೀಸರು ಬಿಜೆಪಿ ಶಾಸಕ ಕೆ.ಸಿ. ರಾಮಮೂರ್ತಿ ಮತ್ತು ಇತರರನ್ನು ಬಂಧಿಸುವುದಿಲ್ಲ ಎಂಬ ಭರವಸೆ ನೀಡಿದ ಹಿನ್ನೆಲೆಯಲ್ಲಿ ನ್ಯಾಯಮೂರ್ತಿ ಅನಂತ ರಾಮನಾಥ ಹೆಗ್ಡೆ ಅವರಿದ್ದ ಪೀಠ ಮಧ್ಯಂತರ ಆದೇಶ ಹೊರಡಿಸಿದೆ.
ಬೆಂಗಳೂರು ಜಯನಗರ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುವ ಶಾಸಕ ಕೆ.ಸಿ. ರಾಮಮೂರ್ತಿ, ರಾಮಕೃಷ್ಣ, ರವಿಕುಮಾರ್ ವಿ. ಮತ್ತು ಯೋಗೇಶ್ ಡಿ.ಆರ್. ಅವರು ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ನ ಕಾನೂನುಬದ್ಧತೆಯನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.
ಫಾರಂ-7 ಅರ್ಜಿಗಳ ಸಲ್ಲಿಕೆ ಪ್ರಕ್ರಿಯೆಯು ಚುನಾವಣಾಧಿಕಾರಿಗಳ ಶಾಸನಬದ್ಧ ವಿಚಾರಣೆಗೆ ಒಳಪಟ್ಟಿರುತ್ತದೆ. ಹೀಗಾಗಿ, ಚುನಾವಣಾ ಆಯೋಗದ ಸಾಂವಿಧಾನಿಕ ಅಧಿಕಾರವನ್ನು ಪೊಲೀಸರು ತಮ್ಮ ಕೈಗೆ ತೆಗೆದುಕೊಳ್ಳಲು ಸಾಧ್ಯವಿಲ್ಲ ಎಂದು ಅರ್ಜಿದಾರರು ವಾದಿಸಿದ್ದಾರೆ.
ಅಕ್ಟೋಬರ್ 7ರಂದು ದಾಖಲಾಗಿದ್ದ ಎಫ್‌ಐಆರ್‌ನಲ್ಲಿ ಶಾಸಕ ಕೆ.ಸಿ. ರಾಮಮೂರ್ತಿ ಅವರ ಹೆಸರನ್ನು ಆರೋಪಿಯಾಗಿ ಉಲ್ಲೇಖಿಸಿರಲಿಲ್ಲ. ಆದರೆ, ವಿಚಾರಣಾ ನ್ಯಾಯಾಲಯದಿಂದ ಅನುಮತಿ ಪಡೆದ ಬಳಿಕ ಪೊಲೀಸರು ಅವರನ್ನು ಆರೋಪಿಗಳ ಪಟ್ಟಿಗೆ ಸೇರಿಸಿದ್ದರು.
ಇದೇ ರೀತಿಯ ಪ್ರಕರಣಗಳಲ್ಲಿ ಹೈಕೋರ್ಟ್ ಈ ಹಿಂದೆ ಅರ್ಜಿದಾರರಿಗೆ ರಕ್ಷಣೆ ನೀಡಿದ್ದು, ತನಿಖೆಗೆ ತಡೆ ನೀಡದಿದ್ದರೂ ಬಂಧಿಸದಂತೆ ಪೊಲೀಸರಿಗೆ ನಿರ್ದೇಶನ ನೀಡಿತ್ತು ಎಂದು ಅರ್ಜಿದಾರರ ಪರ ವಕೀಲರು ನ್ಯಾಯಾಲಯದ ಗಮನಕ್ಕೆ ತಂದರು.
ಇದಕ್ಕೆ ಪ್ರತಿಯಾಗಿ, ಪ್ರಕರಣದಲ್ಲಿ ತನಿಖೆ ನಡೆಸುವ ಅಗತ್ಯವಿದೆ ಎಂದು ಹೆಚ್ಚುವರಿ ರಾಜ್ಯ ಸರ್ಕಾರಿ ಅಭಿಯೋಜಕರು ವಾದಿಸಿದರು.
ಹಿಂದಿನ ಇದೇ ರೀತಿಯ ಪ್ರಕರಣಗಳಲ್ಲಿ ಅರ್ಜಿದಾರರನ್ನು ಬಂಧಿಸುವುದಿಲ್ಲ ಎಂದು ಸರ್ಕಾರ ಭರವಸೆ ನೀಡಿತ್ತು. ಈ ಪ್ರಕರಣದಲ್ಲೂ ಬಂಧಿಸುವುದಿಲ್ಲ. ಆದರೆ, ಅರ್ಜಿದಾರರು ತನಿಖೆಗೆ ಸಹಕರಿಸಬೇಕು ಎಂದು ತಿಳಿಸಿದರು.
ವಾದ ಆಲಿಸಿದ ನ್ಯಾಯಾಲಯ, ಸದ್ಯಕ್ಕೆ ಪ್ರಕರಣದ ವಿಚಾರಣಾ ಪ್ರಕ್ರಿಯೆಗೆ ತಡೆ ನೀಡುವಂತೆ ಅರ್ಜಿದಾರರು ಸಲ್ಲಿಸಿರುವ ಮನವಿಯನ್ನು ಪುರಸ್ಕರಿಸಲು ನಿರಾಕರಿಸಿತು.
ಅರ್ಜಿದಾರರು ತನಿಖೆಗೆ ಸಂಪೂರ್ಣ ಸಹಕಾರ ನೀಡಬೇಕು. ಪೊಲೀಸರು ಅವರನ್ನು ಬಂಧಿಸಬಾರದು. ನ್ಯಾಯಾಲಯದ ಅನುಮತಿ ಪಡೆಯದೆ ಆರೋಪಪಟ್ಟಿಯನ್ನೂ ಸಲ್ಲಿಸಬಾರದು ಎಂದು ನ್ಯಾಯಪೀಠ ಆದೇಶಿಸಿದೆ. ಪ್ರಕರಣದ ಮುಂದಿನ ವಿಚಾರಣೆಯನ್ನು ಜನವರಿ 8ಕ್ಕೆ ಮುಂದೂಡಿದೆ.
ಬೆಂಗಳೂರಿನ ಬಿಟಿಎಂ ಲೇಔಟ್ ನಿವಾಸಿ ತೆಹ್ರಾನ್ ಅಲಿ ಖಾನ್ ನೀಡಿದ ದೂರಿನ ಆಧಾರದ ಮೇಲೆ ಸುಧ್ದಗುಂಟೆಪಾಳ್ಯ ಪೊಲೀಸರು ಎಫ್‌ಐಆರ್ ದಾಖಲಿಸಿದ್ದರು. ಇದೇ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ನ ಮಾಜಿ ಶಾಸಕಿ ಸೌಮ್ಯಾ ರೆಡ್ಡಿ ದೂರು ನೀಡಿದ ಎರಡು ದಿನಗಳ ಬಳಿಕ ಈ ಎಫ್‌ಐಆರ್ ದಾಖಲಾಗಿತ್ತು.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.