ಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಕೆಗೆ ಸರ್ಕಾರ ಬದ್ಧ; ಆದರೆ ಲಿಖಿತ ಭರವಸೆ ನೀಡಲು ಸಾಧ್ಯವಿಲ್ಲ: CM DK ಶಿವಕುಮಾರ್
ಆಶಾ ಕಾರ್ಯಕರ್ತೆಯರ ಬೇಡಿಕೆಗಳ ಬಗ್ಗೆ ರಾಜ್ಯ ಸರ್ಕಾರ ಸಹಾನುಭೂತಿ ಹೊಂದಿದೆ. ಅವರ ಸಮಸ್ಯೆಗಳನ್ನು ಅರ್ಥಮಾಡಿಕೊಂಡಿದ್ದೇವೆ. ಆದರೆ, ಎಲ್ಲ ಬೇಡಿಕೆಗಳನ್ನೂ ಈಡೇರಿಸುವುದಾಗಿ ಲಿಖಿತ ಭರವಸೆ ನೀಡಲು ಸಾಧ್ಯವಿಲ್ಲ..
ಕೊಪ್ಪಳ: ಕಳೆದ 10 ದಿನಗಳಿಂದ ನಡೆಯುತ್ತಿರುವ ಆಶಾ ಕಾರ್ಯಕರ್ತೆಯರ ಹೋರಾಟದ ಕುರಿತು ಮಾತನಾಡಿರುವ ಸಿಎಂ ಡಿಕೆ ಶಿವಕುಮಾರ್, 'ಬೇಡಿಕೆ ಈಡೇರಿಕೆಗೆ ಸರ್ಕಾರ ಬದ್ಧ, ಆದರೆ ಲಿಖಿತ ಭರವಸೆ ನೀಡಲು ಸಾಧ್ಯವಿಲ್ಲ' ಎಂದು ಕಡ್ಡಿ ಮುರಿದಂತೆ ನೇರವಾಗಿ ಹೇಳಿದ್ದಾರೆ.
ಕೊಪ್ಪಳದ ಬಸಾಪುರ ಏರ್‌ಸ್ಟ್ರಿಪ್ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಡಿಕೆ ಶಿವಕುಮಾರ್, 'ಆಶಾ ಕಾರ್ಯಕರ್ತೆಯರ ಬೇಡಿಕೆಗಳ ಬಗ್ಗೆ ರಾಜ್ಯ ಸರ್ಕಾರ ಸಹಾನುಭೂತಿ ಹೊಂದಿದೆ. ಅವರ ಸಮಸ್ಯೆಗಳನ್ನು ಅರ್ಥಮಾಡಿಕೊಂಡಿದ್ದೇವೆ. ಆದರೆ, ಎಲ್ಲ ಬೇಡಿಕೆಗಳನ್ನೂ ಈಡೇರಿಸುವುದಾಗಿ ಲಿಖಿತ ಭರವಸೆ ನೀಡಲು ಸಾಧ್ಯವಿಲ್ಲ ಎಂದು ಡಿ.ಕೆ. ಶಿವಕುಮಾರ್ ಹೇಳಿದರು.
"ಅವರು ನಮ್ಮ ಹೆಣ್ಣುಮಕ್ಕಳಿದ್ದಂತೆ. ಅವರ ಶ್ರಮವನ್ನು ನಾವು ಗೌರವಿಸುತ್ತೇವೆ. ಅವರ ಕಷ್ಟಗಳೂ ನಮಗೆ ಅರ್ಥವಾಗುತ್ತವೆ. ಈಗಾಗಲೇ ಅವರೊಂದಿಗೆ ಮತ್ತು ಅಧಿಕಾರಿಗಳೊಂದಿಗೆ ಮಾತನಾಡಿದ್ದೇನೆ" ಎಂದು ಡಿಕೆಶಿ ಹೇಳಿದರು.
ಕೇಂದ್ರ ಸರ್ಕಾರದ ಮೇಲೂ ಒತ್ತಡ ಹೇರಿ
ಇದೇ ವೇಳೆ ಆಶಾ ಕಾರ್ಯಕರ್ತೆಯರು ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಕೇಂದ್ರ ಸರ್ಕಾರದ ಮೇಲೆಯೂ ಒತ್ತಡ ಹೇರಬೇಕು ಎಂದು ಡಿಕೆಶಿ ಸಲಹೆ ನೀಡಿದರು. ರಾಜ್ಯ ಸರ್ಕಾರ ಅವರ ಸಮಸ್ಯೆಗಳನ್ನು ನಿರ್ಲಕ್ಷಿಸಿಲ್ಲ ಎಂದು ಸ್ಪಷ್ಟಪಡಿಸಿದರು.
ಅಲ್ಲದೆ ಆಶಾ ಕಾರ್ಯಕರ್ತೆಯರ ಪ್ರತಿಭಟನೆಯನ್ನು ರಾಜಕೀಯಗೊಳಿಸಬಾರದು ಎಂದು ಮನವಿ ಮಾಡಿದ ಅವರು, ಕೆಲಸಕ್ಕೆ ಮರಳುವಂತೆ ಸರ್ಕಾರ ಕಾರ್ಯಕರ್ತೆಯರಿಗೆ ಸೂಚಿಸಿದೆ ಎಂದರು.
ವಿಧಾನಮಂಡಲ ಅಧಿವೇಶನದ ಸಂದರ್ಭದಲ್ಲಿ ಆಶಾ ಕಾರ್ಯಕರ್ತೆಯರಿಗೆ ಶುಭ ಸುದ್ದಿ ಸಿಗಬಹುದೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಈ ಕುರಿತು ಚರ್ಚೆ ನಡೆಸಿದ ಬಳಿಕ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಬಲ್ಡೋಟಾ ಕಾರ್ಖಾನೆ ವಿವಾದ: ಕೆರೆ ನಿರ್ಮಾಣ ಸಾಧ್ಯತೆ ಪರಿಶೀಲನೆ
ಇದೇ ವೇಳೆ ಬಲ್ಡೋಟಾ ಕಾರ್ಖಾನೆ ವಿವಾದದ ಕುರಿತು ಮಾತನಾಡಿದ ಡಿ.ಕೆ. ಶಿವಕುಮಾರ್, ಸ್ಥಳೀಯರ ಬೇಡಿಕೆ ಹಾಗೂ ಗವಿಸಿದ್ದೇಶ್ವರ ಸ್ವಾಮೀಜಿಗಳ ಮನವಿಯ ಹಿನ್ನೆಲೆಯಲ್ಲಿ ಆ ಭಾಗದಲ್ಲಿ ಕೆರೆ ನಿರ್ಮಿಸುವ ಸಾಧ್ಯತೆ ಕುರಿತು ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.
ಅಧಿಕಾರಿಗಳ ವರದಿ ಬಂದ ಬಳಿಕ ಈ ಕುರಿತು ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು.