ವಾಲ್ಮೀಕಿ ನಿಗಮ ಹಗರಣ: ನಾಗೇಂದ್ರಗೆ ಕ್ಲೀನ್ ಚಿಟ್ ನೀಡಿದ್ದೇಕೆ? ಕಾರಣ ಬಿಚ್ಚಿಟ್ಟ ಗೃಹ ಸಚಿವ ಪ್ರಿಯಾಂಕ್ ಖರ್ಗೆ..!
ತನಿಖಾಧಿಕಾರಿಗಳಿಗೆ ನಾಗೇಂದ್ರ ಅವರನ್ನು ಅಕ್ರಮ ಹಣ ವರ್ಗಾವಣೆಯೊಂದಿಗೆ ಸಂಪರ್ಕಿಸುವ ಯಾವುದೇ ಹಣದ ಜಾಡು ಪತ್ತೆಯಾಗಿಲ್ಲ. ವಿವಿಧ ಬ್ಯಾಂಕ್ ಖಾತೆಗಳಿಗೆ ವರ್ಗಾವಣೆಯಾಗಿದ್ದ ಹಣದಲ್ಲಿ ಸುಮಾರು ಶೇ.90ರಷ್ಟು ವಸೂಲಿ ಮಾಡಲಾಗಿದೆ.
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರ್ಬಳಕೆ ಪ್ರಕರಣದಲ್ಲಿ ಮಾಜಿ ಸಚಿವ ಬಿ. ನಾಗೇಂದ್ರ ಅವರಿಗೆ ಅಪರಾಧ ತನಿಖಾ ಇಲಾಖೆ (ಸಿಐಡಿ) ಕ್ಲೀನ್ ಚಿಟ್ ನೀಡಿರುವುದನ್ನು ರಾಜ್ಯ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಮರ್ಥಿಸಿಕೊಂಡಿದ್ದಾರೆ.
ರಾಮನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಕ್ಷ್ಯಗಳು, ದಾಖಲೆಗಳು ಹಾಗೂ ಅವರ ವಿರುದ್ಧ ಹಣದ ವಹಿವಾಟಿನ ಯಾವುದೇ ಸುಳಿವು ಸಿಗದಿರುವ ಆಧಾರದ ಮೇಲೆ ಈ ನಿರ್ಧಾರ ಕೈಗೊಳ್ಳಲಾಗಿದೆ. ಇದರಲ್ಲಿ ಯಾವುದೇ ರಾಜಕೀಯ ಹಸ್ತಕ್ಷೇಪವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ತನಿಖಾಧಿಕಾರಿಗಳಿಗೆ ನಾಗೇಂದ್ರ ಅವರನ್ನು ಅಕ್ರಮ ಹಣ ವರ್ಗಾವಣೆಯೊಂದಿಗೆ ಸಂಪರ್ಕಿಸುವ ಯಾವುದೇ ಹಣದ ಜಾಡು ಪತ್ತೆಯಾಗಿಲ್ಲ. ವಿವಿಧ ಬ್ಯಾಂಕ್ ಖಾತೆಗಳಿಗೆ ವರ್ಗಾವಣೆಯಾಗಿದ್ದ ಹಣದಲ್ಲಿ ಸುಮಾರು ಶೇ.90ರಷ್ಟು ವಸೂಲಿ ಮಾಡಲಾಗಿದೆ.
ಸಾಕ್ಷ್ಯಾಧಾರಗಳ ಆಧಾರದ ಮೇಲೆಯೇ ಕ್ಲೀನ್ ಚಿಟ್ ನೀಡಲಾಗುತ್ತದೆ. ಈ ಹಿಂದೆಯೂ ಅವರ ವಿರುದ್ಧ ಹಣದ ಜಾಡು ಪತ್ತೆಯಾಗಿಲ್ಲ ಎಂದು ಹೇಳಿದ್ದೆವು. ವಿವಿಧ ಬ್ಯಾಂಕ್‌ಗಳಿಗೆ ವರ್ಗಾವಣೆಯಾಗಿದ್ದ ಹಣದಲ್ಲಿ ಸುಮಾರು ಶೇ.90ರಷ್ಟು ವಾಪಸ್ ಪಡೆಯಲಾಗಿದೆ. ಎಲ್ಲ ದಾಖಲೆಗಳೂ ನಿಮ್ಮ ಮುಂದಿವೆ ಎಂದು ಹೇಳಿದರು.
ಇದೇ ವೇಳೆ ಹಗರಣದ ಬಳಿಕ ನಾಗೇಂದ್ರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದ ವಿಚಾರ ಪ್ರಸ್ತಾಪಿಸಿದ ಅವರು, ಪಕ್ಷದೊಳಗಿನ ಒತ್ತಡ ಹಾಗೂ ಹಿರಿಯ ನಾಯಕರ ಸೂಚನೆಯ ಮೇರೆಗೆ ಅವರು ಎರಡು ಬಾರಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆದರೆ, ಲಭ್ಯವಿರುವ ಸಾಕ್ಷ್ಯಗಳು ಮತ್ತು ದಾಖಲೆಗಳನ್ನು ಕಡೆಗಣಿಸಲು ಸಾಧ್ಯವಿಲ್ಲ ಎಂದು ಹೇಳಿದರು.
ನಾವು ಸಾಕ್ಷ್ಯಗಳನ್ನು ತಿರುಚಲು ಸಾಧ್ಯವಿಲ್ಲ. ಆದಾಯ ತೆರಿಗೆ ಇಲಾಖೆ ಮತ್ತು ಜಾರಿ ನಿರ್ದೇಶನಾಲಯವೂ ತನಿಖೆಯಲ್ಲಿ ತೊಡಗಿವೆ. ಯಾರಿಗಾದರೂ ಕ್ಲೀನ್ ಚಿಟ್ ನೀಡಬೇಕು ಎಂದು ನನಗೆ ಅನಿಸಿತು ಎಂಬ ಕಾರಣಕ್ಕೆ ಅಥವಾ ಯಾರೋ ಆದೇಶಿಸಿದರು ಎಂಬ ಕಾರಣಕ್ಕೆ ತನಿಖೆ ನಡೆಸಲು ಸಾಧ್ಯವಿಲ್ಲ. ಸಂಪೂರ್ಣವಾಗಿ ಸಾಕ್ಷ್ಯ, ಪುರಾವೆ ಮತ್ತು ದಾಖಲೆಗಳ ಆಧಾರದ ಮೇಲೆಯೇ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸ್ಪಷ್ಟಪಡಿಸಿದರು.
ನಾಗೇಂದ್ರ ಅವರನ್ನು ಮತ್ತೆ ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳುವ ಸಾಧ್ಯತೆ ಇದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಈ ನಿರ್ಧಾರ ತಮ್ಮ ವ್ಯಾಪ್ತಿಗೆ ಬರುವುದಿಲ್ಲ ಎಂದರು.
ಅದು ನನ್ನ ಅಧಿಕಾರ ವ್ಯಾಪ್ತಿಯನ್ನು ಮೀರಿದ ವಿಚಾರ. ಈ ಬಗ್ಗೆ ಮುಖ್ಯಮಂತ್ರಿಗಳು ಅಥವಾ ಪಕ್ಷದ ನಾಯಕರನ್ನು ಕೇಳಬೇಕು ಎಂದು ಹೇಳಿದರು.
ಇದೇ ವೇಳೆ, ಪ್ರತಿಪಕ್ಷಗಳ ನಾಯಕರ ವಿರುದ್ಧ ಕೇಂದ್ರ ತನಿಖಾ ಸಂಸ್ಥೆಗಳನ್ನು ಆಯ್ದುಕೊಂಡು ಬಳಸಲಾಗುತ್ತಿದೆ ಎಂದು ಆರೋಪಿಸಿ ಬಿಜೆಪಿಯ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದರು.
ಬಿಜೆಪಿ ಅಥವಾ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸುವ ನಾಯಕರ ವಿರುದ್ಧ ದಾಳಿ ಹಾಗೂ ತನಿಖೆಗಳು ತೀವ್ರಗೊಳ್ಳುತ್ತವೆ ಎಂದು ಆರೋಪಿಸಿದರು.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಂಸತ್ತಿನಲ್ಲಿ ಮಂಡಿಸಿದ್ದ ಅಂಕಿಅಂಶಗಳನ್ನೂ ಉಲ್ಲೇಖಿಸಿದ ಪ್ರಿಯಾಂಕ್ ಖರ್ಗೆ ಅವರು, ಪ್ರತಿಪಕ್ಷಗಳ ನಾಯಕರ ವಿರುದ್ಧ ಜಾರಿ ನಿರ್ದೇಶನಾಲಯ ಸಾವಿರಾರು ಪ್ರಕರಣಗಳನ್ನು ದಾಖಲಿಸಿದ್ದರೂ, ಶಿಕ್ಷೆಯಾಗಿರುವ ಪ್ರಕರಣಗಳ ಪ್ರಮಾಣ ಶೇ.2ಕ್ಕಿಂತ ಕಡಿಮೆ ಇದೆ ಎಂದು ಹೇಳಿದರು.
ಕೆಪಿಎಸ್‌ಸಿ ನೇಮಕಾತಿ ಅಕ್ರಮದ ಕುರಿತು ಪ್ರತಿಕ್ರಿಯಿಸಿದ ಅವರು, ರಾಜಕೀಯ ಹಿನ್ನೆಲೆ ಏನೇ ಇರಲಿ, ತಪ್ಪಿತಸ್ಥರನ್ನು ರಾಜ್ಯ ಸರ್ಕಾರ ರಕ್ಷಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು. ವಿಧಾನಸೌಧ ಪೊಲೀಸರಿಗೆ ಜಾರಿ ನಿರ್ದೇಶನಾಲಯ ಸಲ್ಲಿಸಿದೆ ಎನ್ನಲಾದ ದೂರಿನ ಬಗ್ಗೆ ಸರ್ಕಾರ ಪರಿಶೀಲನೆ ನಡೆಸುತ್ತಿದ್ದು, ಕಾನೂನು ಸಲಹೆ ಪಡೆದ ಬಳಿಕ ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದರು.
ಕೆಪಿಎಸ್‌ಸಿ ಹಗರಣವಾಗಿರಲಿ, ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯಾಗಿರಲಿ, ಬಿಬಿಎಂಪಿ ಅಥವಾ ಕೆಎಎಸ್ ನೇಮಕಾತಿಯಾಗಿರಲಿ, ನಾವು ಹಿಂದೆ ಸರಿಯುವುದಿಲ್ಲ. ಕೆಪಿಎಸ್‌ಸಿ ಹಗರಣದಲ್ಲಿ ಯಾರೇ ಭಾಗಿಯಾಗಿದ್ದರೂ ಕ್ರಮ ಎದುರಿಸಬೇಕಾಗುತ್ತದೆ. ಸತ್ಯ ಒಂದಲ್ಲ ಒಂದು ದಿನ ಹೊರಬರಲಿದೆ" ಎಂದು ಹೇಳಿದರು. ಈ ಪ್ರಕರಣಗಳ ತನಿಖೆಯನ್ನು ಸಿಐಡಿ ಮತ್ತು ಎಸ್‌ಐಟಿಗಳೂ ನಡೆಸಿವೆ ಎಂದು ತಿಳಿಸಿದರು.
ತನಿಖೆಯಲ್ಲಿ ನಾನು ಹಸ್ತಕ್ಷೇಪ ಮಾಡುವುದಿಲ್ಲ: ಸಿಎಂ
ಕ್ಲೀನ್ ಚಿಟ್ ಪಡೆದಿರುವ ಮಾಜಿ ಸಚಿವ ಬಿ. ನಾಗೇಂದ್ರ ಅವರನ್ನು ಮತ್ತೆ ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಲಾಗುತ್ತದೆಯೇ ಎಂಬ ಪ್ರಶ್ನೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯಿಸಿ, ಈ ಬಗ್ಗೆ ನಾನು ಪತ್ರಿಕೆಗಳಲ್ಲಿ ಓದಿದ್ದೇನೆ. ಯಾವುದೇ ತನಿಖೆಯಲ್ಲಿ ನಾನು ಹಸ್ತಕ್ಷೇಪ ಮಾಡುವುದಿಲ್ಲ ಎಂದರು.
ಚಿಕ್ಕಮಗಳೂರು ಹಾಗೂ ನೆರೆಯ ಜಿಲ್ಲೆಗಳಲ್ಲಿ ಹೆಚ್ಚುತ್ತಿರುವ ಮಾನವ–ಆನೆ ಸಂಘರ್ಷದ ಕುರಿತು ಮಾತನಾಡಿ, ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವವರೆಗೆ ಕೆಲವು ಆನೆಗಳ ಚಲನವಲನವನ್ನು ತಾತ್ಕಾಲಿಕವಾಗಿ ತಡೆಹಿಡಿಯುವಂತೆ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ತಿಳಿಸಿದರು.
ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳ ಜನರ ರಕ್ಷಣೆಗೆ ಸರ್ಕಾರ ಆದ್ಯತೆ ನೀಡಬೇಕಿದೆ. ಸಮಸ್ಯೆಯನ್ನು ಒಂದು ಜಿಲ್ಲೆಗೆ ಸೀಮಿತಗೊಳಿಸಿ ನೋಡುವುದಕ್ಕೆ ಸಾಧ್ಯವಿಲ್ಲ ಎಂದರು.
ಇದೇ ವೇಳೆ, ಚನ್ನಪಟ್ಟಣದಲ್ಲಿನ ರೇಷ್ಮೆ ಮಾರುಕಟ್ಟೆ ಹಾಗೂ ವಿಶ್ವವಿದ್ಯಾಲಯ ಯೋಜನೆಗಳ ಪ್ರಗತಿಯನ್ನು ಶೀಘ್ರದಲ್ಲೇ ಪರಿಶೀಲಿಸಲಿದ್ದು, ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.