ಕರೆನ್ಸಿ ನೋಟುಗಳಲ್ಲಿ ಅಂಬೇಡ್ಕರ್ ಭಾವಚಿತ್ರ ? : ಬೆಳಗಾವಿ ಅಧಿವೇಶನದಲ್ಲಿ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಕೆಗೆ ಚರ್ಚೆಗೆ ಒಲವು
ಡಾ ಅಂಬೇಡ್ಕರ್ ಅವರ ಭಾವಚಿತ್ರವನ್ನು ಕರೆನ್ಸಿ ನೋಟುಗಳಲ್ಲಿ ಮುದ್ರಿಸುವಂತೆ ಕೋರಿ ವಿಧಾನ ಪರಿಷತ್ ಸದಸ್ಯ ಮಾಲವಳ್ಳಿ ಶಿವಣ್ಣ ಅವರು ಖಾಸಗಿ ಸದಸ್ಯರ ಮಸೂದೆಯನ್ನು ಮಂಡಿಸಿರುವ ಹಿನ್ನೆಲೆಯಲ್ಲಿ ಈ ಪ್ರಸ್ತಾವನೆ ಮುನ್ನೆಲೆಗೆ ಬಂದಿದೆ.
ಬೆಂಗಳೂರು: ಮಹಾತ್ಮ ಗಾಂಧೀಜಿ ಜೊತೆಗೆ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರವನ್ನೂ ಭಾರತೀಯ ಕರೆನ್ಸಿ ನೋಟುಗಳಲ್ಲಿ ಅಳವಡಿಸುವ ಪ್ರಸ್ತಾವನೆ ಕುರಿತು ಮುಂದಿನ ವಾರ ಬೆಳಗಾವಿಯಲ್ಲಿ ಆರಂಭವಾಗಲಿರುವ ವಿಧಾನಮಂಡಲದ ಚಳಿಗಾಲದ ಅಧಿವೇಶನದಲ್ಲಿ ಚರ್ಚಿಸಲು ಕರ್ನಾಟಕ ಸರ್ಕಾರ ಮುಂದಾಗಿದೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ.
ಡಾ ಅಂಬೇಡ್ಕರ್ ಅವರ ಭಾವಚಿತ್ರವನ್ನು ಕರೆನ್ಸಿ ನೋಟುಗಳಲ್ಲಿ ಮುದ್ರಿಸುವಂತೆ ಕೋರಿ ವಿಧಾನ ಪರಿಷತ್ ಸದಸ್ಯ ಮಾಲವಳ್ಳಿ ಶಿವಣ್ಣ ಅವರು ಖಾಸಗಿ ಸದಸ್ಯರ ಮಸೂದೆಯನ್ನು ಮಂಡಿಸಿರುವ ಹಿನ್ನೆಲೆಯಲ್ಲಿ ಈ ಪ್ರಸ್ತಾವನೆ ಮುನ್ನೆಲೆಗೆ ಬಂದಿದೆ.
ಡಿಸೆಂಬರ್ 2ರಿಂದ ಆರಂಭವಾಗಲಿರುವ ಚಳಿಗಾಲ ಅಧಿವೇಶನದಲ್ಲಿ ಈ ವಿಷಯವನ್ನು ಚರ್ಚೆಗೆ ಕೈಗೆತ್ತಿಕೊಳ್ಳಲಾಗುವುದು ಎಂದು ವಿಧಾನ ಪರಿಷತ್ ಸಭಾಪತಿ ಸಲೀಂ ಅಹ್ಮದ್ ತಿಳಿಸಿದ್ದಾರೆ. ಕರೆನ್ಸಿ ನೋಟುಗಳಲ್ಲಿನ ಭಾವಚಿತ್ರಗಳನ್ನು ಬದಲಾಯಿಸುವ ನಿರ್ಧಾರ ಕೇಂದ್ರ ಸರ್ಕಾರದ ವ್ಯಾಪ್ತಿಗೆ ಬರುತ್ತದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಈ ಪ್ರಸ್ತಾವನೆ ಕುರಿತು ಮಾತನಾಡಿದ ಸಲೀಂ ಅಹ್ಮದ್, ಇದು ರಾಜ್ಯ ಸರ್ಕಾರದ ಅಧಿಕಾರ ವ್ಯಾಪ್ತಿಗೆ ಬರುವ ವಿಷಯವಲ್ಲವಾದರೂ, ಸದನದಲ್ಲಿ ಚರ್ಚಿಸಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಕಳುಹಿಸಬಹುದು ಎಂದರು.
ಸದನದಲ್ಲಿ ಚರ್ಚಿಸಿ ಅಂಗೀಕರಿಸಿದರೆ, ಹೆಚ್ಚಿನ ಪರಿಶೀಲನೆಗಾಗಿ ನಾವು ಅದನ್ನು ದೆಹಲಿಗೆ ಕಳುಹಿಸುತ್ತೇವೆ, ಈ ಪ್ರಸ್ತಾವನೆ ಇನ್ನೂ ಸದನದಲ್ಲಿ ಚರ್ಚೆಗೆ ಬಂದಿಲ್ಲ. ಅಂಗೀಕಾರ ದೊರೆತರೆ ಹೆಚ್ಚಿನ ಪರಿಶೀಲನೆಗಾಗಿ ಕೇಂದ್ರ ಸರ್ಕಾರಕ್ಕೆ ಕಳುಹಿಸಲಾಗುವುದು ಎಂದು ತಿಳಿಸಿದರು.