ತುಮಕೂರಿನಲ್ಲಿ ಭೀಕರ ಅಪಘಾತ: ಕಾರು-ಬೈಕ್ ನಡುವೆ ಡಿಕ್ಕಿ; ಮೂವರು ಸ್ಥಳದಲ್ಲೇ ದುರ್ಮರಣ
ಮೂವರೂ ಪಾವಗಡದಲ್ಲಿ ಕಟ್ಟಡ ನಿರ್ಮಾಣ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ಶುಕ್ರವಾರ ಕೆಲಸ ಮುಗಿಸಿಕೊಂಡು ಬೈಕ್‌ನಲ್ಲಿ ತಮ್ಮ ಗ್ರಾಮಕ್ಕೆ ಮರಳುತ್ತಿದ್ದ ವೇಳೆ ವೇಗವಾಗಿ ಬಂದ ಕಾರು ಬೈಕ್‌ಗೆ ಡಿಕ್ಕಿ ಹೊಡೆದಿದೆ.
ತುಮಕೂರು: ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ಕಣಿವೆನಹಳ್ಳಿ ಕ್ರಾಸ್ ಬಳಿ ನಡೆದಿದೆ. ಶುಕ್ರವಾರ ಸಂಜೆ 6ರಿಂದ 6.30ರ ಸುಮಾರಿಗೆ ಈ ದುರ್ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತರನ್ನು ಆಂಧ್ರಪ್ರದೇಶದ ಮಡಕಶಿರಾ ತಾಲ್ಲೂಕಿನ ಗುಡಿಬಂಡೆ ಗ್ರಾಮದ ಮೇಘಾ (21), ಶ್ರೀನಿವಾಸ್ (45) ಮತ್ತು ನರಸಿಂಹಮೂರ್ತಿ (28) ಎಂದು ಗುರುತಿಸಲಾಗಿದೆ.
ಮೂವರೂ ಪಾವಗಡದಲ್ಲಿ ಕಟ್ಟಡ ನಿರ್ಮಾಣ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ಶುಕ್ರವಾರ ಕೆಲಸ ಮುಗಿಸಿಕೊಂಡು ಬೈಕ್‌ನಲ್ಲಿ ತಮ್ಮ ಗ್ರಾಮಕ್ಕೆ ಮರಳುತ್ತಿದ್ದ ವೇಳೆ ವೇಗವಾಗಿ ಬಂದ ಕಾರು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಮೂವರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಯಲ್ಲಿ ಕಾರು ಚಾಲಕ ಸೇರಿದಂತೆ ಅದರಲ್ಲಿದ್ದ ಮೂವರಿಗೂ ಅಪಘಾತದಲ್ಲಿ ಗಾಯಗಳಾಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಸ್ಥಿತಿ ಅಪಾಯದಿಂದ ಪಾರಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇನ್ನು ಅಪಘಾತಕ್ಕೆ ಸಂಬಂಧಿಸಿದಂತೆ ಸ್ಥಳೀಯರು ಅಧಿಕಾರಿಗಳ ನಿರ್ಲಕ್ಷ್ಯದ ಬಗ್ಗೆ ಆರೋಪಿಸಿದ್ದಾರೆ. ಯೋಜನೆಯ ಕಾಮಗಾರಿಗಾಗಿ ರಸ್ತೆ ಅಗೆದು ಸರಿಯಾಗಿ ಮುಚ್ಚದಿರುವುದೇ ಅಪಘಾತಕ್ಕೆ ಕಾರಣವಾಗಿರಬಹುದು ಎಂದು ದೂರಿದ್ದಾರೆ. ಘಟನೆ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ.