ಟಿಪ್ಪರ್ ಲಾರಿಗೆ ಎಸ್‌ಯುವಿ ಡಿಕ್ಕಿ: ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು, ಓರ್ವನಿಗೆ ಗಾಯ; RTO ಅಧಿಕಾರಿಗಳ ನಿರ್ಲಕ್ಷ್ಯ ಆರೋಪ
ಮಂಡ್ಯ ತಾಲೂಕಿನ ಇಂಡುವಾಳು ಬಳಿ, ಬೆಳಿಗ್ಗೆ 10.30 ರಿಂದ 11 ಗಂಟೆಯ ನಡುವೆ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಂಡ್ಯ: ಜಿಲ್ಲೆಯ ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಟಿಪ್ಪರ್ ಲಾರಿ ಹಿಂಭಾಗಕ್ಕೆ ಎಸ್‌ಯುವಿ (SUV) ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟಿದ್ದು, ಮತ್ತೊಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತಪಟ್ಟವರು ಕೇರಳ ಮೂಲದ ಎಂಜಿನಿಯರಿಂಗ್ ವಿದ್ಯಾರ್ಥಿಗಳಾಗಿದ್ದು, ಅವರ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ಅವರು ತಿಳಿಸಿದ್ದಾರೆ.
ಮಂಡ್ಯ ತಾಲೂಕಿನ ಇಂಡುವಾಳು ಬಳಿ, ಬೆಳಿಗ್ಗೆ 10.30 ರಿಂದ 11 ಗಂಟೆಯ ನಡುವೆ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಾಥಮಿಕ ತನಿಖೆಯನ್ನು ಉಲ್ಲೇಖಿಸಿ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ ಪ್ರಕಾರ, ಆರ್‌ಟಿಒ ಅಧಿಕಾರಿಗಳು ನಿಲ್ಲಿಸಲು ಸೂಚಿಸಿದರೆನ್ನಲಾದ ಟಿಪ್ಪರ್ ಲಾರಿಯನ್ನು ರಸ್ತೆಯ ಎಡಬದಿಯಲ್ಲಿ ನಿಲ್ಲಿಸುತ್ತಿದ್ದಾಗ, ಹಿಂದಿನಿಂದ ಬಂದ ಎಸ್‌ಯುವಿ ವಾಹನವು ಅದಕ್ಕೆ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ಎಸ್‌ಯುವಿನಲ್ಲಿದ್ದ ಮೂವರ ಪೈಕಿ ಇಬ್ಬರು, ಒಬ್ಬ ಪುರುಷ ಮತ್ತು ಒಬ್ಬ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವಾಹನದಲ್ಲಿದ್ದ ಮತ್ತೊಬ್ಬ ವ್ಯಕ್ತಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದರು.
ಹೆದ್ದಾರಿಯಲ್ಲಿ ಟಿಪ್ಪರ್ ಲಾರಿಯನ್ನು ತಡೆದು ಪರಿಶೀಲನೆ ನಡೆಸುವ ಸಂದರ್ಭದಲ್ಲಿ ಆರ್‌ಟಿಒ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ, ಈ ಬಗ್ಗೆ ತನಿಖೆ ಪ್ರಾರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಪ್ರಕರಣದ ತನಿಖೆಯನ್ನು ಮಂಡ್ಯ ಗ್ರಾಮಾಂತರ ಪೊಲೀಸರು ನಡೆಸುತ್ತಿದ್ದಾರೆ.
ಅಪಘಾತದ ನಂತರ, ಗ್ರಾಮಸ್ಥರು ಹೆದ್ದಾರಿಯಲ್ಲಿ ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು; ಅಲ್ಲದೆ, ಈ ಘಟನೆಗೆ ಕಾರಣರಾದ ಆರೋಪವಿರುವ ಆರ್‌ಟಿಒ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.