ಬೆಂಗಳೂರು: ರಾಜ್ಯ ಸರ್ಕಾರ ಇದೇ ಮೊದಲ ಬಾರಿಗೆ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ‘ಉರ್ದು ಹಬ್ಬ’ವನ್ನು ಆಯೋಜಿಸಲು ಸಿದ್ಧತೆ ನಡೆಸಿದ್ದು, ಆದರೆ ಇದಕ್ಕೆ ಪ್ರತಿಪಕ್ಷ ಬಿಜೆಪಿ ಮತ್ತು ಕನ್ನಡಪರ ಸಂಘಟನೆಗಳಿಂದ ತೀವ್ರ ವಿರೋಧ ವ್ಯಕ್ತಪಡಿಸಿವೆ. ಹೀಗಾಗಿ ಸರ್ಕಾರ ತನ್ನ ನಿರ್ಧಾರದಿಂದ ಹಿಂದೆ ಸರಿದಿದೆ.
ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಯಾವುದೇ ಸರ್ಕಾರಿಯೇತರ ಅಥವಾ ಖಾಸಗಿ ಕಾರ್ಯಕ್ರಮಗಳಿಗೆ ಅವಕಾಶವಿಲ್ಲ ಎಂದು ಮುಖ್ಯಮಂತ್ರಿಗಳ ಕಚೇರಿ ಗುರುವಾರ ಪ್ರಕಟಣೆಯ ಮೂಲಕ ಸ್ಪಷ್ಟಪಡಿಸಿದೆ.
ಕೆಲವು ಮಾಧ್ಯಮಗಳಲ್ಲಿ ಖಾಸಗಿ ಕಾರ್ಯಕ್ರಮ ನಡೆಯಲಿದೆ ಎಂದು ಬಿಂಬಿಸುತ್ತಿರುವುದು ಸಂಪೂರ್ಣ ಸತ್ಯಕ್ಕೆ ದೂರವಾದ ಮಾತು. ಸರ್ಕಾರ ಅಂತಹ ಯಾವುದೇ ಅನುಮತಿಯನ್ನು ನೀಡಿಲ್ಲ ಎಂದು ಮುಖ್ಯಮಂತ್ರಿಗಳ ಕಚೇರಿ ಅಧಿಕೃತ ಮಾಧ್ಯಮ ಪ್ರಕಟಣೆ ಮೂಲಕ ಸ್ಪಷ್ಟನೆ ನೀಡಿದೆ.
ಎರಡು ದಿನಗಳ ಹಿಂದಷ್ಟೇ ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಸಚಿವ ಯು.ಟಿ.ಖಾದರ್ ಅವರು ನವೆಂಬರ್ 9ರಂದು ಉರ್ದು ದಿನದ ಅಂಗವಾಗಿ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ‘ಉರ್ದು ಹಬ್ಬ’ ಆಯೋಜಿಸಲಾಗುವುದು ಎಂದು ಹೇಳಿದ್ದರು.
ಖಾದರ್ ಹೇಳಿಕೆ ಬೆನ್ನಲ್ಲೇ ಬಿಜೆಪಿ ಹಿರಿಯ ಶಾಸಕ ಸುರೇಶ್ ಕುಮಾರ್ ಅವರು ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಕನ್ನಡಿಗರ ಅನನ್ಯತೆಯ ಸಂಕೇತವಾಗಿರುವ ವಿಧಾನಸೌಧವನ್ನು ನಿರ್ದಿಷ್ಟ ಸಮುದಾಯದ ಮತಬ್ಯಾಂಕ್ ಓಲೈಕೆಗೆ ಬಳಸಿಕೊಳ್ಳಲಾಗುತ್ತಿದೆ. ಈ ನಿರ್ಧಾರವನ್ನು ತಕ್ಷಣವೇ ಹಿಂಪಡೆಯುವಂತೆ ಸರ್ಕಾರಕ್ಕೆ ಒತ್ತಾಯಿಸಿದ್ದರು. ಇಂದು ಕರವೇ ಸಹ ಇದಕ್ಕೆ ವಿರೋಧ ವ್ಯಕ್ತಪಡಿಸಿತ್ತು.