ಬೆಂಗಳೂರು: ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳು ಹಾಗೂ ನಗರ ಪ್ರದೇಶಗಳ ವಾರ್ಡ್‌ಗಳಲ್ಲಿ ಗ್ಯಾರಂಟಿ ಯೋಜನೆಗಳ ಸಮಿತಿಗಳನ್ನು 15 ದಿನಗಳೊಳಗೆ ರಚಿಸುವ ಪ್ರಕ್ರಿಯೆ ಪೂರ್ಣಗೊಳಿಸುವಂತೆ ರಾಜ್ಯ ಸರ್ಕಾರ ಜಿಲ್ಲಾ ಪಂಚಾಯಿತಿಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳಿಗೆ ಸೂಚಿಸಿದೆ.
ಸಮಿತಿಗಳಿಗೆ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡುವ ಪ್ರಕ್ರಿಯೆಯನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಪ್ರಜಾಸೇವಾ ಇಲಾಖೆ ಆದೇಶ ಹೊರಡಿಸಿದೆ.
ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ದಿನೇಶ್ ಗೂಳಿಗೌಡ ಮಾತನಾಡಿ, ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪಬೇಕು ಎಂಬುದು ಸರ್ಕಾರದ ಆಶಯವಾಗಿದೆ. ಈ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿ ಹಾಗೂ ನಗರಗಳ ವಾರ್ಡ್ ಮಟ್ಟದಲ್ಲಿ ತಲಾ ಆರು ಸದಸ್ಯರನ್ನು ಒಳಗೊಂಡ ಸಮಿತಿಗಳನ್ನು ರಚಿಸುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೂಚಿಸಿದ್ದಾರೆ ಎಂದು ತಿಳಿಸಿದರು.
ಪ್ರತಿ ಸಮಿತಿಯಲ್ಲಿ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದಿಂದ ಒಬ್ಬರು, ಅಲ್ಪಸಂಖ್ಯಾತ ಸಮುದಾಯದಿಂದ ಒಬ್ಬರು, ಮಹಿಳೆಯರಿಂದ ಇಬ್ಬರು, ಹಿಂದುಳಿದ ವರ್ಗದಿಂದ ಒಬ್ಬರು ಹಾಗೂ ಸಾಮಾನ್ಯ ವರ್ಗದಿಂದ ಒಬ್ಬರು ಪ್ರತಿನಿಧಿಗಳಿರಲಿದ್ದಾರೆ.
ಅಲ್ಪಸಂಖ್ಯಾತ ಸಮುದಾಯದ ಪ್ರತಿನಿಧಿ ಲಭ್ಯವಿಲ್ಲದ ಸಂದರ್ಭದಲ್ಲಿ ಸಾಮಾನ್ಯ ವರ್ಗದಿಂದ ಸದಸ್ಯರನ್ನು ನೇಮಕ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದ್ದಾರೆ