ದಾವಣಗೆರೆ: ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿ ಮನೆ ಮೇಲೆ ಸಂತ್ರಸ್ತೆಯ ಕುಟುಂಬದವರು ಕಲ್ಲು ತೂರಾಟ ನಡೆಸಿರುವ ಘಟನೆ ದಾವಣಗೆರೆಯ ಚಿನ್ನಗಿರಿಯಲ್ಲಿ ನಡೆದಿದೆ.
ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಆರೋಪಿ ಲೈಂಗಿಕ ಕ್ರಿಯೆಗೆ ಬಳಸಿಕೊಂಡಿದ್ದಾನೆ ಎಂದ ಆರೋಪಿಸಿ ಕಳೆದ ಎರಡು ತಿಂಗಳ ಹಿಂದೆ ಸಂತ್ರಸ್ತೆ ಕುಟುಂಬಸ್ಥರು ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಿಸಿದ್ದರು. ದೂರು ದಾಖಲಿಸಿದರೂ ಪೊಲೀಸರು ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಈ ನಡುವೆ ಸಂತ್ರಸ್ತೆಯ ತಂದೆ ಆತ್ಮಹತ್ಯೆ ಮಾಡಿಕೊಂಡಿದ್ದರು.
ಇದರಿಂದ ರೊಚ್ಚಿಗೆದ್ದ ಕುಟುಂಬಸ್ಥರು ನ್ಯಾಯಕ್ಕಾಗಿ ಆಗ್ರಹಿಸಿ ಚನ್ನಗಿರಿ ಠಾಣೆ ಮುಂದೆ ಶವವಿಟ್ಟು ಪ್ರತಿಭಟನೆ ನಡೆಸಿತ್ತು. ಇದರ ಬೆನ್ನಲ್ಲೇ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮತ್ತೊಂದೆಡೆ, ಸಂತ್ರಸ್ತೆಯ ಕುಟುಂಬದವರು ಆರೋಪಿಯ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.