ಸುಪ್ರೀಂಕೋರ್ಟ್ 
ರಾಜ್ಯ

ಶೃಂಗೇರಿ ಮತ ಎಣಿಕೆ Video ನಾಪತ್ತೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ತರಾಟೆ..!

ಚುನಾವಣಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಮತ್ತು ನ್ಯಾಯಸಮ್ಮತತೆ ಖಚಿತಪಡಿಸಿಕೊಳ್ಳಲು ಮತ ಎಣಿಕೆಯ ವಿಡಿಯೊ ಚಿತ್ರೀಕರಣ ಕಡ್ಡಾಯವಾಗಿದೆ. ಸಾಂವಿಧಾನಿಕ ಸಂಸ್ಥೆಯಾಗಿರುವ ಚುನಾವಣಾ ಆಯೋಗವು ಚುನಾವಣೆಗೆ ಸಂಬಂಧಿಸಿದ ದಾಖಲೆಗಳನ್ನು ಸುರಕ್ಷಿತವಾಗಿ ಸಂರಕ್ಷಿಸಬೇಕು.

ನವದೆಹಲಿ: ಕರ್ನಾಟಕದ ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ 2023ರ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆಯ ವೀಡಿಯೋ ರೆಕಾರ್ಡಿಂಗ್ ಪತ್ತೆಯಾಗುತ್ತಿಲ್ಲ ಎಂದು ಹೇಳಿರುವ ಭಾರತೀಯ ಚುನಾವಣಾ ಆಯೋಗವನ್ನು ಸುಪ್ರೀಂ ಕೋರ್ಟ್ ಬುಧವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ.

ಕೇವಲ 201 ಮತಗಳ ಅಂತರದಲ್ಲಿ ಫಲಿತಾಂಶ ನಿರ್ಧಾರವಾಗಿದ್ದ ಕ್ಷೇತ್ರದ ದಾಖಲೆಗಳನ್ನು ಸಂರಕ್ಷಿಸುವಲ್ಲಿ ಆಯೋಗದ ಹೊಣೆಗಾರಿಕೆಯನ್ನು ನ್ಯಾಯಾಲಯ ಪ್ರಶ್ನಿಸಿದೆ.

ಚುನಾವಣಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಮತ್ತು ನ್ಯಾಯಸಮ್ಮತತೆ ಖಚಿತಪಡಿಸಿಕೊಳ್ಳಲು ಮತ ಎಣಿಕೆಯ ವಿಡಿಯೊ ಚಿತ್ರೀಕರಣ ಕಡ್ಡಾಯವಾಗಿದೆ. ಸಾಂವಿಧಾನಿಕ ಸಂಸ್ಥೆಯಾಗಿರುವ ಚುನಾವಣಾ ಆಯೋಗವು ಚುನಾವಣೆಗೆ ಸಂಬಂಧಿಸಿದ ದಾಖಲೆಗಳನ್ನು ಸುರಕ್ಷಿತವಾಗಿ ಸಂರಕ್ಷಿಸಬೇಕು ಎಂದು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಜಾಯ್ಮಲ್ಯ ಬಾಗ್ಚಿ ಅವರನ್ನೊಳಗೊಂಡ ಪೀಠ ಹೇಳಿದೆ.

2023ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಶೃಂಗೇರಿ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಟಿ.ಡಿ. ರಾಜೇಗೌಡ ಅವರ ಆಯ್ಕೆಯನ್ನು ಪ್ರಶ್ನಿಸಿ ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ಸಲ್ಲಿಸಿರುವ ಅರ್ಜಿಯ ವಿಚಾರಣೆ ವೇಳೆ ನ್ಯಾಯಾಲಯ ಈ ಅಭಿಪ್ರಾಯ ವ್ಯಕ್ತಪಡಿಸಿದೆ.

ಜೀವರಾಜ್ ಅವರು 201 ಮತಗಳ ಅಂತರದಿಂದ ಸೋತಿದ್ದರು. ಅಂಚೆ ಮತಗಳ ಎಣಿಕೆಯಲ್ಲಿ ಅಕ್ರಮಗಳು ನಡೆದಿವೆ ಮತ್ತು ಮತ ಎಣಿಕೆಯ ಸರಿಯಾದ ವಿಡಿಯೊ ಚಿತ್ರೀಕರಣ ಮಾಡಿಲ್ಲ ಎಂದು ಅವರು ಆರೋಪಿಸಿದ್ದಾರೆ.

ಇದರಂತೆ ಮತ ಎಣಿಕೆ ಕೊಠಡಿಯ ವಿಡಿಯೊ ರೆಕಾರ್ಡಿಂಗ್ ಹಾಗೂ ಸಿಸಿಟಿವಿ ದೃಶ್ಯಾವಳಿಗಳನ್ನು ಸಂರಕ್ಷಿಸಿ ನ್ಯಾಯಾಲಯಕ್ಕೆ ಸಲ್ಲಿಸುವಂತೆ ಕೋರಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು.

ಎರಡು ವರ್ಷಗಳಿಗೂ ಹೆಚ್ಚು ಕಾಲ ಕಳೆದಿರುವ ಹಿನ್ನೆಲೆಯಲ್ಲಿ ಶೃಂಗೇರಿ ಕ್ಷೇತ್ರದ ಮತ ಎಣಿಕೆಯ ವಿಡಿಯೊ ರೆಕಾರ್ಡಿಂಗ್ ಪತ್ತೆಯಾಗುತ್ತಿಲ್ಲ ಮತ್ತು ಅದರ ಮೇಲೆ ಹೊಸ ದತ್ತಾಂಶ ಬರೆಯಲಾಗಿದೆ ಎಂದು ಚುನಾವಣಾ ಆಯೋಗವು ಪ್ರಮಾಣಪತ್ರ ಸಲ್ಲಿಸಿತ್ತು.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ನ್ಯಾಯಪೀಠ, “ದಾಖಲೆ ಪತ್ತೆಯಾಗುತ್ತಿಲ್ಲ ಎಂದು ಹೇಗೆ ಹೇಳುತ್ತೀರಿ? ಪ್ರಕರಣ ನ್ಯಾಯಾಲಯದ ವಿಚಾರಣೆಯಲ್ಲಿರುವಾಗ ಅದನ್ನು ಸಂರಕ್ಷಿಸಬೇಕಲ್ಲವೇ?” ಎಂದು ಪ್ರಶ್ನಿಸಿತು.

ಚುನಾವಣಾ ಅರ್ಜಿಗಳ ವಿಚಾರಣೆ ಪೂರ್ಣಗೊಳ್ಳುವವರೆಗೆ ಮತ ಎಣಿಕೆಯ ವಿಡಿಯೊಗಳನ್ನು ಸಂರಕ್ಷಿಸಬೇಕು ಎಂಬುದು ಆಯೋಗದ ಮಾರ್ಗಸೂಚಿಗಳಲ್ಲೇ ಇದೆ ಎಂದು ನ್ಯಾಯಾಲಯ ಗಮನಸೆಳೆಯಿತು.

ಆಯೋಗದ ಈ ಹೇಳಿಕೆಯು ಚುನಾವಣಾ ಪ್ರಕ್ರಿಯೆಯ ಪಾರದರ್ಶಕತೆಯ ಬಗ್ಗೆ ಗಂಭೀರ ಅನುಮಾನಗಳನ್ನು ಹುಟ್ಟುಹಾಕುತ್ತದೆ ಎಂದು ಪೀಠ ಅಭಿಪ್ರಾಯಪಟ್ಟಿತು.

ಶೃಂಗೇರಿ ಕ್ಷೇತ್ರದಲ್ಲಿ 1,247 ಅಂಚೆ ಮತಗಳಿದ್ದು, ಕೇವಲ 201 ಮತಗಳ ಅಂತರದ ಫಲಿತಾಂಶದ ಮೇಲೆ ಅಕ್ರಮಗಳು ಪರಿಣಾಮ ಬೀರಿರಬಹುದು ಎಂದು ಅರ್ಜಿದಾರರ ಪರ ವಕೀಲರು ವಾದಿಸಿದರು.

ಮತ ಎಣಿಕೆಯ ಸಂಪೂರ್ಣ ದಾಖಲೆಗಳು, ಸಿಸಿಟಿವಿ ದೃಶ್ಯಾವಳಿಗಳು, ನಮೂನೆ 20 ಹಾಗೂ ಅಂಚೆ ಮತಗಳ ಲೆಕ್ಕಪತ್ರಗಳನ್ನು ಸಲ್ಲಿಸುವಂತೆ ಅರ್ಜಿದಾರರು ಮನವಿ ಮಾಡಿದ್ದಾರೆ.

ಈ ಹಿನ್ನೆಲೆಯಲ್ಲಿ, ದಾಖಲೆಗಳನ್ನು ಎಷ್ಟು ಕಾಲ ಸಂರಕ್ಷಿಸಲಾಗುತ್ತದೆ, ವಿಡಿಯೊ ರೆಕಾರ್ಡಿಂಗ್ ಅನ್ನು ಯಾವಾಗ ಅಳಿಸಲಾಗಿದೆ, ಅದಕ್ಕೆ ಯಾರು ಅನುಮತಿ ನೀಡಿದ್ದಾರೆ ಹಾಗೂ ಅದರ ಬ್ಯಾಕಪ್ ಲಭ್ಯವಿದೆಯೇ ಎಂಬ ಕುರಿತು ಎರಡು ವಾರಗಳೊಳಗೆ ಹೊಸ ಪ್ರಮಾಣಪತ್ರ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದೆ.

ಚುನಾವಣಾ ಅರ್ಜಿ ಸಲ್ಲಿಕೆಯಾದ ಬಳಿಕ ದಾಖಲೆಗಳನ್ನು ಸಂರಕ್ಷಿಸಲು ಕೈಗೊಂಡ ಕ್ರಮಗಳ ಕುರಿತು ಕರ್ನಾಟಕದ ಮುಖ್ಯ ಚುನಾವಣಾಧಿಕಾರಿಯೂ ವಿವರವಾದ ಪ್ರಮಾಣಪತ್ರ ಸಲ್ಲಿಸಬೇಕು ಎಂದು ನ್ಯಾಯಪೀಠ ಸೂಚಿಸಿದೆ.

ಇದೇ ವೇಳೆ ದಾಖಲೆಗಳ ಸಂರಕ್ಷಣೆಯಲ್ಲಿ ನಿರ್ಲಕ್ಷ್ಯ ಕಂಡುಬಂದರೆ ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಎಚ್ಚರಿಸಿದ ನ್ಯಾಯಾಲಯ, ಪ್ರಕರಣದ ಮುಂದಿನ ವಿಚಾರಣೆಯನ್ನು ಎರಡು ವಾರಗಳ ಬಳಿಕ ನಡೆಸಲು ನಿರ್ಧರಿಸಿದೆ.

ಶೃಂಗೇರಿ ಚುನಾವಣೆಗೆ ಸಂಬಂಧಿಸಿದ ಅರ್ಜಿ ಕರ್ನಾಟಕ ಹೈಕೋರ್ಟ್‌ನಲ್ಲಿ ಬಾಕಿಯಿದ್ದು, ದಾಖಲೆಗಳ ಸಂರಕ್ಷಣೆಯ ವಿಚಾರವನ್ನು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆ ಮಾಡುತ್ತಿದೆ.

SIR ವಿಚಾರದಲ್ಲಿ ಸುಪ್ರೀಂ ಕೋರ್ಟ್ ತೀರ್ಪಿನಿಂದಲೇ ಅನಾಹುತ: ಕೆಪಿಸಿಸಿ ಅಧ್ಯಕ್ಷ

ಈ ನಡುವೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿಚಾರವಾಗಿ ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನಿಂದಲೇ ಸಮಸ್ಯೆ ಉಂಟಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಆರೋಪಿಸಿದ್ದಾರೆ.

ನಮೂನೆ 6ಕ್ಕೆ ತಿದ್ದುಪಡಿ ಮಾಡಲು ಚುನಾವಣಾ ಆಯೋಗ ತೆಗೆದುಕೊಂಡ ನಿರ್ಧಾರವನ್ನು ಸುಪ್ರೀಂ ಕೋರ್ಟ್ ಒಪ್ಪಿಕೊಂಡಿರುವುದು ಈ ಬೆಳವಣಿಗೆಗೆ ಕಾರಣ ಎಂದು ಅವರು ಹೇಳಿದ್ದಾರೆ.

ನಮೂನೆ 6ಕ್ಕೆ ಸಂಬಂಧಿಸಿದ ನಿರ್ಧಾರವನ್ನು ಪೂರ್ಣ ಚುನಾವಣಾ ಆಯೋಗ ತೆಗೆದುಕೊಂಡಿದ್ದರೆ ತಮಗೆ ಯಾವುದೇ ಆಕ್ಷೇಪವಿರಲಿಲ್ಲ. ಆದರೆ. ಇಬ್ಬರು ಚುನಾವಣಾ ಆಯುಕ್ತರು ವಿರೋಧ ವ್ಯಕ್ತಪಡಿಸಿದ್ದರೂ ತಿದ್ದುಪಡಿಗಳಿಗೆ ಅನುಮೋದನೆ ನೀಡಲಾಗಿದೆ ಎಂದು ಆರೋಪಿಸಿದರು.

ಎಸ್‌ಐಆರ್ ವಿಚಾರದಲ್ಲಿ ಸುಪ್ರೀಂ ಕೋರ್ಟ್‌ನಿಂದ ನ್ಯಾಯ ಸಿಗುವ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಅವರು, “ದೆಹಲಿಯ ಸುಪ್ರೀಂ ಕೋರ್ಟ್‌ನ ವಕೀಲರು ಏನು ಹೇಳುತ್ತಿದ್ದಾರೆ ಎಂಬುದನ್ನು ನೋಡಿ. ದೇಶದ ಜನರು ಸುಪ್ರೀಂ ಕೋರ್ಟ್ ಮೇಲಿನ ನಂಬಿಕೆಯನ್ನು ಸಂಪೂರ್ಣವಾಗಿ ಕಳೆದುಕೊಂಡಿದ್ದಾರೆ” ಎಂದು ಹೇಳಿದರು.

ನ್ಯಾಯಕ್ಕಾಗಿ ನಾಗರಿಕರು ಸುಪ್ರೀಂ ಕೋರ್ಟ್‌ಗೆ ಬರುತ್ತಾರೆ. ಸಂವಿಧಾನವನ್ನು ರಕ್ಷಿಸುವ ಹೊಣೆಗಾರಿಕೆ ನ್ಯಾಯಾಲಯಕ್ಕಿದೆ ಎಂದು ಅವರು ಅಭಿಪ್ರಾಯಪಟ್ಟರು. ಪ್ರಜಾಪ್ರಭುತ್ವಕ್ಕೆ ಬೆದರಿಕೆ ಎದುರಾಗಿರುವ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ಮೌನವಾಗಿರುವುದು ಸರಿಯಲ್ಲ ಎಂದೂ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸ್ಥಳೀಯ ಸಂಸ್ಥೆಗಳಿಗೂ ಜಿಎಸ್‌ಟಿ ಆದಾಯ ಹಂಚಿಕೆ: GST ಮಂಡಳಿಗೆ ರಾಜ್ಯ ಸರ್ಕಾರ ಪ್ರಸ್ತಾವನೆ

ಸ್ಟಿಂಗ್‌ ಆಪರೇಷನ್‌ ಬಗ್ಗೆ ಬೇರೆಯವರು ಮಾತನಾಡುವ ಆಗಿಲ್ಲ ಎನ್ನಲು ನೀವೇನು ಸರ್ವಾಧಿಕಾರಿಯೇ ಪ್ರಿಯಾಂಕ್‌ ಖರ್ಗೆ..?

1 ವರ್ಷ ಗ್ಯಾರಂಟಿ ಯೋಜನೆಗಳ ನಿಲ್ಲಿಸಿ, ಹಣವನ್ನು ರೈತರಿಗೆ ನೀಡಿ: ರಾಜ್ಯ ಸರ್ಕಾರಕ್ಕೆ ದಿಂಗಾಲೇಶ್ವರ ಶ್ರೀಗಳ ಆಗ್ರಹ

ಬೆಂಗಳೂರು: ನಮ್ಮ ಮೆಟ್ರೋ ರೈಲಿನಲ್ಲಿ 18 ನಿಮಿಷದಲ್ಲಿ ಜೀವಂತ ಹೃದಯ ಸಾಗಾಟ!

Sting operation ವಿವಾದ: CBI ತನಿಖೆಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಕಾರ