ಬೆಳಗಾವಿ: ರಾಜ್ಯದಲ್ಲಿ ತೀವ್ರ ಸ್ವರೂಪ ಪಡೆದುಕೊಂಡಿದ್ದ ಕಬ್ಬು ಬೆಲೆ ನಿಗದಿ ವಿವಾದಕ್ಕೆ ಬ್ರೇಕ್ ಹಾಕಲು ರಾಜ್ಯ ಸರ್ಕಾರ ಮುಂದಾಗಿದ್ದು, ‘ತ್ರಿಪಕ್ಷೀಯ ಒಪ್ಪಂದ’ (Tripartite Agreement)ವೆಂಬ ಹೊಸ ಸೂತ್ರವನ್ನು ಪ್ರಸ್ತಾಪಿಸಿದೆ.
ರೈತರು, ಸಕ್ಕರೆ ಕಾರ್ಖಾನೆ ಮಾಲೀಕರು ಮತ್ತು ರಾಜ್ಯ ಸರ್ಕಾರದ ನಡುವೆ ‘ತ್ರಿಪಕ್ಷೀಯ ಒಪ್ಪಂದ’ (Tripartite Agreement) ಮಾಡಿಕೊಳ್ಳುವ ಹೊಸ ಸೂತ್ರವನ್ನು ಸರ್ಕಾರ ಪ್ರಸ್ತಾಪಿಸಿದೆ.
ಈ ಕುರಿತು ಬೆಂಗಳೂರಿಗೆ ತೆರಳುವ ಮುನ್ನ ಬೆಳಗಾವಿಯ ಸರ್ಕಾರಿ ಅತಿಥಿಗೃಹದಲ್ಲಿ ಸುದ್ದಿಗಾರರೊಂದಿಗೆ ಮಂಗಳವಾರ ಮಾತನಾಡಿದ ಅವರು ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು, ಕಬ್ಬು ಬೆಳೆಗಾರರು ತಮ್ಮ ಉತ್ಪನ್ನಕ್ಕೆ ನ್ಯಾಯಯುತ ಬೆಲೆ ನೀಡುವಂತೆ ಒತ್ತಾಯಿಸುತ್ತಿರುವುದು ಸಮಂಜಸವಾಗಿದೆ. ಆದರೆ, ರೈತರು ಮತ್ತು ಸಕ್ಕರೆ ಕಾರ್ಖಾನೆಗಳ ಹಿತಾಸಕ್ತಿಗಳ ನಡುವೆ ಸಮತೋಲನ ಕಾಯ್ದುಕೊಳ್ಳುವುದು ಅಗತ್ಯ. ಎರಡೂ ಕಡೆಯವರೊಂದಿಗೆ ಸಮನ್ವಯ ಸಾಧಿಸುವ ಮೂಲಕ ಸಮಸ್ಯೆ ಬಗೆಹರಿಸಲು ರಾಜ್ಯ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಹೇಳಿದರು.
ಕಬ್ಬು ಬೆಳೆಗಾರರು ಮತ್ತು ಸಕ್ಕರೆ ಕಾರ್ಖಾನೆಗಳು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ತಡರಾತ್ರಿಯವರೆಗೆ ಸಭೆ ನಡೆಸಲಾಗಿದೆ. ರೈತರು ದೇಶದ ಸಂಪತ್ತು. ಅವರ ಜೀವನೋಪಾಯವನ್ನು ರಕ್ಷಿಸಬೇಕು. ರೈತರು ಮತ್ತು ಸಕ್ಕರೆ ಕಾರ್ಖಾನೆಗಳು ಪರಸ್ಪರ ಅವಲಂಬಿತವಾಗಿವೆ. ಹೀಗಾಗಿ, ಇಬ್ಬರ ಹಿತಾಸಕ್ತಿಗಳನ್ನೂ ಗಮನದಲ್ಲಿಟ್ಟುಕೊಳ್ಳಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಕರ್ನಾಟಕದ ಸುಮಾರು 80 ಸಕ್ಕರೆ ಕಾರ್ಖಾನೆಗಳ ಪ್ರತಿನಿಧಿಗಳು ತಮ್ಮ ಸಮಸ್ಯೆಗಳನ್ನು ಮುಂದಿಟ್ಟಿದ್ದಾರೆ. ಕಳೆದೊಂದು ದಶಕದಿಂದ ಸಕ್ಕರೆ ಬೆಲೆಯಲ್ಲಿ ಗಮನಾರ್ಹ ಏರಿಕೆಯಾಗಿಲ್ಲ. ಕಬ್ಬು ಅರೆಯುವ ಕಾರ್ಯಾಚರಣೆ ಆರಂಭವಾಗುವುದು ವಿಳಂಬವಾಗುತ್ತಿರುವುದರಿಂದ ಹೊಲಗಳಲ್ಲೇ ಕಬ್ಬು ಒಣಗುವ ಆತಂಕವೂ ಎದುರಾಗಿದೆ ಎಂದು ಪ್ರತಿನಿಧಿಗಳು ಹೇಳಿದ್ದಾರೆ.
ರಾಷ್ಟ್ರೀಕೃತ ಬ್ಯಾಂಕ್‌ಗಳಿಂದ ಸಾಲ ಪಡೆಯಲು ಸಾಧ್ಯವಾಗುತ್ತಿಲ್ಲ. ಹೀಗಾಗಿ, ಹೆಚ್ಚಿನ ಬಡ್ಡಿದರದಲ್ಲಿ ಸಹಕಾರಿ ಸಂಸ್ಥೆಗಳಿಂದ ಸಾಲ ಪಡೆಯಬೇಕಾದ ಅನಿವಾರ್ಯತೆ ಎದುರಾಗಿದೆ ಎಂದು ಕಾರ್ಖಾನೆಗಳ ಪ್ರತಿನಿಧಿಗಳು ಸಭೆಯಲ್ಲಿ ವಿವರಿಸಿದ್ದಾರೆ.
ಸಕ್ಕರೆ ಬೆಲೆ ಹೆಚ್ಚಿಸುವ ವಿಚಾರವನ್ನು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಗಮನಕ್ಕೆ ತಂದಿದ್ದು, ಬೆಲೆ ಪರಿಷ್ಕರಣೆ ಮಾಡುವ ಸಾಧ್ಯತೆ ಕುರಿತು ಅವರು ಸಕಾರಾತ್ಮಕ ಭರವಸೆ ನೀಡಿದ್ದಾರೆ. ಸಕ್ಕರೆ ಬೆಲೆ ನಿಗದಿಪಡಿಸುವುದು ಹಾಗೂ ಮಾರಾಟಕ್ಕಾಗಿ ಎರಡು ಪ್ರತ್ಯೇಕ ವರ್ಗಗಳನ್ನು ರೂಪಿಸುವ ಕುರಿತು ಕೇಂದ್ರ ಸರ್ಕಾರ ನಿರ್ಧಾರ ಕೈಗೊಳ್ಳಬೇಕಿದೆ. ಈ ವಿಚಾರಗಳಲ್ಲಿ ಸ್ಪಷ್ಟತೆ ಇಲ್ಲದಿರುವುದರಿಂದ ಸದ್ಯಕ್ಕೆ ಕಬ್ಬಿಗೆ ನಿಗದಿತ ಬೆಲೆ ಘೋಷಿಸಲು ರಾಜ್ಯ ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ ಎಂದು ತಿಳಿಸಿದರು.
ಸಮಸ್ಯೆ ಬಗೆಹರಿಸುವ ಉದ್ದೇಶದಿಂದ ಕಬ್ಬು ಬೆಳೆಗಾರರು, ಸಕ್ಕರೆ ಕಾರ್ಖಾನೆಗಳು ಮತ್ತು ರಾಜ್ಯ ಸರ್ಕಾರದ ನಡುವೆ ತ್ರಿಪಕ್ಷೀಯ ಒಪ್ಪಂದ ಮಾಡಿಕೊಳ್ಳಲು ಪ್ರಯತ್ನಿಸುವ ನಿರ್ಧಾರ ಕೈಗೊಳ್ಳಲಾಗಿದೆ. ರೈತರ ಸಮಸ್ಯೆಗಳನ್ನು ಪರಿಹರಿಸಲು ಸರ್ಕಾರ ಬದ್ಧವಾಗಿದೆ, ಪ್ರಸ್ತುತ ಪರಿಸ್ಥಿತಿಯಲ್ಲಿ ರೈತರಿಗೆ ನೇರವಾಗಿ ಆರ್ಥಿಕ ನೆರವು ನೀಡುವುದು ಕಷ್ಟಕರವಾಗಿದೆ ಎಂದು ಹೇಳಿದರು.