ಬೆಂಗಳೂರು: ಬೆಂಗಳೂರಿನ ತಂತ್ರಜ್ಞಾನ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗಾವಕಾಶ ನಿರಾಕರಿಸಲಾಗುತ್ತಿದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ, ಐಟಿ-ಬಿಟಿ ಕಂಪನಿಗಳಿಗೆ ಭೇಟಿ ನೀಡುವುದು ಅಥವಾ ಕಾನೂನನ್ನು ಕೈಗೆತ್ತಿಕೊಳ್ಳುವಂತಹ ಕ್ರಮಗಳಿಗೆ ಮುಂದಾಗದಂತೆ ಕನ್ನಡಪರ ಸಂಘಟನೆಗಳು ಮತ್ತು ಗುಂಪುಗಳಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮನವಿ ಮಾಡಿದ್ದಾರೆ.
ಇಂತಹ ಸಮಸ್ಯೆಗಳನ್ನು ಮಾತುಕತೆ ಮೂಲಕ ಹಾಗೂ ಕಾನೂನಿನ ಚೌಕಟ್ಟಿನೊಳಗೆ ಬಗೆಹರಿಸಿಕೊಳ್ಳಬೇಕು ಎಂದು ಒತ್ತಿಹೇಳಿದ ಡಿ ಕೆ ಶಿವಕುಮಾರ್, ನೇಮಕಾತಿ ಪ್ರಕ್ರಿಯೆಯಲ್ಲಿ ಸ್ಥಳೀಯ ಕನ್ನಡಿಗ ಅಭ್ಯರ್ಥಿಗಳನ್ನು ಕಡೆಗಣಿಸಲಾಗುತ್ತಿದೆ ಎಂಬ ದೂರುಗಳನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ತಿಳಿಸಿದ್ದಾರೆ.
ಈ ದೂರುಗಳನ್ನು ಪರಿಶೀಲಿಸಿ, ಸ್ಥಳೀಯ ಅಭ್ಯರ್ಥಿಗಳ ವಿರುದ್ಧ ತಾರತಮ್ಯ ಎಸಗಿರುವುದು ಕಂಡುಬಂದಲ್ಲಿ ಅಂತಹ ಕಂಪನಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.
ಕನ್ನಡಿಗರ ಹಕ್ಕುಗಳು, ಗೌರವ ಮತ್ತು ಉದ್ಯೋಗಾವಕಾಶಗಳು ನಮ್ಮ ಸರ್ಕಾರಕ್ಕೆ ಅತ್ಯಂತ ಮಹತ್ವದ್ದಾಗಿವೆ. ನಮ್ಮ ರಾಜ್ಯದ ಯುವಜನರ ವಿರುದ್ಧ ಉದ್ದೇಶಪೂರ್ವಕವಾಗಿ ಯಾವುದೇ ತಾರತಮ್ಯ ಎಸಗುವುದನ್ನು ಸಹಿಸುವುದಿಲ್ಲ ಎಂದು ಡಿ ಕೆ ಶಿವಕುಮಾರ್ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.
ಬೆಂಗಳೂರಿನ ಐಟಿ ವಲಯದಲ್ಲಿ ಕನ್ನಡಿಗರ ವಿರುದ್ಧ ತಾರತಮ್ಯ ನಡೆಯುತ್ತಿದೆ ಎಂದು ಆರೋಪಿಸುವ ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಬೆನ್ನಲ್ಲೇ ಸಿಎಂ ಈ ಹೇಳಿಕೆ ನೀಡಿದ್ದಾರೆ.
ಯುವತಿಯೊಬ್ಬರು, ತಮ್ಮ ರೆಸ್ಯೂಮ್ನಲ್ಲಿ ಕನ್ನಡ ಭಾಷೆಯ ಉಲ್ಲೇಖ ಮಾಡಿದ ಅಭ್ಯರ್ಥಿಗಳನ್ನು ಕಂಪನಿಗಳು ತಿರಸ್ಕರಿಸುತ್ತಿವೆ ಹಾಗೂ ಕ್ಯಾಂಪಸ್ ನೇಮಕಾತಿ ಪ್ರಕ್ರಿಯೆಯಲ್ಲಿ ಇತರ ರಾಜ್ಯಗಳ ಅಭ್ಯರ್ಥಿಗಳಿಗೆ ಆದ್ಯತೆ ನೀಡುತ್ತಿವೆ ಎಂದು ಇತ್ತೀಚೆಗೆ ಆರೋಪಿಸಿದ್ದಾರೆ. ಕರ್ನಾಟಕದ ಹೊರಗಿನ ಅಭ್ಯರ್ಥಿಗಳನ್ನು ಕಡಿಮೆ ವೇತನಕ್ಕೆ ನೇಮಕ ಮಾಡಿಕೊಳ್ಳುವ ಮೂಲಕ ಸ್ಥಳೀಯ ಪದವೀಧರರಿಗೆ ಉದ್ಯೋಗಾವಕಾಶಗಳನ್ನು ಕಡಿಮೆ ಮಾಡಲಾಗುತ್ತಿದೆ ಎಂದೂ ಅವರು ದೂರಿದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿ, ತಾಯ್ನುಡಿಯ ಆಧಾರದ ಮೇಲೆ ಯಾವುದೇ ತಾರತಮ್ಯವನ್ನು ಸಹಿಸುವುದಿಲ್ಲ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ಎಸ್. ತಂಗಡಗಿ ಹೇಳಿದ್ದಾರೆ.
ಅರ್ಹತೆ ಇಲ್ಲದ ಕಾರಣಕ್ಕೆ ಉದ್ಯೋಗ ನಿರಾಕರಿಸುವುದೇ ಬೇರೆ, ಕನ್ನಡ ಮಾತೃಭಾಷೆ ಎಂಬ ಒಂದೇ ಕಾರಣಕ್ಕೆ ಉದ್ಯೋಗ ನಿರಾಕರಿಸುವುದೇ ಬೇರೆ ಎಂದು ಅವರು ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.
ಈ ವಿವಾದವು 2024ರ ಕರ್ನಾಟಕ ಸ್ಥಳೀಯ ಅಭ್ಯರ್ಥಿಗಳ ಕೈಗಾರಿಕೆಗಳು, ಕಾರ್ಖಾನೆಗಳು ಮತ್ತು ಇತರ ಸಂಸ್ಥೆಗಳಲ್ಲಿ ಉದ್ಯೋಗ ಮಸೂದೆಯ ಕುರಿತ ಚರ್ಚೆಯನ್ನು ಮತ್ತೆ ಮುನ್ನೆಲೆಗೆ ತಂದಿದೆ.
ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ 2024ರ ಜುಲೈನಲ್ಲಿ ಈ ಮಸೂದೆಗೆ ಅನುಮೋದನೆ ನೀಡಿತ್ತು. ಇದರ ಪ್ರಕಾರ, ಆಡಳಿತಾತ್ಮಕ ಹುದ್ದೆಗಳಲ್ಲಿ ಸ್ಥಳೀಯರಿಗೆ ಶೇ.50ರಷ್ಟು ಹಾಗೂ ಆಡಳಿತಾತ್ಮಕವಲ್ಲದ ಹುದ್ದೆಗಳಲ್ಲಿ ಶೇ.70ರಿಂದ 75ರಷ್ಟು ಮೀಸಲಾತಿ ಕಲ್ಪಿಸುವ ಪ್ರಸ್ತಾವನೆ ಇತ್ತು. ಅಲ್ಲದೆ, ಗ್ರೂಪ್ ಸಿ ಮತ್ತು ಡಿ ಹುದ್ದೆಗಳಲ್ಲಿ ಶೇ.100ರಷ್ಟು ಮೀಸಲಾತಿ ಒದಗಿಸಲು ಉದ್ದೇಶಿಸಲಾಗಿತ್ತು.
ಆದರೆ, ನೇಮಕಾತಿಯಲ್ಲಿ ನಮ್ಯತೆ ಕಡಿಮೆಯಾಗಲಿದೆ ಹಾಗೂ ಕರ್ನಾಟಕದ ಹೂಡಿಕೆ ವಾತಾವರಣದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು ಎಂಬ ಆತಂಕ ವ್ಯಕ್ತಪಡಿಸಿ ಉದ್ಯಮ ವಲಯದ ಪ್ರತಿನಿಧಿಗಳು ತೀವ್ರ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮಸೂದೆಯನ್ನು ತಡೆಹಿಡಿದಿತ್ತು.
ಸರ್ಕಾರದ ಬೆಂಬಲ ಪಡೆಯುವ ಕೈಗಾರಿಕೆಗಳು ಅರ್ಹ ಕನ್ನಡಿಗರಿಗೆ ಅವರ ಕೌಶಲ್ಯ ಮತ್ತು ವಿದ್ಯಾರ್ಹತೆಗೆ ಅನುಗುಣವಾಗಿ ಸೂಕ್ತ ಉದ್ಯೋಗಾವಕಾಶಗಳನ್ನು ಒದಗಿಸಬೇಕು ಎಂದು ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ್ ಹೇಳಿದ್ದಾರೆ.