ಬೆಂಗಳೂರು: ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ (ಮೆಜೆಸ್ಟಿಕ್) ರೈಲು ನಿಲ್ದಾಣದಲ್ಲಿ ತಡರಾತ್ರಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಪ್ಲಾಟ್‌ಫಾರ್ಮ್ ನಂ. 1ರಲ್ಲಿ ನಿಲ್ಲಿಸಲಾಗಿದ್ದ ರೈಲಿನ ಖಾಲಿ ಬೋಗಿಯೊಂದು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.
ರಾತ್ರಿ ಸುಮಾರು 11.30ರ ವೇಳೆಗೆ ಬೋಗಿಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ನೋಡನೋಡುತ್ತಿದ್ದಂತೆಯೇ ಬೆಂಕಿಯ ಕೆನ್ನಾಲಿಗೆ ಇಡೀ ಬೋಗಿಯನ್ನು ಆವರಿಸಿಕೊಂಡಿದ್ದು, ದಟ್ಟ ಹೊಗೆ ಆವರಿಸಿತ್ತು.
ಅದೃಷ್ಟವಶಾತ್ ಬೆಂಕಿ ಕಾಣಿಸಿಕೊಂಡ ಸಂದರ್ಭದಲ್ಲಿ ಬೋಗಿಯಲ್ಲಿ ಯಾವುದೇ ಪ್ರಯಾಣಿಕರು ಇರಲಿಲ್ಲ. ಹೀಗಾಗಿ ಭಾರಿ ಅನಾಹುತ ತಪ್ಪಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎನ್ನಲಾಗಿದೆ.
ಅಗ್ನಿಅವಘಡಕ್ಕೆ ಶಾರ್ಟ್ ಸರ್ಕ್ಯೂಟ್ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ರೈಲ್ವೆ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿ ಪರಿಶೀಲನೆ ನಡೆಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಬೆಂಕಿ ಅವಘಡಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ತನಿಖೆ ಮುಂದುವರಿಸಿದ್ದಾರೆ.