ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಕೊತ್ತನೂರು ಗೇಟ್ ಬಳಿ ಸೋಮವಾರ ಓಮ್ನಿ ಕಾರು ಮತ್ತು ಮಿನಿ ಗೂಡ್ಸ್ ವಾಹನದ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಭೀಕರ ಅಪಘಾತದಲ್ಲಿ ಮೂವರು ಮಹಿಳೆಯರು ಮೃತಪಟ್ಟಿದ್ದಾರೆ.
ಮೃತರನ್ನು ಚಿಂತಾಮಣಿ ತಾಲೂಕಿನ ಮಲ್ಲಿಕಾರ್ಜುನಪುರ ಗ್ರಾಮದ ರೂಪಾ (30), ರತ್ನಮ್ಮ (45) ಹಾಗೂ ಮುನಿಚೆನ್ನಮ್ಮ (40) ಎಂದು ಗುರುತಿಸಲಾಗಿದೆ.
ಮಲ್ಲಿಕಾರ್ಜುನಪುರ ಗ್ರಾಮದಿಂದ ಹುಜುಗೂರು ಗ್ರಾಮಕ್ಕೆ ಹೂ ಕಟಾವು ಕೆಲಸಕ್ಕೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಓಮ್ನಿ ಕಾರಿನಲ್ಲಿ ಸುಮಾರು 10 ಮಂದಿ ಕೂಲಿ ಕಾರ್ಮಿಕರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಹೂ ಕಟಾವು ಕೆಲಸಕ್ಕಾಗಿ ಕಾರ್ಮಿಕರನ್ನು ಕರೆದುಕೊಂಡು ಹೋಗುತ್ತಿದ್ದ ರಾಮಚಂದ್ರಪ್ಪ ಎಂಬುವವರ ಕಾರಿಗೆ ಡಿಕ್ಕಿ ಹೊಡೆದಿದೆ.
ಅಪಘಾತದಲ್ಲಿ ಓಮ್ನಿ ಕಾರಿನ ಚಾಲಕ ಮನೋಜ್ ಸೇರಿದಂತೆ ಹಲವರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಶಿಡ್ಲಘಟ್ಟ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು, ಗಂಭೀರವಾಗಿ ಗಾಯಗೊಂಡಿರುವ ಚಾಲಕ ಮನೋಜ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕೆಲ ಮಹಿಳೆಯರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಈ ಸಂಬಂಧ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.