ಬೆಂಗಳೂರು: ಗಣೇಶ ಮೂರ್ತಿಗಳ ತಯಾರಿಕೆಯಲ್ಲಿ ಪರಿಸರಕ್ಕೆ ಹಾನಿಕಾರಕ ವಸ್ತುಗಳ ಬಳಕೆಗೆ ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಮುಖ್ಯ ಆಯುಕ್ತ ಎಂ. ಮಹೇಶ್ವರ ರಾವ್ ಮಂಗಳವಾರ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಸಾಯನಿಕ ಬಣ್ಣಗಳು, ಥರ್ಮಾಕೋಲ್ ಹಾಗೂ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಒಪಿ) ಬಳಸಿ ಗಣೇಶ ಮೂರ್ತಿಗಳ ತಯಾರಿಕೆ ಮತ್ತು ಮಾರಾಟವನ್ನು ನಿಷೇಧಿಸಲಾಗಿದೆ. ನಿಯಮ ಉಲ್ಲಂಘಿಸುವವರಿಗೆ ದಂಡ ವಿಧಿಸಲಾಗುವುದು, ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಹಾಗೂ ನಿಷೇಧಿತ ವಸ್ತುಗಳನ್ನು ವಶಪಡಿಸಿಕೊಳ್ಳಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಗಣೇಶ ಮೂರ್ತಿಗಳನ್ನು ಮನೆಯಲ್ಲೇ ಬಕೆಟ್‌ಗಳಲ್ಲಿ ವಿಸರ್ಜಿಸಿ, ವಿಸರ್ಜನೆಯ ಬಳಿಕ ಉಳಿಯುವ ಮಣ್ಣನ್ನು ತೋಟಗಾರಿಕೆ ಹಾಗೂ ಹೂವಿನ ಕುಂಡಗಳಿಗೆ ಬಳಸುವಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗುವುದು. ದೊಡ್ಡ ಗಾತ್ರದ ಗಣೇಶ ಮೂರ್ತಿಗಳ ವಿಸರ್ಜನೆಗಾಗಿ ಸೂಕ್ತ ಸ್ಥಳಗಳನ್ನು ಗುರುತಿಸಲಾಗುವುದು.
ಅಗತ್ಯವಿರುವ ಕಡೆ ಸಂಚಾರಿ ವಾಹನಗಳು, ತಾತ್ಕಾಲಿಕ ಟ್ಯಾಂಕರ್‌ಗಳು, ಡ್ರಮ್‌ಗಳು ಹಾಗೂ ಬ್ಯಾರಿಕೇಡ್‌ಗಳ ವ್ಯವಸ್ಥೆ ಮಾಡಲಾಗುವುದು. ಕೆರೆಗಳಲ್ಲಿ ಮಾಲಿನ್ಯ ಉಂಟಾಗದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಗಣೇಶ ಮೂರ್ತಿಗಳ ಪ್ರತಿಷ್ಠಾಪನೆಗೆ ಅನುಮತಿ ಪಡೆಯಲು ಪ್ರತಿ ವಾರ್ಡ್‌ಗೆ ಒಬ್ಬ ನೋಡಲ್ ಅಧಿಕಾರಿಯನ್ನು ಪಾಲಿಕೆಗಳಲ್ಲಿ ನೇಮಿಸಲಾಗುವುದು. “ಪಾಲಿಕೆ, ಪೊಲೀಸ್, ಬೆಸ್ಕಾಂ, ಅಗ್ನಿಶಾಮಕ ಹಾಗೂ ಪರಿಸರ ಇಲಾಖೆಗಳ ಸಮನ್ವಯದೊಂದಿಗೆ ಏಕಗವಾಕ್ಷಿ ವ್ಯವಸ್ಥೆ ಮೂಲಕ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಲಾಗುವುದು. ಸರ್ಕಾರದ ನಿಯಮಗಳು ಹಾಗೂ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (NGT) ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವ ಷರತ್ತಿನ ಮೇರೆಗೆ ಅನುಮತಿ ನೀಡಲಾಗುತ್ತದೆ ಎಂದು ಹೇಳಿದರು.
ಧ್ವನಿವರ್ಧಕಗಳ ಬಳಕೆಗೆ ಅನುಮತಿ ಪಡೆಯುವುದು ಹಾಗೂ ನಿಗದಿತ ಶುಲ್ಕ ಪಾವತಿಸುವುದು ಕಡ್ಡಾಯವಾಗಿರಲಿದೆ. ಈ ಎಲ್ಲ ಕ್ರಮಗಳ ಅನುಷ್ಠಾನವನ್ನು ಪಾಲಿಕೆಗಳ ಆಯುಕ್ತರು ಹಾಗೂ ಸಂಬಂಧಿಸಿದ ನೋಡಲ್ ಅಧಿಕಾರಿಗಳು ಮೇಲ್ವಿಚಾರಣೆ ಮಾಡಲಿದ್ದಾರೆ ಎಂದು ತಿಳಿಸಿದರು.