ಬೆಂಗಳೂರು: ಮೈಸೂರಿನ ಕಡೆಯ "ಪೇಟೆ ರೌಡಿ"ಯೊಬ್ಬ ಪೊಲೀಸರನ್ನು ಬೆದರಿಸುವ ಮಾತುಗಳನ್ನಾಡಿದ್ದಾನೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಅವರ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಶನಿವಾರ ಕಿಡಿಕಾರಿದ್ದಾರೆ.
ಅಸ್ತಿತ್ವ ಕಳೆದುಕೊಂಡ ಕತ್ತಲೆ ಜಗತ್ತಿನ ಆತ್ಮದಂತೆ ಪರಿತಪಿಸುತ್ತಿರುವ ಆ ವ್ಯಕ್ತಿ ವಾರಕ್ಕೊಮ್ಮೆ ಗೋಗರೆದು ಮಾಧ್ಯಮಗಳನ್ನು ಕರೆಸಿಕೊಂಡು ಅಸಂಬದ್ಧ ಹೇಳಿಕೆ ನೀಡುತ್ತಾ ಅಸ್ತಿತ್ವ ಉಳಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾನೆ ಎಂದು ಎಕ್ಸ್ ನಲ್ಲಿ ಪ್ರಿಯಾಂಕ್ ಖರ್ಗೆ ಅವರು ಪೋಸ್ಟ್ ಮಾಡಿದ್ದಾರೆ.
"ಪೊಲೀಸ್ ಠಾಣೆಗೆ ನುಗ್ಗುತ್ತೇನೆ" ಎಂದಿರುವ ಆ ವ್ಯಕ್ತಿಗೆ ಮುಕ್ತ ಆಹ್ವಾನವಿದೆ, ಪೊಲೀಸ್ ಠಾಣೆಗೆ ನುಗ್ಗಿದ ನಂತರ ಸೀದಾ ಪರಪ್ಪನ ಅಗ್ರಹಾರಕ್ಕೆ ನುಗ್ಗಿಸುವ ವ್ಯವಸ್ಥೆಯನ್ನು ಉಚಿತವಾಗಿ ಕಲ್ಪಿಸಲಾಗುವುದು ಎಂದು ಮಾಜಿ ಸಂಸದರಿಗೆ ಗೃಹ ಸಚಿವರು ಖಡಕ್ ಎಚ್ಚರಿಕೆ ನೀಡಿದ್ದಾರೆ.
ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸರ ಕರ್ತವ್ಯಕ್ಕೆ ಯಾರೇ ಅಡ್ಡಿಪಡಿಸಿದರೂ ಮುಲಾಜಿಲ್ಲದೆ ಕಾನೂನು ಕ್ರಮ ಜರುಗಿಸಲು ಸನ್ನದ್ದವಾಗಿದೆ ಗೃಹ ಇಲಾಖೆ, ಸೂಕ್ಷ್ಮ ಸಂದರ್ಭಗಳನ್ನು ಬಳಸಿಕೊಂಡು ಸಮಾಜದ ಸ್ವಾಸ್ಥ್ಯ ಕದಡುವ ಪ್ರಯತ್ನಗಳನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ.
ಪೊಲೀಸರ ನೈತಿಕ ಸ್ಥೈರ್ಯ ಕಸಿಯಲು ಬಿಡುವುದಿಲ್ಲ ಎಂದು ಪ್ರಿಯಾಂಕ್ ಖರ್ಗೆ ಗುಡುಗಿದ್ದಾರೆ.
ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ನಡೆದ ಶಾಂತಿ ಸಭೆಯಲ್ಲಿ ಮೈಸೂರು ಜಿಲ್ಲೆ ಟಿ. ನರಸೀಪುರ ಇನ್ಸ್ಪೆಕ್ಟರ್ ಧನಂಜಯ್ ಅವರು ಮಸೀದಿ ಮುಂದೆ ಪಟಾಕಿ ಸಿಡಿಸಿದ್ರೆ, ಗ್ರಹಚಾರ ಬಿಡಿಸ್ತೇನೆ ಎಂದು ಎಚ್ಚರಿಕೆ ನೀಡಿದ ವಿಡಿಯೋ ವೈರಲ್ ಆಗಿತ್ತು.
ಇನ್ಸ್ಪೆಕ್ಟರ್ ಧನಂಜಯ್ ಅವರ ಮಾತು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆಯೇ ಮಾಜಿ ಸಂಸದ ಪ್ರತಾಪ್ ಸಿಂಹ ಅವರು, ಇನ್ನೊಂದು ಸಲ ಆ ರೀತಿ ಮಾತನಾಡಿದ್ರೆ ಠಾಣೆಗೆ ನುಗ್ಗುತ್ತೇನೆ ಎಂದು ಎಚ್ಚರಿಕೆ ನೀಡಿದ್ದರು.
ಈ ಕುರಿತು ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಪ್ರತಾಪ್ ಸಿಂಹ, ಇನ್ಸ್ ಪೆಕ್ಟರ್ ಅವರು ರೋಡ್ ಸೈಡ್ ತರ್ಲೆ ರೀತಿ ಮಾತನಾಡಿದ್ದಾರೆ. ಅದು ಸರಿಯಲ್ಲ ಎಂದಿದ್ದರು.