ತುಮಕೂರು: ಮುಂದಿನ ತಿಂಗಳು ದಸರಾ ಆಚರಣೆಯ ನೆಪದಲ್ಲಿ ಯಾವುದೇ ಸರ್ಕಾರಿ ಕೆಲಸವನ್ನು ನಿಲ್ಲಿಸಬಾರದು ಎಂದು ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿರುವುದಾಗಿ ಉಪ ಮುಖ್ಯಮಂತ್ರಿ ಡಾ ಜಿ ಪರಮೇಶ್ವರ್ ತಿಳಿಸಿದ್ದಾರೆ.
ಯಾವುದೇ ಸಾರ್ವಜನಿಕ ಕೆಲಸ ಅಥವಾ ಸರ್ಕಾರಿ ಕೆಲಸವನ್ನು ದಸರಾ ನೆಪದಲ್ಲಿ ನಿಲ್ಲಿಸಬಾರದು. ಕಂದಾಯ ಇಲಾಖೆ ಸಚಿವನಾಗಿ ಈ ಬಗ್ಗೆ ಆದೇಶ ನೀಡಿದ್ದೇನೆ. ಎಸ್‌ಐಆರ್ ಕಾರ್ಯಕ್ಕೆ ಜಿಲ್ಲಾಧಿಕಾರಿ, ತಹಸೀಲ್ದಾರ್ ಹಾಗೂ ವಿಎಒಗಳು ತಮ್ಮ ಕರ್ತವ್ಯ ನಿರ್ವಹಿಸಲೇಬೇಕು. ಕೆಲಸ ಮಾಡದಿದ್ದಲ್ಲಿ ಚುನಾವಣಾ ಆಯೋಗ ಕ್ರಮ ಕೈಗೊಳ್ಳಲಿದೆ. ಸರ್ಕಾರದ ಪ್ರಮುಖ ಕೆಲಸಗಳನ್ನು ಯಾವುದೇ ಕಾರಣಕ್ಕೂ ಸ್ಥಗಿತಗೊಳಿಸದೆ ದಸರಾ ಆಚರಣೆ ನಡೆಸಬೇಕು ಎಂದು ಎಚ್ಚರಿಕೆ ನೀಡಿದರು.
ಬರ ಪರಿಸ್ಥಿತಿ: ಹೆಚ್ಚುವರಿ ತಾಲೂಕುಗಳು ಸೇರ್ಪಡೆ
ರಾಜ್ಯದ ಬರ ಪರಿಸ್ಥಿತಿ ಕುರಿತು ಮಾತನಾಡಿದ ಡಾ ಪರಮೇಶ್ವರ್, ಈಗಾಗಲೇ 101 ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಲಾಗಿದೆ. ನಾಳೆ ಮತ್ತೊಂದು ಅಧಿಸೂಚನೆ ಹೊರಬರುವ ಸಾಧ್ಯತೆ ಇದ್ದು, ಹೆಚ್ಚುವರಿ ತಾಲೂಕುಗಳನ್ನು ಕೂಡ ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸಲಾಗುವುದು. ಮುಖ್ಯಮಂತ್ರಿ ಅಥವಾ ಸಂಬಂಧಪಟ್ಟ ಸಚಿವರೊಂದಿಗೆ ಕೇಂದ್ರ ಗೃಹ ಸಚಿವರನ್ನು ಭೇಟಿ ಮಾಡಿ ರಾಜ್ಯದ ಬರ ಪರಿಸ್ಥಿತಿಯ ಕುರಿತು ವರದಿ ಸಲ್ಲಿಸಲಾಗುವುದು. ತುಮಕೂರು ಜಿಲ್ಲೆಯಲ್ಲಿ ಒಟ್ಟು 10 ತಾಲೂಕುಗಳಿದ್ದು, ಬರ ಪರಿಸ್ಥಿತಿಗೆ ಸಂಬಂಧಿಸಿದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.
ರೈತರಿಗೆ ಮೇವು- ಬೆಳೆ ಖರೀದಿ ನೆರವು
ಮಳೆ ಹಾಗೂ ಮೇವು ಕೊರತೆಯ ಹಿನ್ನೆಲೆಯಲ್ಲಿ ಜನರು ಊರು ಬಿಟ್ಟರೂ ಪರಿಸ್ಥಿತಿಯ ಕುರಿತು ದಿನನಿತ್ಯದ ಮಾಹಿತಿ ಪಡೆಯಲಾಗುತ್ತಿದೆ. ಈಗಾಗಲೇ ಒಂದು ತಿಂಗಳಿನಿಂದ ಮೇವು ಕಿಟ್‌ಗಳನ್ನು ನೀಡಲಾಗುತ್ತಿದೆ. ಬೆಳೆ ಹಾಕಿದ ಬಳಿಕ ಸುಮಾರು 15 ದಿನಗಳಲ್ಲಿ ಬೆಳೆ ಸಿದ್ಧವಾಗುವ ಸಂದರ್ಭದಲ್ಲಿ, ರೈತರು ಹೆಚ್ಚಿನ ಪ್ರಮಾಣದಲ್ಲಿ ಬೆಳೆದ ಉತ್ಪನ್ನಗಳನ್ನು ಸರ್ಕಾರ ಖರೀದಿಸುವ ಮೂಲಕ ರೈತರಿಗೆ ಆರ್ಥಿಕ ನೆರವು ನೀಡಲಾಗುವುದು ಎಂದರು.
ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್
ರಾಜ್ಯದಲ್ಲಿ ಉದ್ದೇಶಪೂರ್ವಕವಾಗಿ ಲೋಡ್‌ಶೆಡ್ಡಿಂಗ್ ಮಾಡಲಾಗುತ್ತಿಲ್ಲ. ವಿದ್ಯುತ್ ಉತ್ಪಾದನೆಯಲ್ಲಿ ವ್ಯತ್ಯಯ ಉಂಟಾಗಿರುವ ಹಿನ್ನೆಲೆ ಲೋಡ್‌ಶೆಡ್ಡಿಂಗ್ ಅನಿವಾರ್ಯವಾಗಿದೆ. ಹೈಡ್ರೋಜನ್ ಜನರೇಟರ್ ಪ್ಲಾಂಟ್ ಸಂಪೂರ್ಣವಾಗಿ ಸ್ಥಗಿತಗೊಂಡಿರುವುದರಿಂದ ವಿದ್ಯುತ್ ಉತ್ಪಾದನೆಯಲ್ಲಿ ವ್ಯತ್ಯಯ ಉಂಟಾಗಿದೆ. ಇದರ ಪರಿಣಾಮವಾಗಿ ಕೆಲವು ಕಡೆಗಳಲ್ಲಿ ಲೋಡ್‌ಶೆಡ್ಡಿಂಗ್ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸ್ಪಷ್ಟಪಡಿಸಿದರು.
ತುಮಕೂರು ದಸರಾ ಅದ್ಧೂರಿ ಆಚರಣೆಗೆ ಸಿದ್ಧತೆ
ನಾಡಹಬ್ಬ ದಸರಾ ಆಚರಣೆಗೆ ತುಮಕೂರು ಜಿಲ್ಲೆಯಲ್ಲಿ ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಮೈಸೂರಿನಲ್ಲಿ ನಡೆಯುವ ದಸರಾ ಮಾದರಿಯಲ್ಲಿ, ಹಿಂದಿನ ಪದ್ಧತಿ ಮತ್ತು ನಿಯಮಗಳನ್ನು ಪಾಲಿಸಿಕೊಂಡು ಕಳೆದ ಎರಡು ವರ್ಷಗಳಿಂದ ತುಮಕೂರಿನಲ್ಲಿ ದಸರಾ ಆಚರಿಸಲಾಗುತ್ತಿದೆ. ದಸರಾವನ್ನು ಕೇವಲ ಒಂದು ಕಾರ್ಯಕ್ರಮವಾಗಿ ಸೀಮಿತಗೊಳಿಸದೆ, ಊರ ಹಬ್ಬವಾಗಿ, ನಾಡ ಹಬ್ಬವಾಗಿ ಎಲ್ಲರೂ ಭಾಗವಹಿಸುವಂತೆ ಆಚರಿಸುವ ಉದ್ದೇಶ ಹೊಂದಲಾಗಿದೆ ಎಂದರು.