ಮಂಗಳೂರು: ಮಂಗಳೂರಿನ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಬಿಬಿಎ ಪ್ರಥಮ ವರ್ಷದ ಇಬ್ಬರು ವಿದ್ಯಾರ್ಥಿಗಳ ಮೇಲೆ ಕಾಲೇಜಿನ ಹಿರಿಯ ವಿದ್ಯಾರ್ಥಿಗಳು ರ‍್ಯಾಗಿಂಗ್ ಮಾಡಿ, ಅಮಾನುಷವಾಗಿ ಬೆಲ್ಟ್ ನಿಂದ ಹಲ್ಲೆ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ.
ಕೇರಳ ಮೂಲದ ಬಿಬಿಎ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಐವರು ದ್ವಿತೀಯ ವರ್ಷದ ಕಾಲೇಜು ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ಇಬ್ಬರು ಪ್ರಥಮ ವರ್ಷದ ಬಿಬಿಎ ವಿದ್ಯಾರ್ಥಿಗಳು, ಸೆಪ್ಟೆಂಬರ್ 19 ರಂದು ಪಾಂಡೇಶ್ವರ ಪ್ರದೇಶದಲ್ಲಿರುವ ತಮ್ಮ ಕಾಲೇಜಿನ ಬಳಿ ನಡೆದುಕೊಂಡು ಹೋಗುತ್ತಿದ್ದಾಗ, ಹಿರಿಯ ವಿದ್ಯಾರ್ಥಿಗಳ ಗುಂಪೊಂದು ಅವರನ್ನು ಬೈಕ್‌ಗಳಲ್ಲಿ ಕರೆದೊಯ್ದಿತ್ತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಆರೋಪಿಗಳು ಆ ಇಬ್ಬರು ವಿದ್ಯಾರ್ಥಿಗಳನ್ನು ನಿರ್ಜನ ಪ್ರದೇಶವೊಂದಕ್ಕೆ ಕರೆದೊಯ್ದು, ಅವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ದೂರಿನ ಪ್ರಕಾರ, ವಿದ್ಯಾರ್ಥಿಗಳ ಬಟ್ಟೆ ಬಿಚ್ಚಿಸಿ, ಅವರ ಮೇಲೆ ಬೆಲ್ಟ್ ಹಾಗೂ ಇತರ ಲೋಹದ ಸರಳುಗಳು ಮತ್ತು ಪೈಪ್‌ಗಳಿಂದ ಹಲ್ಲೆ ನಡೆಸಲಾಗಿದೆ. ಅಲ್ಲದೆ ಈ ಘಟನೆಯ ಬಗ್ಗೆ ಕಾಲೇಜು ಆಡಳಿತ ಮಂಡಳಿಗೆ ಅಥವಾ ಪೊಲೀಸರಿಗೆ ದೂರು ನೀಡಿದರೆ ಗಂಭೀರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕಿದ್ದಾರೆ.
ನಂತರ ಗಾಯಗೊಂಡ ವಿದ್ಯಾರ್ಥಿಗಳು ಮನೆಗೆ ಮರಳಿ, ತಮ್ಮ ಪೋಷಕರ ಸಹಾಯದೊಂದಿಗೆ ಪಾಂಡೇಶ್ವರ ಪೊಲೀಸರಿಗೆ ದೂರು ನೀಡಿದ್ದಾರೆ. ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರ ಪ್ರಕಾರ, ಬಂಧಿತ ವಿದ್ಯಾರ್ಥಿಗಳನ್ನು ರಹಾನ್ ಎಂ.ಪಿ., ಮೊಹಮ್ಮದ್ ಉವೈಸ್, ಮೊಹಮ್ಮದ್ ಆದಿಲ್ ಯು.ಪಿ., ರೋಹನ್ ರಮೇಶ್ ಮತ್ತು ನಶೆದ್ ಅಮೀರ ಎಂದು ಗುರುತಿಸಲಾಗಿದೆ.
ಇವರೆಲ್ಲರೂ 19 ವರ್ಷ ವಯಸ್ಸಿನವರಾಗಿದ್ದು, ಮಂಗಳೂರಿನ ಖಾಸಗಿ ಕಾಲೇಜೊಂದರಲ್ಲಿ ದ್ವಿತೀಯ ವರ್ಷದ ಬಿಬಿಎ(ಲಾಜಿಸ್ಟಿಕ್ಸ್) ವ್ಯಾಸಂಗ ಮಾಡುತ್ತಿದ್ದಾರೆ.
ರಹಾನ್ ಮತ್ತು ರೋಹನ್ ಕೇರಳದ ಕಣ್ಣೂರು ಜಿಲ್ಲೆಯ ಪಯ್ಯನೂರಿನವರಾಗಿದ್ದರೆ, ಉವೈಸ್ ಕಾಸರಗೋಡಿನವರು, ಆದಿಲ್ ಕೋಝಿಕ್ಕೋಡ್‌ನವರು ಮತ್ತು ನಶೆದ್ ಕಣ್ಣೂರು ಜಿಲ್ಲೆಯವರು ಎಂದು ಪೊಲೀಸರು ತಿಳಿಸಿದ್ದಾರೆ.
ಈ ಘಟನೆಯಲ್ಲಿ ಭಾಗಿಯಾಗಿರುವ ಇತರ ನಾಲ್ವರು ವಿದ್ಯಾರ್ಥಿಗಳಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ.