ಮಿರ್ಜಿ ಔಟ್, ಔರಾದ್ ಇನ್
ಬೆಂಗಳೂರು ನೂತನ ಪೊಲೀಸ್ ಆಯುಕ್ತರಾಗಿ ರಾಘವೇಂದ್ರ ಔರಾದ್ಕರ್ ಅವರನ್ನು ನೇಮಿಸಿ ಆದೇಶ ಹೊರಡಿಸಲಾಗಿದೆ.
ಬೆಂಗಳೂರು: ಬೆಂಗಳೂರು ನೂತನ ಪೊಲೀಸ್ ಆಯುಕ್ತರಾಗಿ ರಾಘವೇಂದ್ರ ಔರಾದ್ಕರ್ ಅವರನ್ನು ನೇಮಿಸಿ ಆದೇಶ ಹೊರಡಿಸಲಾಗಿದೆ.
ಕರ್ನಾಟಕ ವಿಧಾನಸಭಾ ಚುನಾವಣಾ ಹಿನ್ನಲೆಯಲ್ಲಿ ಬೆಂಗಳೂರು ಪೊಲೀಸ್ ಆಯುಕ್ತರಾಗಿದ್ದ ಜ್ಯೋತಿ ಪ್ರಕಾಶ್ ಮಿರ್ಜಿ ಅವರನ್ನು ವರ್ಗಾವಣೆ ಮಾಡಬೇಕೆಂದು ಕೋರಿತ್ತು. ಅಂತೆಯೇ ನೂತನ ಬೆಂಗಳೂರು ಪೊಲೀಸ್ ಆಯುಕ್ತರಿಗಾಗಿ ಮೂವರು ಐಪಿಎಸ್ ಅಧಿಕಾರಿಗಳ ಹೆಸರನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಅನಿಲ್ ಕುಮಾರ್ ಝಾ ಅವರು ಶಿಫಾರಸು ಮಾಡಿದ್ದರು. ರಾಜ್ಯ ಚುನಾವಣಾ ಆಯೋಗದ ಶಿಫಾರಸ್ಸಿನಂತೆ ಕೇಂದ್ರ ಚುನಾವಣಾ ಆಯೋಗ, ಜ್ಯೋತಿ ಪ್ರಕಾಶ್ ಮಿರ್ಜಿ ಅವರನ್ನು ಪೊಲೀಸ್ ಆಯುಕ್ತ ಹುದ್ದೆಯಿಂದ ತೆರವುಗೊಳಿಸಿತ್ತು.
ಝಾ ಶಿಫಾರಸ್ಸಿನಂತೆ ರಾಜ್ಯ ಗೃಹಕಾರ್ಯದರ್ಶಿಗಳಾಗಿರುವ ಐಪಿಎಸ್ ಅಧಿಕಾರಿ ರಾಘವೇಂದ್ರ ಔರಾದ್ ಕರ್ ಅವರನ್ನು ನೂತನ ಬೆಂಗಳೂರು ಪೊಲೀಸ್ ಆಯುಕ್ತರಾಗಿ ನೇಮಿಸಿ ಆದೇಶ ಹೊರಡಿಸಲಾಗಿದೆ. ಅಲ್ಲದೆ ನಗರದ ಎಲ್ಲ ಡಿಸಿಪಿ ಕಚೇರಿಗಳಿಗೆ ವೈರ್ಲೆಸ್ಗಳ ಮೂಲಕ ಈ ಬಗ್ಗೆ ಮಾಹಿತಿ ನೀಡಲಾಗಿದೆ.
ರಾಘವೇಂದ್ರ ಔರಾದ್ ಕರ್ ಅವರು ಇಂದು ಸಂಜೆ 7 ಗಂಟೆಗೆ ನೂತನ ಬೆಂಗಳೂರು ಪೊಲೀಸ್ ಆಯುಕ್ತರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.