ಥಾಣೆ ಕಟ್ಟಡ ಕುಸಿತ: ಸಾವಿನ ಸಂಖ್ಯೆ 41ಕ್ಕೆ ಏರಿಕೆ
ಥಾಣೆಯಲ್ಲಿ ಗುರುವಾರ ಸಂಭವಿಸಿದ ಏಳು ಅಂತಸ್ಥಿನ ಕಟ್ಟಡ ಕುಸಿತ ದುರ್ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ 41ಕ್ಕೇರಿದೆ.
ಮುಂಬೈ: ಥಾಣೆಯಲ್ಲಿ ಗುರುವಾರ ಸಂಭವಿಸಿದ ಏಳು ಅಂತಸ್ಥಿನ ಕಟ್ಟಡ ಕುಸಿತ ದುರ್ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ 41ಕ್ಕೇರಿದೆ.
ನಿನ್ನೆ ಸಂಭವಿಸಿದ ಕಟ್ಟಡ ಕುಸಿತ ಪ್ರಕರಣದಲ್ಲಿ ಈವರೆಗೂ 60 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಕಟ್ಟಡದ ಅವಶೇಷಗಳಡಿ ಮತ್ತಷ್ಟು ಜನರು ಸಿಲುಕಿರುವ ಶಂಕೆ ಇದ್ದು, ಅಗ್ನಿ ಶಾಮಕ ಪಡೆ ಮತ್ತು ಪೊಲೀಸ್ ಸಿಬ್ಬಂದಿಗಳು ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ.
ಘಟನೆಯಲ್ಲಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹಲವರ ಸ್ಥಿತಿ ಚಿಂತಾಜನಕವಾಗಿದೆ. ಸಣ್ಣಪುಟ್ಟ ಗಾಯಗಳಾಗಿದ್ದ 17 ಮಂದಿಯನ್ನು ಗುರುವಾರ ರಾತ್ರಿ ಡಿಸ್ಚಾರ್ಜ್ ಮಾಡಲಾಗಿದೆ ಎಂದು ವೈದ್ಯರು ಹೇಳಿದ್ದಾರೆ.
ಕಟ್ಟಡದ ಮಾಲೀಕರಾದ ಸಲೀಲ್ ಜಮದರ್ ಹಾಗು ಕಲೀಲ್ ಜಮದರ್ ಸಹೋದರರ ವಿರುದ್ಧ ಥಾಣೆ ಪೊಲೀಸರು ಐಪಿಸಿ ಸೆಕ್ಷನ್ 304ರ ಅಡಿಯಲ್ಲಿ ದೂರು ದಾಖಲಿಸಿಕೊಂಡಿದ್ದಾರೆ. ಆರೋಪಿಗಳು ಕುಟುಂಬ ಸಮೇತ ನಾಪತ್ತೆಯಾಗಿದ್ದು, ಇವರ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದ ಸ್ಥಳೀಯ ಆಯುಕ್ತ ಆರ್.ಎ. ರಾಜೀವ್ ಮತ್ತು ಪಿ. ವೇಲರಸು ಅವರು ಮಾದ್ಯಮಗಳೊಂದಿಗೆ ಮಾತನಾಡುತ್ತಾ ಕಟ್ಟಡ ಅಕ್ರಮವಾಗಿದ್ದು, ಕಟ್ಟಡ ನಿರ್ಮಾಣ ನಿಯಾಮವಳಿಗಳನ್ನು ಪಾಲಿಸದೇ ಕಟ್ಟಡವನ್ನು ನಿರ್ಮಾಣ ಮಾಡಲಾಗಿದೆ ಎಂದು ತಿಳಿಸಿದರು.
ಮಹಾರಾಷ್ಟ್ರದ ಮುಖ್ಯಮಂತ್ರಿ ಪೃಥ್ವಿರಾಜ್ ಚೌಹಾಣ್ ಹಾಗೂ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.