ಬಿ ಫಾರ್ಮ್ ಬರೋವರೆಗು ಏನು ಹೇಳಲ್ಲ: ಅಂಬರೀಶ್
ತಮ್ಮ 'ಕೈ'ಗೆ ಬಿ ಫಾರ್ಮ್ ಬರುವವರೆಗೂ ಏನು ಹೇಳಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ನಟ ಅಂಬರೀಶ್ ಹೇಳಿದ್ದಾರೆ.
ಮಂಡ್ಯ: ತಮ್ಮ 'ಕೈ'ಗೆ ಬಿ ಫಾರ್ಮ್ ಬರುವವರೆಗೂ ಏನು ಹೇಳಲು ಸಾಧ್ಯವಿಲ್ಲ ಎಂದು ಮಂಡ್ಯ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿರುವ ನಟ ಅಂಬರೀಶ್ ಹೇಳಿದ್ದಾರೆ.
ವಿಧಾನಸಭೆ ಚುನಾವಣೆ ಘೋಷಣೆಯಾದ ಬಳಿಕ ಮೊದಲ ಬಾರಿಗೆ ಮಂಡ್ಯ ಕ್ಷೇತ್ರಕ್ಕೆ ಆಗಮಿಸಿರುವ ನಟ ಅಂಬರೀಶ್, ಇಂದು ಕಾಂಗ್ರೆಸ್ ಕಾರ್ಯಕರ್ತರು ಮತ್ತು ತಮ್ಮ ಅಭಿಮಾನಿಗಳನ್ನು ಭೇಟಿ ಮಾಡಿ ಚರ್ಚಿಸಿದರು. ಭೇಟಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅಂಬಿ, ತಮಗಿನ್ನೂ ಟಿಕೆಟ್ ನೀಡುವ ಕುರಿತು ಹೈಕಮಾಂಡ್ ಧೃಡೀಕರಿಸಿಲ್ಲ ಎಂದು ಪರೋಕ್ಷವಾಗಿ ಹೇಳಿದರು.
'ಮಂಡ್ಯ ಕ್ಷೇತ್ರದಿಂದ ತಮಗೆ ಶೇ. 99 ರಷ್ಟು ಟಿಕೆಟ್ ಸಿಗುವ ವಿಶ್ವಾಸವಿದೆ. ಆದರೆ ಕೈ ಗೆ ಬಿ ಫಾರ್ಮ್ ಸಿಗುವವರೆಗೂ ಏನು ಹೇಳಲು ಸಾಧ್ಯವಿಲ್ಲ. ಕಾಂಗ್ರೆಸ್ ಹೈಕಮಾಂಡ್ ಬಿ ಫಾರ್ಮ್ ನೀಡಿದರೆ ಏಪ್ರಿಲ್ 15 ರಂದು ನಾಮಪತ್ರ ಸಲ್ಲಿಸುತ್ತೇನೆ. ಚುನಾವಣೆಯಲ್ಲಿ ಗೆದ್ದರೆ ಜಿಲ್ಲೆಯಲ್ಲಿ ಪಕ್ಷ ಕಟ್ಟಲು ಪ್ರಯತ್ನಿಸುತ್ತೇನೆ ಎಂದು ನಟ ಅಂಬರೀಶ್ ಹೇಳಿದರು.
ಕಳೆದ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸಿದ್ದ ಅಂಬರೀಶ್ ಸೋಲನ್ನು ಅನುಭವಿಸಿದ್ದರು. ಇದಾದ ನಂತರ ಶಾಸಕ ಸ್ಥಾನಕ್ಕೆ ನಿಲ್ಲುವುದಾಗಿ ಘೋಷಣೆ ಮಾಡಿದ್ದ ಅಂಬಿ, ತಮ್ಮ ಕ್ಷೇತ್ರದ ಆಯ್ಕೆಯನ್ನು ಮಾತ್ರ ಹೈಕಮಾಂಡ್ ನಿರ್ಧರಿಸುತ್ತದೆ ಎಂದು ಹೇಳಿದ್ದರು. ಅಲ್ಲದೆ ತಾವು ಮಂಡ್ಯ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಎಂದೂ ಕೂಡ ಅಂಬರೀಶ್ ತಮ್ಮ ಮನದಾಳದ ಆಸೆಯನ್ನು ಹೊರಹಾಕಿದ್ದರು.
ಇತ್ತೀಚೆಗೆ ತಮ್ಮ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿರುವ ಕಾಂಗ್ರೆಸ್, ಇಂದು ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡುವ ಸಾಧ್ಯತೆ ಇದೆ. ಈ ಪಟ್ಟಿಯಲ್ಲಿ ಮೊದಲ ಪಟ್ಟಿಯಲ್ಲಿ ಘೋಷಣೆಯಾಗಿರುವ ಕ್ಷೇತ್ರಗಳನ್ನು ಹೊರತು ಪಡಿಸಿ, ಉಳಿದ ಎಲ್ಲ ಕ್ಷೇತ್ರಗಳಿಗೂ ಕಾಂಗ್ರೆಸ್, ತನ್ನ ಅಭ್ಯರ್ಥಿಗಳ ಹೆಸರನ್ನು ಬಹಿರಂಗಗೊಳಿಸಲಿದೆ ಎಂದು ಹೇಳಲಾಗುತ್ತಿದೆ.