ಬಳ್ಳಾರಿಯ ಬಳಿ ಭೀಕರ ರಸ್ತೆ ಅಪಘಾತ: 6 ಸಾವು
ಬಳ್ಳಾರಿಯ ಸೋಮಸಮುದ್ರದ ಬಳಿ ಭೀಕರ ರಸ್ತೆ ಅಪಘಾತವಾಗಿದ್ದು, ಘಟನೆಯಲ್ಲಿ ಆರು ಮಂದಿ ಪ್ರಯಾಣಿಕರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಬಳ್ಳಾರಿ: ಬಳ್ಳಾರಿಯ ಸೋಮಸಮುದ್ರದ ಬಳಿ ಭೀಕರ ರಸ್ತೆ ಅಪಘಾತವಾಗಿದ್ದು, ಘಟನೆಯಲ್ಲಿ ಆರು ಮಂದಿ ಪ್ರಯಾಣಿಕರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಬಳ್ಳಾರಿ ಸಮೀಪದ ಸೋಮಸಮುದ್ರದ ಬಳಿಯಿರುವ ರಾಜ್ಯ ಹೆದ್ದಾರಿಯಲ್ಲಿ ವೇಗವಾಗಿ ಸಂಚರಿಸುತ್ತಿದ್ದ ಕ್ರೂಸರ್ ವಾಹನ, ರಸ್ತೆಯ ತಿರುವಿನಲ್ಲಿ ತಡೆಗೋಡೆಗೆ ಡಿಕ್ಕಿ ಹೊಡೆದು ಮಗುಚಿಕೊಂಡಿದೆ. ವಾಹನ ಡಿಕ್ಕಿ ಹೊಡೆದ ರಭಸಕ್ಕೆ ಚಾಲಕ ಸೇರಿದಂತೆ 6 ಮಂದಿ ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ.
ಅಪಘಾತಕ್ಕೊಳಗಾದ ಕ್ರೂಸರ್ ವಾಹನ ಕುರುಗೋಡು ಪಟ್ಟಣದಿಂದ ಬಳ್ಳಾರಿಯ ಕಡೆಗೆ ಪ್ರಯಾಣಿಕರನ್ನು ರವಾನಿಸುತ್ತಿತ್ತು ಎಂದು ತಿಳಿದು ಬಂದಿದೆ. ಚಾಲಕನ ನಿರ್ಲಕ್ಷ್ಯತೆ ಮತ್ತು ಅತಿ ವೇಗವೇ ಅಪಘಾತಕ್ಕೆ ಕಾರಣ ಎಂದು ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ. ಘಟನೆಯಲ್ಲಿ ಮೂವರು ಪುರುಷರು, ಇಬ್ಬರು ಮಹಿಳೆಯರು ಮತ್ತು ಒಂದು ಮಗು ಸೇರಿ ಒಟ್ಟು ಆರು ಮಂದಿ ಸಾವಿಗೀಡಾಗಿದ್ದಾರೆ. ಅಲ್ಲದೆ ವಾಹನದಲ್ಲಿದ್ದ ಎಂಟು ಮಂದಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ವಾಹನದಲ್ಲಿ ಎಷ್ಟು ಮಂದಿ ಪ್ರಯಾಣಿಕರಿದ್ದರು ಎನ್ನುವ ಕುರಿತು ಖಚಿತ ಮಾಹಿತಿಗಳು ಲಭ್ಯವಾಗುತ್ತಿಲ್ಲ. ಆದರೆ ಪ್ರತ್ಯಕ್ಷದರ್ಶಿಗಳ ಪ್ರಕಾರ ವಾಹನದಲ್ಲಿ ಸುಮಾರು 15 ರಿಂದ 18 ಮಂದಿ ಪ್ರಯಾಣಿಕರಿದ್ದರು ಎಂದು ತಿಳಿದು ಬಂದಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಂಭವವಿದ್ದು, ಘಟನಾ ಸ್ಥಳಕ್ಕೆ ಮೂರು 108 ಆಂಬುಲೆನ್ಸ್ಗಳು ದೌಡಾಯಿಸಿವೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.